ಬೆಂಗಳೂರು; ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದ ಅನ್ವಯ ರಾಜ್ಯ ಸರ್ಕಾರ ತೆರವು 3 ಮಾರ್ಗಸೂಚಿ ಹೊರಡಿಸಿದೆ. ಅದರಂತೆ ಕಂಟೈನ್ಮೆಂಟ್ ವಲಯಗಳಲ್ಲಿ ಲಾಕ್ಡೌನ್ ಅವಧಿಯನ್ನು ವಿಸ್ತರಿಸಲಾಗಿದೆ. ಹಾಗೂ ಕಂಟೈನ್ಮೆಂಟ್ ವಲಯಗಳ ಹೊರಗಿನ ಪ್ರದೇಶಗಳಲ್ಲಿ ಹೆಚ್ಚಿನ ಚಟುವಟಿಕೆ ಪುನಃ ಆರಂಭಿಸಲು ಅನುಮತಿ ನೀಡಲಾಗಿದೆ. ತೆರವು -3ರ ಈ ಮಾರ್ಗಸೂಚಿ ಆಗಸ್ಟ್ 31ರವರೆಗೆ ಜಾರಿಯಲ್ಲಿ ಇರುತ್ತದೆ.
ಈ ಅವಧಿಯಲ್ಲಿಯೂ ಸಹ ಸಾಮಾಜಿಕ, ರಾಜಕೀಯ, ಕ್ರೀಡೆ, ಮನೋರಂಜನೆ, ಶೈಕ್ಷಣಿಕ ಧಾರ್ಮಿಕ ಕಾರ್ಯ ಹಾಗೂ ಇತರೆ ಬೃಹತ್ ಸಭೆಗಳಿಗೆ ಅನುಮತಿ ನೀಡಿಲ್ಲ. ಕೋವಿಡ್-19 ಸಾಂಕ್ರಾಮಿಕ ಸೋಂಕನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಅಗತ್ಯ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಂಡಿದೆ. ಆದಾಗ್ಯೂ, ಸಕ್ರಿಯ ಪ್ರಕರಣಗಳು ಹೆಚ್ಚಾಗುತ್ತಿವೆ. ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಕೋವಿಡ್ ಸಾಂಕ್ರಾಮಿಕ ಸೋಂಕು ಹೆಚ್ಚಿನ ರೀತಿಯಲ್ಲಿ ಹರಡದಂತೆ ಈ ಸೋಂಕಿನ ಸರಪಳಿಯನ್ನು ಕತ್ತರಿಸಲು ಇನ್ನೂ ಹೆಚ್ಚಿನ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಾದ ಅನಿವಾರ್ಯತೆ ಇದೆ.
ಹೀಗಾಗಿ ಇದೇ ತಿಂಗಳ 22ರಂದು ಬರಲಿರುವ ಗಣೇಶ ಚತುರ್ಥಿ ಹಬ್ಬದಂದು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಪ್ರಸ್ತುತ ರಾಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ಹರಡಿರುವುದರಿಂದ ಗಣೇಶೋತ್ಸವ ಹಬ್ಬವನ್ನು ಸರಳವಾಗಿ ಆಚರಿಸುವಂತೆ ಸರ್ಕಾರ ಜನರಲ್ಲಿ ಮನವಿ ಮಾಡಿಕೊಂಡಿದೆ. ಅಲ್ಲದೇ, ಅದಕ್ಕಾಗಿ ಕೆಲವು ಮಾರ್ಗಸೂಚಿಗಳನ್ನು ಜಾರಿಮಾಡಿದೆ.
ಇದನ್ನು ಓದಿ: ಇನ್ನೂ ಬಣ್ಣ ಹಚ್ಚದ ಗಣಪ ; ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಸಂಘಟನೆಗಳ ಪಟ್ಟು
ಗಣೇಶೋತ್ಸವ ಸಂಬಂಧ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳು
- ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನದೊಳಗೆ ಅಥವಾ ತಮ್ಮ ಮನೆಗಳಲ್ಲಿಯೇ ಆಚರಿಸುವುದು
- ಸಾರ್ವಜನಿಕ ಸ್ಥಳಗಳಾದ ರಸ್ತೆ, ಗಲ್ಲಿ, ಓಣಿ, ಮೈದಾನ ಇತ್ಯಾದಿ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಬಾರದು.
- ಯಾವುದೇ ಕಾರಣಕ್ಕೂ ಸಾರ್ವಜನಿಕ ನದಿ, ಕೆರೆ, ಕೊಳ, ಬಾವಿ ಮತ್ತು ಕಲ್ಯಾಣಿಗಳಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮಾಡುವಂತಿಲ್ಲ.
- ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾ ಯಾವುದೇ ಕಾರಣಕ್ಕೂ ಯಾವುದೇ ರೀತಿಯ ಮೆರವಣಿಗೆ ಮಾಡುವಂತಿಲ್ಲ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ