ಬೆಂಗಳೂರು (ಮಾ. 22): ವಿದೇಶಗಳಲ್ಲಿರುವ ಭಾರತೀಯರಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ವಿದೇಶದಿಂದ ಸದ್ಯದ ಮಟ್ಟಿಗೆ ಯಾರೂ ಭಾರತಕ್ಕೆ ಪ್ರಯಾಣ ಮಾಡದಂತೆ ಸೂಚಿಸಲಾಗಿದೆ. ಇದರ ಬೆನ್ನಲ್ಲೇ ಕೊರೋನಾ ಸೋಂಕಿನ ಪ್ರಕರಣ ಹೆಚ್ಚಾಗಿರುವ ದೇಶಗಳಿಂದ ಭಾರತೀಯರನ್ನು ವಿಶೇಷ ವಿಮಾನದ ಮೂಲಕ ವಾಪಾಸ್ ಕರೆತರಲಾಗುತ್ತಿದೆ. ಇದರ ಭಾಗವಾಗಿ ಇಂದು ದುಬೈನಲ್ಲಿರುವ 195 ಕನ್ನಡಿಗರನ್ನು ಬೆಂಗಳೂರಿಗೆ ಕರೆತರಲಾಗಿದೆ.
ವಿಶೇಷ ವಿಮಾನದ ಮೂಲಕ ದುಬೈನಲ್ಲಿರುವ 195 ಕನ್ನಡಿಗರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆತರಲಾಗಿದೆ. ಇಂದು ಬೆಳಗ್ಗೆ 195 ಜನರು ವಿಮಾನ ನಿಲ್ದಾಣ ತಲುಪಿದ್ದಾರೆ. ಥರ್ಮಲ್ ಸ್ಕ್ರೀನಿಂಗ್ ವೇಳೆ ಅವರಲ್ಲಿ 6 ಜನರಿಗೆ ಕೊರೋನಾ ಲಕ್ಷಣಗಳು ಕಂಡುಬಂದಿವೆ ಎಂದು ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.
ಕೊರೋನಾ ಲಕ್ಷಣಗಳು ಕಂಡುಬಂದಿದ್ದರಿಂದ 6 ಜನರನ್ನು ರಾಜೀವ ಗಾಂಧಿ ಆಸ್ಪತ್ರೆಯಲ್ಲಿ ಐಸೋಲೇಷನ್ನಲ್ಲಿ ಇರಿಸಲಾಗಿದೆ. ಅಲ್ಲಿ ಆ ಆರು ಮಂದಿಗೆ ಚಿಕಿತ್ಸೆ ನೀಡಲಾಗುತ್ತದೆ. ಉಳಿದ 189 ಜನರನ್ನು ಬೆಂಗಳೂರಿನ ಆಕಾಶ್ ವೈದ್ಯಕೀಯ ಸಂಸ್ಥೆಯಲ್ಲಿ ಐಸೋಲೇಷನ್ನಲ್ಲಿ ಇರಿಸಿ, ನಿಗಾ ವಹಿಸಲಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಇದುವರೆಗೂ 20 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಶನಿವಾರ ಒಂದೇ ದಿನ ಐವರಿಗೆ ಕೊರೋನಾ ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಇನ್ನಷ್ಟು ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ಕೊರೋನಾ ಕೇಂದ್ರವಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ.
ಇದನ್ನೂ ಓದಿ: ಮಹಾರಾಷ್ಟ್ರ, ಬಿಹಾರದಲ್ಲಿ ಕೊರೋನಾಗೆ ಮತ್ತೆರಡು ಬಲಿ; ಭಾರತದಲ್ಲಿ ಸಾವಿನ ಸಂಖ್ಯೆ 6ಕ್ಕೆ ಏರಿಕೆ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ