ಶಿವಮೊಗ್ಗ ಜಿಲ್ಲೆಯಲ್ಲಿ 13 ಲಕ್ಷ ಜನರ ಆರೋಗ್ಯ ತಪಾಸಣಾ ಸಮೀಕ್ಷೆ ಪೂರ್ಣಗೊಂಡಿದೆ ; ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ 

ಕಚೇರಿಗೆ ಆಗಮಿಸುವ ಸಾರ್ವಜನಿಕರ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯವಾಗಿ ನಡೆಸಬೇಕು. ಸರಕಾರಿ ಕಚೇರಿಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ನಿಯಮಿತವಾಗಿ ಕೀಟನಾಶಕ ಸಿಂಪಡಣೆ ಕಾರ್ಯವನ್ನು ಕೈಗೊಳ್ಳಬೇಕು

ಜಿಲ್ಲಾ ಮಟ್ಟದ ಆರೋಗ್ಯ ಸಮಿತಿ ಸಭೆ

ಜಿಲ್ಲಾ ಮಟ್ಟದ ಆರೋಗ್ಯ ಸಮಿತಿ ಸಭೆ

  • Share this:
ಶಿವಮೊಗ್ಗ(ಏ.26): ಕೋವಿಡ್ 19 ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಇದುವರೆಗೆ 13 ಲಕ್ಷ ಜನರ ಆರೋಗ್ಯ ತಪಾಸಣಾ ಸಮೀಕ್ಷೆ ಕಾರ್ಯ ಪೂರ್ಣಗೊಂಡಿದೆ. ಇನ್ನು ಮುಂದೆ ಬಿಎಲ್ಒ (ಮತಗಟ್ಟೆ ಅಧಿಕಾರಿ) ತಮ್ಮ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಮನೆಗಳ ಆರೋಗ್ಯ ಸಮೀಕ್ಷೆ ಕಾರ್ಯವನ್ನು ನಡೆಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೂಚನೆ ನೀಡಿದ್ದಾರೆ.

ಜಿಲ್ಲಾ ಮಟ್ಟದ ಆರೋಗ್ಯ ಸಮಿತಿ ಸಭೆಯಲ್ಲಿ ಈ ಸೂಚನೆ ನೀಡಿದರು. ಆಶಾ ಕಾರ್ಯಕರ್ತೆಯರು ಇದುವರೆಗೆ ನಗರ ವ್ಯಾಪ್ತಿಯಲ್ಲಿ 1.28 ಲಕ್ಷ ಮನೆಗಳ ಸಮೀಕ್ಷೆ ಪೂರ್ಣಗೊಳಿಸಿದ್ದಾರೆ.  5.16 ಲಕ್ಷ ಜನರ ಆರೋಗ್ಯ ಸಮೀಕ್ಷೆ ಕೈಗೊಂಡಿದ್ದಾರೆ. ಇವರ ಪೈಕಿ 168 ಮಂದಿಯ ಗಂಟಲ ದ್ರವ ಪರೀಕ್ಷೆಗೆ ಒಳಪಡಿಸಲಾಗಿದೆ. ಇದೇ ವೇಳೆ ಗ್ರಾಮೀಣ ಪ್ರದೇಶದಲ್ಲಿ 1.78 ಲಕ್ಷ ಮನೆಗಳಿಗೆ ಭೇಟಿ ನೀಡಿ 7.64 ಜನರ ಆರೋಗ್ಯ ಸಮೀಕ್ಷೆ ನಡೆಸಲಾಗಿದೆ. ಒಟ್ಟು 77 ಮಂದಿಯ ಗಂಟಲ ದ್ರವ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಕಾರ್ಯವನ್ನು ಮತಗಟ್ಟೆ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಕೈಗೊಂಡು ಪ್ರತಿದಿನ ವರದಿಯನ್ನು ಸಲ್ಲಿಸಬೇಕು ಎಂದು ಜಿಲ್ಲಾಡಳಿತ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದೆ ಎಂದು ತಿಳಿಸಿದರು.

ಜಿಲ್ಲೆಯ ಪ್ರತಿಯೊಂದು ಖಾಸಗಿ ಆಸ್ಪತ್ರೆ ಹಾಗೂ ಕ್ಲಿನಿಕ್​​​​ಗಳಲ್ಲಿ ಜ್ವರ, ಉಸಿರಾಟ ತೊಂದರೆ, ಗಂಟಲು ನೋವು ಇತ್ಯಾದಿ ರೋಗಗಳ ಚಿಕಿತ್ಸೆಗಾಗಿ ಬರುವವರ ಮಾಹಿತಿಯನ್ನು ಪ್ರತಿ ದಿನ  ಒದಗಿಸುವಂತೆ ಈಗಾಗಲೆ ಸೂಚನೆ ನೀಡಲಾಗಿದೆ. ಈ ಕುರಿತು ಪರಿಶೀಲಿಸಲು ತಾಲೂಕು ಮಟ್ಟದಲ್ಲಿ ಅಧಿಕಾರಿಗಳ ತಂಡ ರಚಿಸಲಾಗಿದ್ದು, ಪ್ರತಿ ದಿನ ತಪಾಸಣೆ ನಡೆಸಲಾಗುತ್ತಿದೆ. ಮಾಹಿತಿಯನ್ನು ಒದಗಿಸದಿರುವ ಪ್ರಕರಣಗಳಲ್ಲಿ ಅಂತಹ ವೈದ್ಯರ ವಿರುದ್ಧ ಕಾನೂನು ಕ್ರಮ ಜರುಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಇನ್ನು ಸರ್ಕಾರ ಲಾಕ್​​​ ಡೌನ್​​ ನಲ್ಲಿ ಕೆಲವು ಸಡಿಲಿಕೆಗಳನ್ನು ಮಾಡಿದ್ದು, ಅದರಂತೆ ಕೆಲವು ಹೆಚ್ಚುವರಿ ಸೇವೆಗಳಿಗೆ ಅವಕಾಶ ಕಲ್ಪಿಸಿದೆ.  ಆದರೆ ಈ ಸೇವೆಯನ್ನು ನೀಡುವ ಸಂದರ್ಭದಲ್ಲಿ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಕಾಪಾಡಬೇಕು. ಬೀಡಿ, ಸಿಗರೇಟು, ಗುಟ್ಕಾ ಸೇರಿದಂತೆ ಎಲ್ಲಾ ರೀತಿಯ ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಷೇಧಿಸಲಾಗಿದ್ದು, ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಇದೇ ರೀತಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವವರಿಗೆ ದಂಡ ವಿಧಿಸಲು ಆದೇಶಿಸಲಾಗಿದೆ ಎಂದು ತಿಳಿಸಿದೆ.

ಇದನ್ನೂ ಓದಿ : ಸದ್ದಿಲ್ಲದೆ ನಡೆಯುತ್ತಿರುವ ಜಾತ್ರೆಗಳು - ಬ್ರೇಕ್ ಹಾಕಲು ಕಲಬುರ್ಗಿ ಪೊಲೀಸರ ಹೊಸ ಐಡಿಯಾ ಏನ್ ಗೊತ್ತಾ...?

ಎಲ್ಲಾ ಸರ್ಕಾರಿ ಕಚೇರಿಗಳು ಆರಂಭವಾಗಿದ್ದು, ಕಚೇರಿಗೆ ಆಗಮಿಸುವ ಸಾರ್ವಜನಿಕರ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯವಾಗಿ ನಡೆಸಬೇಕು. ಸರಕಾರಿ ಕಚೇರಿಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ನಿಯಮಿತವಾಗಿ ಕೀಟನಾಶಕ ಸಿಂಪಡಣೆ ಕಾರ್ಯವನ್ನು ಕೈಗೊಳ್ಳಬೇಕು. ಯಾವುದೇ ಸಭೆ, ಸಮಾರಂಭಗಳಲ್ಲಿ 10 ಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿಷೇಧಿಸಲಾಗಿದೆ. ಈಗಾಗಲೇ ಅನುಮತಿ ನೀಡಲಾಗಿರುವ ಕಾರ್ಖಾನೆಗಳು ತಮ್ಮ ಕಾರ್ಮಿಕರಿಗೆ ಕಡ್ಡಾಯವಾಗಿ ವೈದ್ಯಕೀಯ ವಿಮೆಯನ್ನು ಮಾಡಬೇಕು.  ಕಂಪೆನಿಗಳು ಶಿಫ್ಟ್ ನಡುವೆ ಕನಿಷ್ಠ ಒಂದು ಗಂಟೆ ಕಾಲ ಅಂತರ ನೀಡಬೇಕು. ಊಟದ ಸಂದರ್ಭದಲ್ಲಿ ಎಲ್ಲರೂ ಒಟ್ಟಾಗಿ ಸೇರುವುದನ್ನು ತಪ್ಪಿಸಲು ವ್ಯವಸ್ಥೆ ಮಾಡಬೇಕು ಎಂದು ಸೂಚನೆ ಮತ್ತು ಎಚ್ಚರಿಕೆಯನ್ನು ಜಿಲ್ಲಾಡಳಿತ ನೀಡಿದೆ.

 
First published: