ಬೆಂಗಳೂರು: ಕೋವಿಡ್ 19 ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಇಂದು ಉನ್ನತ ಮಟ್ಟದ ಅಧಿಕಾರಿಗಳು ಹಾಗೂ ಬೆಂಗಳೂರು ನಗರ ಸಚಿವರ ಸಭೆ ನಡೆಯಿತು.
ಉನ್ನತ ಮಟ್ಟದ ಅಧಿಕಾರಿ ಸಭೆಯಲ್ಲಿ ಉಪಮುಖ್ಯಮಂತ್ರಿಗಳಾದ ಅಶ್ವಥ್ನಾರಾಯಣ, ಸಚಿವರಾದ ಆರ್. ಅಶೋಕ್. ಸುರೇಶ್ ಕುಮಾರ್, ವಿ. ಸೋಮಣ್ಣ, ಬಸವರಾಜು ಬೊಮ್ಮಾಯಿ, ಸುಧಾಕರ್, ಬಿ ಶ್ರೀರಾಮುಲು, ಮುಖ್ಯ ಕಾರ್ಯದರ್ಶಿಗಳಾದ ಟಿ.ಎಂ. ವಿಜಯಭಾಸ್ಕರ್, ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ರಾಜ್ಯದಲ್ಲಿ ವರದಿಯಾದ ಕೋವಿಡ್ 19 ಪ್ರಕರಣಗಳಲ್ಲಿ ಅರ್ಧದಷ್ಟು ಬೆಂಗಳೂರಿನಲ್ಲಿ ಇವೆ. ಈ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ಬೆಂಗಳೂರು ನಗರದ ಸಚಿವರೊಂದಿಗೆ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಡಿಸಿಎಂ ಅಶ್ವಥ್ನಾರಾಯಣ, ಸಚಿವರಾದ ಆರ್. ಅಶೋಕ್. ಸುರೇಶ್ ಕುಮಾರ್, ವಿ. ಸೋಮಣ್ಣ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ. ಗೋಪಾಲಯ್ಯ, ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ತೋಟಗಾರಿಕೆ ಮತ್ತು ಪೌರಾಡಳಿತ ಸಚಿವ ನಾರಾಯಣಗೌಡ, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್. ವಿಶ್ವನಾಥ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಉನ್ನತ ಮಟ್ಟದ ಸಭೆಯ ಮುಖ್ಯಾಂಶಗಳು
- ಪಿಪಿಇ ಕಿಟ್ಗಳ ಗುಣಮಟ್ಟ ಹಾಗೂ ಪಿಪಿಇ ಕಿಟ್ಗಳ ಕೊರತೆ ನಿವಾರಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ.
- ಈಗಾಗಲೇ 1 ಲಕ್ಷ ಪಿಪಿಇ ಕಿಟ್ಗಳ ಪೂರೈಕೆಗೆ ಕಾರ್ಯಾದೇಶ ನೀಡಲಾಗಿದೆ. ಇನ್ನೂ 2 ಲಕ್ಷ ಪಿಪಿಇ ಕಿಟ್ಗಳ ಪೂರೈಕೆಗೆ ಕಾರ್ಯಾದೇಶ ನೀಡಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.
- ಎಲ್ಲ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲೆಗಳಿಗೆ ಭೇಟಿ ನೀಡಿ, ಅಲ್ಲಿ ಕೈಗೊಂಡಿರುವ ನಿಯಂತ್ರಣ ಹಾಗೂ ಮುನ್ನೆಚ್ಚರಿಕೆ ಕ್ರಮವನ್ನು ಪರಿಶೀಲಿಸಲು ಸೂಚಿಸಲಾಗಿದೆ.
- ಓಲಾ, ಉಬರ್ ಕಂಪೆನಿಗಳ ನೆರವಿನೊಂದಿಗೆ ತುರ್ತು ಸಂದರ್ಭದಲ್ಲಿ ವಿವಿಧ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳ ಸೇವೆಗೆ ವಾಹನ ಒದಗಿಸುವ ಬಗ್ಗೆ ಕ್ರಮ ವಹಿಸಲು ಸೂಚಿಸಲಾಗಿದೆ.
- 15 ಲಕ್ಷ ಕಟ್ಟಡ ಕಾರ್ಮಿಕರ ಖಾತೆಗೆ ಈಗಾಗಲೇ 1 ಸಾವಿರ ರೂ. ಜಮಾ ಮಾಡಲಾಗಿದೆ. ಅವರಿಗೆ ಹೆಚ್ಚುವರಿಯಾಗಿ ಇನ್ನೂ 1 ಸಾವಿರ ರೂ. ಜಮಾ ಮಾಡಲು ಕಾರ್ಮಿಕ ಇಲಾಖೆಗೆ ಸೂಚಿಸಿದರು.
- ನಗರದಲ್ಲಿ ಉಚಿತ ಆಹಾರ ವಿತರಣೆ ಕ್ರಮ ಬದ್ಧವಾಗಿ ಆಗುತ್ತಿಲ್ಲ. ಇದನ್ನು ವ್ಯವಸ್ಥಿತವಾಗಿ ನಿರ್ವಹಿಸುವ ಬಗ್ಗೆ ಬೆಂಗಳೂರಿನ ಸಚಿವರು, ಶಾಸಕರೊಂದಿಗೆ ಹಾಗೂ ಅಧಿಕಾರಿಗಳ ಜೊತೆ ಚರ್ಚಿಸಿ, ಕ್ರಮ ಕೈಗೊಳ್ಳಲು ತೀರ್ಮಾನಿಸಲಾಯಿತು.
ಇದನ್ನು ಓದಿ: ಬಡವರಿಗೆ ಅಗತ್ಯ ಸೇವೆ ಒದಗಿಸಲು ಸ್ವಯಂಸೇವಕರಾಗಿ ಸಹಾಯ ಮಾಡಲು ವಾಟ್ಸಾಪ್ ಗ್ರೂಪ್ ಆರಂಭಿಸಿದ ತೆಲಂಗಾಣ ಪೊಲೀಸರು
ಬೆಂಗಳೂರು ನಗರದ ಸಚಿವರೊಂದಿಗೆ ಸಭೆಯ ಮುಖ್ಯಾಂಶಗಳು
- ನಾಳೆ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಸಚಿವರು ಹಾಗೂ ಶಾಸಕರೊಂದಿಗೆ ಸಭೆ ಕರೆಯಲು ತೀರ್ಮಾನಿಸಲಾಯಿತು
- ನಗರದ ಶಾಸಕರು, ಪಾಲಿಕೆ ಸದಸ್ಯರ ಸಹಕಾರದೊಂದಿಗೆ ಬಡವರು, ಕಾರ್ಮಿಕರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆಯಾಗುವ ಪಡಿತರ ವಿತರಣೆ ಸಮರ್ಪಕವಾಗಿ ಹಂಚಿಕೆ ಆಗುವಂತೆ ಖಾತರಿಪಡಿಸಿಕೊಳ್ಳಲು ಸೂಚಿಸಿದರು.
- ಸಾಮಾಜಿಕ ಭದ್ರತಾ ಯೋಜನೆಗಳಡಿ ಎರಡು ತಿಂಗಳ ಪಿಂಚಣಿಗಳನ್ನು ಮುಂಗಡವಾಗಿ ವಿತರಿಸಲಾಗುತ್ತಿದೆ. ಕಟ್ಟಡ ಕಾರ್ಮಿಕರಿಗೆ ನೀಡುವ ನೆರವಿನ ಮೊತ್ತವನ್ನು 2 ಸಾವಿರಕ್ಕೆ ಹೆಚ್ಚಿಸಲು ಕ್ರಮ ವಹಿಸಲಾಗಿದೆ.
- ಇದರೊಂದಿಗೆ ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ಇರುವ ಕಾರ್ಮಿಕರಿಗೆ ಶೌಚಾಲಯ, ಕುಡಿಯುವ ನೀರು ಮತ್ತಿತರ ಮೂಲಸೌಕರ್ಯ ಒದಗಿಸಲು ನಿರ್ಧರಿಸಲಾಯಿತು.
- ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಹೆಚ್ಚಿನ ನೆರವು ಪಡೆಯಲು ನಗರದ ದಾನಿಗಳ ಮನವೊಲಿಸಲು ಸೂಚನೆ ನೀಡಲಾಯಿತು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ