ಹರಿಯಾಣ (ಮೇ 10); ದೇಶದಲ್ಲಿ ಕೊರೋನಾ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಹೀಗಾಗಿ ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ದೇಶದ ಬಹುತೇಕ ರಾಜ್ಯಗಳು ಈಗಾಗಲೇ ಲಾಕ್‌ಡೌನ್ ಘೋಷಿಸಿವೆ. ಹರಿಯಾಣ ಸರ್ಕಾರ ಸಹ ಕೊರೋನಾ ನಿಯಂತ್ರಣಕ್ಕಾಗಿ ಲಾಕ್‌ಡೌನ್ ಹೇರಿತ್ತು. ಆದರೆ, ಲಾಕ್‌ಡೌನ್ ಹೇರಿಯೂ ಕೊರೋನಾ ನಿಯಂತ್ರಣಕ್ಕೆ ಸಿಗದ ಕಾರಣ ಹರಿಯಾಣದಲ್ಲಿ ಹೇರಲಾಗಿರುವ ಲಾಕ್‌ಡೌನ್ ಅನ್ನು ಮೇ 17 ರವರೆಗೆ ವಿಸ್ತರಿಸಲಾಗಿದೆ. ಜೊತೆಗೆ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ 5 ಸಾವಿರ ರೂಪಾಯಿ ನೀಡಲು ಹರಿಯಾಣ ಸರ್ಕಾರ ನಿರ್ಧರಿಸಿದೆ ಎಂದು ಆರೋಗ್ಯ ಸಚಿವ ಅನಿಲ್ ವಿಜ್ ತಿಳಿಸಿದ್ದಾರೆ.
"ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆ ಹೆಚ್ಚು ಕಠಿಣ ನಿರ್ಬಂಧಗಳನ್ನು ಜಾರಿಗೆ ತರಲಾಗಿದೆ. ಮೇ 10 ರಿಂದ 17 ರವರೆಗೆ ಸುರಕ್ಷಿತ್ ಹರಿಯಾಣ ಅಭಿಯಾನ ಘೋಷಿಸಿದ್ದು, ಹರಿಯಾಣದಲ್ಲಿ ಕೊರೋನಾ ಹರಡುವುದನ್ನು ತಡೆಯಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು" ಎಂದು ಹರಿಯಾಣ ಗೃಹ ಮತ್ತು ಆರೋಗ್ಯ ಸಚಿವ ಅನಿಲ್ ವಿಜ್ ಹೇಳಿದ್ದಾರೆ.
It has been decided to provide Rs 5000 to the families below the poverty line as their livelihood has stopped and they have to stay in isolation amid COVID. So they were facing a lot of difficulties: Haryana Home Minister Anil Vij pic.twitter.com/AYV4XMVGaY
— ANI (@ANI) May 10, 2021
ಸಾಂಕ್ರಾಮಿಕ ಎಚ್ಚರಿಕೆ ‘ಸುರಕ್ಷಿತ್ ಹರಿಯಾಣ’ ರಾಜ್ಯದಲ್ಲಿ ಮೇ 10-17 ರಿಂದ ಒಂದು ವಾರದವರೆಗೆ ಘೋಷಿಸಲಾಗಿದೆ. 1 ನೇ ಲಾಕ್‌ಡೌನ್‌ನ ನಿಯಮಗಳಿಗೆ ಮತ್ತಷ್ಟು ನಿಯಮಗಳನ್ನು ಸೇರಿಸಲಾಗಿದೆ. ಮದುವೆ ಮತ್ತು ಅಂತ್ಯಕ್ರಿಯೆಗಳಲ್ಲಿ ಸಹ 11 ಕ್ಕೂ ಹೆಚ್ಚು ಜನರು ಒಟ್ಟುಗೂಡುವುದನ್ನು ನಿಷೇಧಿಸಲಾಗಿದೆ. ಜೊತೆಗೆ ಯಾವುದೇ ಮೆರವಣಿಗೆಗೆ ಅವಕಾಶವಿಲ್ಲ ಎಂದು ಆರೋಗ್ಯ ಸಚಿವ ತಿಳಿಸಿದ್ದಾರೆ.
ವಿವಾಹಗಳನ್ನು ಗರಿಷ್ಠ 11 ಜನರ ಮಿತಿಯೊಂದಿಗೆ ನಡೆಸಲು ಅನುಮತಿ ನೀಡಲಾಗಿದೆ. ಆದರೆ ಬರಾತ್ (ವಿವಾಹ ವಿಧಿ) ಮೆರವಣಿಗೆಯನ್ನು ನಿಷೇಧಿಸಲಾಗಿದೆ. ಲಾಕ್ ಡೌನ್ ಸಮಯದಲ್ಲಿ ವ್ಯಾಕ್ಸಿನೇಷನ್ ಕೇಂದ್ರಗಳು, ಬ್ಯಾಂಕುಗಳು ಮತ್ತು ಅಗತ್ಯ ಸೇವೆಗಳು ಕಾರ್ಯನಿರ್ವಹಿಸುತ್ತಲೇ ಇರುತ್ತವೆ ಎಂದು ತಿಳಿಸಲಾಗಿದೆ.
ಹರಿಯಾಣದಲ್ಲಿ 24 ಗಂಟೆಗಳಲ್ಲಿ 13,548 ಹೊಸ ಕೊರೋನಾ ವೈರಸ್ ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆಯನ್ನು 1,16,867 ಕ್ಕೆ ಏರಿಕೆಯಾಗಿದೆ. ಈ ಹಿಂದೆ ಸೋಂಕು ನಿಯಂತ್ರಿಸಲು ಮೇ 3 ರಿಂದ ಮೇ 9 ರವರೆಗೆ ಒಂದು ವಾರದ ಸಂಪೂರ್ಣ ಲಾಕ್‌ಡೌನ್ ವಿಧಿಸಲಾಗಿತ್ತು.
ಭಾರತದಲ್ಲಿ ಕೊರೋನಾ ಕೇಕೆ:
ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಆತಂಕವನ್ನು ಸೃಷ್ಟಿಸುತ್ತಿದೆ. ಕೊರೋನಾ ಸೋಂಕು ಹರಡುವಿಕೆ ಶರವೇಗವನ್ನು ಪಡೆದುಕೊಂಡಿದೆ. ಹಲವು ನಿರ್ಬಂಧಗಳ ನಡುವೆಯೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಕೊರೋನಾ ಸೋಂಕಿತರು ಪತ್ತೆ ಆಗುತ್ತಿದ್ದಾರೆ. ಏಪ್ರಿಲ್ 4ರಿಂದ ದಿನ ಒಂದರಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು, ಏಪ್ರಿಲ್ 14ರಿಂದ ದಿನ ಒಂದರಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಜನರು, ಏಪ್ರಿಲ್ 21ರಿಂದ ದಿನ ಒಂದರಲ್ಲಿ ಮೂರು ಲಕ್ಷಕ್ಕೂ ಹೆಚ್ಚು ಜನರು ಹಾಗೂ ಏಪ್ರಿಲ್ 30ರಿಂದ ದಿನ ಒಂದರಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು ಜನರು ಕೊರೊನಾ ಸೋಂಕು ಪೀಡಿತರಾಗುತ್ತಿದ್ದರು. ಈಗ ತುಸು ಕಡಿಮೆಯಾಗಿ ಮೂರೂವರೆ ಲಕ್ಷಕ್ಕೂ ಹೆಚ್ಚು ಜನ ಸೋಂಕು ಪೀಡಿತರಾಗುತ್ತಿದ್ದಾರೆ.
ಭಾನುವಾರ 3,66,161 ಪ್ರಕರಣಗಳು ಪತ್ತೆಯಾಗಿದ್ದು ಈ ಪೈಕಿ ಗುಣ ಆಗಿರುವವರು 3,53,818 ಜನ ಮಾತ್ರ. ಇದರಿಂದ ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ 2,26,62,575ಕ್ಕೆ ಏರಿಕೆ ಆಗಿದೆ. ಇದಲ್ಲದೆ ದಿನದಿಂದ ದಿನಕ್ಕೆ ಕೊರೋನಾ ರೋಗಕ್ಕೆ ಬಲಿ ಆಗುತ್ತಿರುವವರ ಸಂಖ್ಯೆ ಕೂಡ ಹೆಚ್ಚಾಗಿದೆ. ಭಾನುವಾ 3,754 ಜನರು ಬಲಿ ಆಗಿದ್ದು ಈವರೆಗೆ ಮಹಾಮಾರಿ ಕೊರೋನಾಗೆ ಬಲಿ ಆದವರ ಸಂಖ್ಯೆ 2,46,116ಕ್ಕೆ ಏರಿಕೆ ಆಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ