ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಸೋಮವಾರ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಇಂದು ಮಧ್ಯಾಹ್ನ 12 ಗಂಟೆಗೆ ವೇಳೆಗೆ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಅಂತ ಹೇಳಲಾಗುತ್ತಿದೆ. ಅವರನ್ನು ಆಸ್ಪತ್ರೆಯ (Hospital) ಖಾಸಗಿ ವಾರ್ಡ್ನಲ್ಲಿ ದಾಖಲಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಸಾಮಾನ್ಯ ತಪಾಸಣೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆಯೇ? ಅಥವಾ ಅವರ ಆರೋಗ್ಯದಲ್ಲಿ ಏರುಪೇರಾಗಿದೆಯೇ? ಎಂಬ ಮಾಹಿತಿ ಕೂಡ ಇನ್ನೂ ದೊರಕಿಲ್ಲ. ಭಾನುವಾರ ಸೀತಾರಾಮನ್ ಅವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಪ್ರಯುಕ್ತ ದೆಹಲಿಯ ‘ಸದೈವ್ ಅಟಲ್’ಗೆ ತೆರಳಿ ಪುಷ್ಪನಮನ ಸಲ್ಲಿಸಿದ್ದರು.
ಏಮ್ಸ್ ಆಸ್ಪತ್ರೆಗೆ ದಾಖಲಾದ ನಿರ್ಮಲಾ ಸೀತಾರಾಮನ್!
ಇಂದು ಮಧ್ಯಾಹ್ನ ಅವರು ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಏಮ್ಸ್ ಆಸ್ಪತ್ರೆ ಅಧಿಕಾರಿಗಳು ಮಾಹಿತಿ ನೀಡಿದ್ದು, ಯಾವುದೇ ಗಂಭೀರ ಸಮಸ್ಯೆಯಿಲ್ಲ ಎಂದು ಹೇಳಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಬಹಳ ಆರೋಗ್ಯವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನೂ ಬಜೆಟ್ 2023ಕ್ಕೆ ಇನ್ನೂ ಒಂದೇ ತಿಂಗಳು ಬಾಕಿ ಇರುವಾಗ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಆಸ್ಪತ್ರೆಗೆ ದಾಖಲಾಗಿರುವುದು ಆತಂಕ ಮೂಡಿಸಿದೆ.
ಪಿಪಿಇ ಕಿಟ್ ಧರಿಸಿ ಮತಚಲಾಯಿಸಿದ್ದ ಸಚಿವೆ!
ಈ ವರ್ಷದ ಜುಲೈನಲ್ಲಿ ನಿರ್ಮಲಾ ಸೀತಾರಾಮನ್ ಅವರಿಗೆ ಇಂಡೋನೇಷ್ಯಾದ ಬಾಲಿಯಿಂದ ಹಿಂದಿರುಗಿದ ನಂತರ ಕೋವಿಡ್ -19 ಗೆ ಪಾಸಿಟಿವ್ ದೃಢಪಟ್ಟಿತ್ತು. ಅಲ್ಲಿ ಅವರು ಜಿ 20 ಹಣಕಾಸು ಮಂತ್ರಿಗಳ ಸಭೆಯಲ್ಲಿ ಭಾಗವಹಿಸಿದ್ದರು. ಅದಾದ ಬಳಿಕ ಸಂಪೂರ್ಣ ಪಿಪಿಇ ಕಿಟ್ ಧರಿಸಿ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ ಚಲಾಯಿಸಿದ್ದರು.
ವಾರ್ಷಿಕ ಸಾಮಾನ್ಯ ತಪಾಸಣೆ!
ಆರೋಗ್ಯ ಪರಿಸ್ಥಿತಿ ಗಂಭೀರವಾಗೇನೂ ಇಲ್ಲ. ವಾರ್ಷಿಕ ಸಾಮಾನ್ಯ ತಪಾಸಣೆಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಸುದ್ದಿಸಂಸ್ಥೆ ಎಎನ್ಐ ಟ್ವೀಟ್ ಮಾಡಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ