ರಾಜಸ್ತಾನ್ (ಮೇ 05); ದೇಶದಲ್ಲಿ ದಿನೇ ದಿನೇ ದೇಶದಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು, ಮೃತ ಸಂಖ್ಯೆಯೂ ಅಧಿಕವಾಗುತ್ತಿದೆ. ಈ ನಡುವೆ ಮನ ಕಲಕುವ ಘಟನೆಯೊಂದಕ್ಕೆ ರಾಜಸ್ತಾನ ಸಾಕ್ಷಿಯಾಗಿದೆ. ರಾಜಸ್ಥಾನದಲ್ಲಿ 34 ವರ್ಷದ ಮಹಿಳೆ ಶವಸಂಸ್ಕಾರದ ಸಮಯದಲ್ಲಿ ಕೋವಿಡ್ನಿಂದ ಮೃತಪಟ್ಟ ತನ್ನ ತಂದೆಯ ಅಂತ್ಯಕ್ರಿಯೆ ನಡೆದ ಚಿತೆಯ ಮೇಲೆ ಹಾರಿ ತನ್ನ ಪ್ರಾಣವನ್ನೇ ತ್ಯಜಿಸಲು ಮುಂದಾದ ಘಟನೆಗೆ ಬೆಳಕಿಗೆ ಬಂದಿದೆ. ಆದರೆ, ಮಹಿಳೆಯನ್ನು ರಕ್ಷಿಸಲಾಗಿದ್ದು, ತೀವ್ರ ಸುಟ್ಟ ಗಾಯಗಳಿಂದ ಬಳಲುತ್ತಿರುವ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
COVID-19 ಕಾರಣ ರಾಜಸ್ಥಾನದ ಬಾರ್ಮರ್ ಜಿಲ್ಲೆಯ ಆಸ್ಪತ್ರೆಯಲ್ಲಿ 73 ವರ್ಷದ ದಾಮೋದರ್ದಾಸ್ ಶಾರದಾ ಮಂಗಳವಾರ ನಿಧನರಾಗಿದ್ದಾರೆ. ಆದರೆ, ಶಾರದಾ ಅವರ ಅಂತ್ಯಕ್ರಿಯೆ ನಡೆಸುತ್ತಿರುವಾಗ, ಅವರ ಮೂವರು ಹೆಣ್ಣುಮಕ್ಕಳಲ್ಲಿ ಕಿರಿಯ ಮಗಳಾದ ಚಂದ್ರ ಶಾರದಾ ಇದ್ದಕ್ಕಿದ್ದಂತೆ ತಂದೆಯ ಚೆತೆಯ ಮೇಲೆ ಹಾರಿದ್ದಾರೆ ಎಂದು ಪೊಲೀಸರು ಸುದ್ದಿ ಸಂಸ್ಥೆ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾಕ್ಕೆ ತಿಳಿಸಿದ್ದಾರೆ.
ಚೆತೆಯ ಮೇಲೆ ಹಾರಿದ ಪರಿಣಾಮ ಆಕೆ ತೀವ್ರ ಸುಟ್ಟ ಗಾಯಗಳಿಗೆ ಒಳಗಾಗಿದ್ದು, ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ನಂತರ ಚಿಕಿತ್ಸೆಗಾಗಿ ಜೋಧಪುರದ ಆಸ್ಪತ್ರೆಯಲ್ಲಿ ದಾಖಲಿಸಲಾಯಿತು ಎಂದು ಪೊಲೀಸರು ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾಕ್ಕೆ ಮಾಹಿತಿ ನೀಡಿದ್ದಾರೆ.
"ದಾಮೋದರ್ದಾಸ್ ಶಾರದಾಗೆ ಮೂವರು ಪುತ್ರಿಯರಿದ್ದರು. ಅವರ ಪತ್ನಿ ಕೆಲ ವರ್ಷಗಳ ಹಿಂದೆ ನಿಧನರಾಗಿದ್ದಾರೆ. ಅವರ ಮೂವರು ಪುತ್ರಿಯರಲ್ಲಿ ಕಿರಿಯ ಪುತ್ರಿ ಚಿತೆಯ ಮೇಲೆ ಹಾರಿದ್ದಾರೆ" ಎಂದು ಕೊಟ್ವಾಲಿ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಅಧಿಕಾರಿ ಪ್ರೇಮ್ ಪ್ರಕಾಶ್ ಹೇಳಿದ್ದಾರೆ.
ಭಾರತದಲ್ಲಿ ಕೊರೋನಾ ಕೇಕೆ:
ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಆತಂಕವನ್ನು ಸೃಷ್ಟಿಸುತ್ತಿದೆ. ಕೊರೋನಾ ಸೋಂಕು ಹರಡುವಿಕೆ ಶರವೇಗವನ್ನು ಪಡೆದುಕೊಂಡಿದೆ. ಹಲವು ನಿರ್ಬಂಧಗಳ ನಡುವೆಯೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಕೊರೋನಾ ಸೋಂಕಿತರು ಪತ್ತೆ ಆಗುತ್ತಿದ್ದಾರೆ.
ಏಪ್ರಿಲ್ 4ರಿಂದ ದಿನ ಒಂದರಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು, ಏಪ್ರಿಲ್ 14ರಿಂದ ದಿನ ಒಂದರಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಜನರು ಹಾಗೂ ಏಪ್ರಿಲ್ 17ರಿಂದ ದಿನ ಒಂದರಲ್ಲಿ ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕೊರೊನಾ ಸೋಂಕು ಪೀಡಿತರಾಗುತ್ತಿದ್ದರು. ಈಗ ದೇಶದ ಕೊರೊನಾ ಪೀಡಿತರ ಸಂಖ್ಯೆ ಎರಡು ಕೋಟಿಯನ್ನೂ ದಾಟಿದೆ. ಅಲ್ಲದೆ ಸುಮಾರು ನಾಲ್ಕು ಲಕ್ಷದಷ್ಡು ಕೊರೊನಾ ಪ್ರಕರಣಗಳು ಗೋಚರಿಸಲು ಆರಂಭಿಸಿವೆ.
ಮಂಗಳವಾರ 3,82,315 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಈ ಪೈಕಿ ಗುಣ ಆಗಿರುವವರು 3,38,439 ಜನ ಮಾತ್ರ. ಇದರಿಂದ ದೇಶದಲ್ಲಿ ಈವರೆಗೆ ಕೊರೋನಾ ಸೋಂಕು ಪೀಡಿತರಾದವರ ಸಂಖ್ಯೆ ಎರಡು ಕೋಟಿ ದಾಟಿದ್ದು 2,06,65,148ಕ್ಕೆ ಏರಿಕೆ ಆಗಿದೆ. ಇದಲ್ಲದೆ ದಿನದಿಂದ ದಿನಕ್ಕೆ ಕೊರೋನಾ ರೋಗಕ್ಕೆ ಬಲಿ ಆಗುತ್ತಿರುವವರ ಸಂಖ್ಯೆ ಕೂಡ ಹೆಚ್ಚಾಗಿದ್ದು ದೇಶದಲ್ಲಿ ಇದೀಗ ದಿನ ಒಂದರಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನ ಸಾವನ್ನಪ್ಪುತ್ತಿದ್ದಾರೆ. ಮಂಗಳವಾರ 3,780 ಜನರು ಬಲಿ ಆಗಿದ್ದು ಈವರೆಗೆ ಮಹಾಮಾರಿ ಕೊರೋನಾಗೆ ಬಲಿ ಆದವರ ಸಂಖ್ಯೆ 2,26,188ಕ್ಕೆ ಏರಿಕೆ ಆಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ