ಬೆಂಗಳೂರು (ಜೂನ್ 7): ಕರ್ನಾಟಕದಲ್ಲಿ ಕೊರೋನಾ ಪಾಸಿಟಿವಿಟಿ ರೇಟ್ ಕಡಿಮೆಯಾಗಿರುವುದರಿಂದ ಹಂತಹಂತವಾಗಿ ಲಾಕ್ಡೌನ್ ತೆರವುಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈಗಾಗಲೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅನ್ಲಾಕ್ ಪ್ರಕ್ರಿಯೆ ಆರಂಭವಾಗಿದೆ. ಹೀಗಾಗಿ, ಕರ್ನಾಟಕದಲ್ಲೂ ಕೆಲವು ನಿಯಮಗಳನ್ನು ಅಳವಡಿಸಿ, ಅನ್ಲಾಕ್ ಮಾಡಲು ಸರ್ಕಾರ ನಿರ್ಧರಿಸಿದೆ. ಈ ಕುರಿತು ನಿರ್ಧರಿಸಲು ಇಂದು ಕೊರೋನಾ ಟಾಸ್ಕ್ಫೋರ್ಸ್ ಸಭೆ ನಡೆಯಲಿದ್ದು, ಬಳಿಕ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಹತ್ವದ ಸಭೆ ನಡೆಸಲಿದ್ದಾರೆ.
ಕರ್ನಾಟಕದಲ್ಲಿ ಜೂನ್ 14ರವರೆಗೂ ಲಾಕ್ಡೌನ್ ಜಾರಿಯಲ್ಲಿದ್ದು, ಕಳೆದೊಂದು ವಾರದಿಂದ ರಾಜ್ಯಾದ್ಯಂತ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಲಾಗಿತ್ತು. ಇಂದಿನಿಂದ ಆ ನಿಯಮಗಳನ್ನು ತೆರವುಗೊಳಿಸಲಾಗಿದ್ದು, ಅನೇಕ ಜಿಲ್ಲೆಗಳಲ್ಲಿ ಅನ್ಲಾಕ್ ಪ್ರಕ್ರಿಯೆ ಆರಂಭವಾಗಿದೆ. ರಾಜ್ಯಾದ್ಯಂತ ಇಂದಿನಿಂದ ಸಬ್ ರಿಜಿಸ್ಟ್ರಾರ್ ಕಚೇರಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಬಸ್ ಸಂಚಾರಕ್ಕೂ ಅವಕಾಶ ನೀಡಲಾಗಿದೆ. ಕೈಗಾರಿಕೆ ಮೇಲಿನ ನಿಯಮವನ್ನು ಸಡಿಲಿಸಲಾಗಿದೆ. ಇದೇ ರೀತಿ ಹಂತ ಹಂತವಾಗಿ ಅನ್ಲಾಕ್ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.
ಕರ್ನಾಟಕದಲ್ಲಿ ಕೊರೋನಾ ಪಾಸಿಟಿವಿಟಿ ರೇಟ್ ಕಡಿಮೆಯಾಗುತ್ತಿರುವುದರಿಂದ ಇಂದಿನಿಂದ ಅನ್ಲಾಕ್ ಪ್ರಕ್ರಿಯೆಯನ್ನು ಜಾರಿಗೊಳಿಸಲಾಗುತ್ತಿದೆ. ಒಂದೇ ಸಮಯದಲ್ಲಿ ಎಲ್ಲ ಲಾಕ್ಡೌನ್ ನಿಯಮಗಳನ್ನೂ ಸಡಿಲಗೊಳಿಸಿದರೆ ಮತ್ತೆ ಕೊರೋನಾ ಕೇಸುಗಳು ತಾರಕಕ್ಕೇರುವ ಅಪಾಯ ಇರುವುದರಿಂದ ಹಂತ ಹಂತವಾಗಿ ಅನ್ಲಾಕ್ ಮಾಡಲು ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಕೆ ವಿಚಾರವಾಗಿ ಇಂದು ಸಂಜೆಯೊಳಗೆ ನಿರ್ಧಾರವಾಗಲಿದೆ.
ಇಂದು ಮಧ್ಯಾಹ್ನ 2.30ಕ್ಕೆ ವಿಧಾನಸೌಧದಲ್ಲಿ ಕೋವಿಡ್ ಟಾಸ್ಕ್ ಫೋರ್ಸ್ ಅಧಿಕಾರಿಗಳು ಸಭೆ ನಡೆಸಲಿದ್ದಾರೆ. ಟಾಸ್ಕ್ ಫೋರ್ಸ್ ಅಧ್ಯಕ್ಷ ಡಿಸಿಎಂ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಅನ್ ಲಾಕ್ ಬಗ್ಗೆ ಮಹತ್ವದ ಚರ್ಚೆ ನಡೆಯಲಿದೆ. ಕೊರೋನಾ ಪ್ರಮಾಣ ಕಡಿಮೆ ಆಗುತ್ತಿರುವ ಕಾರಣದಿಂದ ಹಂತ ಹಂತವಾಗಿ ಲಾಕ್ ಡೌನ್ ಸಡಿಲಿಕೆ ಮಾಡಲು ಚಿಂತನೆ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ಟಾಸ್ಕ್ ಫೋರ್ಸ್ ಸಭೆಯಲ್ಲಿ ಈ ಬಗ್ಗೆ ಸಮಾಲೋಚನೆ ನಡೆಸಲಾಗುವುದು.
ಒಂದುವೇಳೆ ಕರ್ನಾಟಕದಲ್ಲಿ ಅನ್ಲಾಕ್ ನಿಯಮ ಜಾರಿಗೊಳಿಸಿದರೆ ಯಾವುದಕ್ಕೆ ವಿನಾಯಿತಿ ಕೊಡಬಹುದು ಎಂಬುದರ ಬಗ್ಗೆ ಇಂದಿನಿ ಸಭೆಯಲ್ಲಿ ಚರ್ಚೆ ನಡೆಯಲಿದೆ. ಈ ಚರ್ಚೆ ನಂತರ ಸಭೆಯ ಬಗ್ಗೆ ಸಿಎಂ ಯಡಿಯೂರಪ್ಪನವರಿಗೆ ಅಧಿಕಾರಿಗಳು ಮಾಹಿತಿ ನೀಡಲಿದ್ದಾರೆ. ಸಭೆಯಲ್ಲಿ ಚರ್ಚೆಯಾದ ವಿಷಯಗಳನ್ನು, ಅಧಿಕಾರಿಗಳ ಸಲಹೆಗಳನ್ನು ಪರಿಗಣಿಸಿ ಅಂತಿಮವಾಗಿ ಸಿಎಂ ಯಡಿಯೂರಪ್ಪ ಅನ್ಲಾಕ್ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದ್ದಾರೆ.
ಇಂದಿನಿಂದ ಕೈಗಾರಿಕೆಗಳಿಗೆ ಲಾಕ್ಡೌನ್ ನಿಯಮದಿಂದ ವಿನಾಯಿತಿ ನೀಡಲಾಗಿದೆ. ಸಬ್ ರಿಜಿಸ್ಟ್ರಾರ್ ಕಚೇರಿಗಳನ್ನು ತೆರೆಯಲು ಸೂಚನೆ ನೀಡಲಾಗಿದೆ. ಈ ಮೂಲಕ ಒಂದು ತಿಂಗಳಿನಿಂದ ಸ್ಥಗಿತಗೊಂಡಿದ್ದ ಆರ್ಥಿಕ ಚಟುವಟಿಕೆಗಳು ಕರ್ನಾಟಕದಲ್ಲಿ ಮತ್ತೆ ಚುರುಕು ಪಡೆದಿವೆ. ರಾಜ್ಯದಲ್ಲಿ ಅನ್ ಲಾಕ್ ಜಾರಿ ಬಗ್ಗೆ ಇಂದು ಸಿಎಂ ಯಡಿಯೂರಪ್ಪ ನಿರ್ಧಾರ ಮಾಡಲಿದ್ದಾರೆ. ಹಂತ ಹಂತವಾಗಿ ಅನ್ ಲಾಕ್ಗೆ ಮುಂದಾದ ಕರ್ನಾಟಕ ಸರ್ಕಾರ ಆರ್ಥಿಕ ಚಟುವಟಿಕೆಗಳತ್ತ ಚಿತ್ತ ನೆಟ್ಟಿದೆ. ಹೀಗಾಗಿ, ಇಂದಿನಿಂದ ರಾಜ್ಯಾದ್ಯಂತ ಸಬ್ ರಿಜಿಸ್ಟ್ರಾರ್ ಕಚೇರಿ ಓಪನ್ ಆಗಲಿದೆ. ಕೋವಿಡ್ ನಿಯಮಾನುಸಾರ ಕಾರ್ಯ ಚಟುವಟಿಕೆ ಮಾಡಬೇಕೆಂದು ಸರ್ಕಾರ ಆದೇಶ ನೀಡಿದೆ.
ಇದನ್ನೂ ಓದಿ: Petrol Price in Karnataka: ಕರ್ನಾಟಕದ ಚಿಕ್ಕಮಗಳೂರು, ಶಿರಸಿ, ಬಳ್ಳಾರಿಯಲ್ಲಿ 100 ರೂ. ದಾಟಿದ ಪೆಟ್ರೋಲ್ ಬೆಲೆ!
ಶಿವಮೊಗ್ಗ, ಮೈಸೂರು, ವಿಜಯಪುರ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ ಕಠಿಣ ಲಾಕ್ಡೌನ್ ನಿಯಮಗಳನ್ನು ಕೊಂಚ ಸಡಿಲಗೊಳಿಸಲಾಗಿದೆ. ಜೂನ್ 14ರವರೆಗೆ ಸಂಜೆಯವರೆಗೂ ಹೋಟೆಲ್, ರೆಸ್ಟೋರೆಂಟ್ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಆದರೆ, ಪಾರ್ಸಲ್ಗಳಿಗೆ ಮಾತ್ರ ಅನುಮತಿ ನೀಡಲಾಗಿದೆ. ರಾಜ್ಯಾದ್ಯಂತ ರೈಲು ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಬಾರ್ಗಳು, ಚಿತ್ರಮಂದಿರಗಳು, ಶಾಪಿಂಗ್ ಮಾಲ್ಗಳು, ಧಾರ್ಮಿಕ ಕೇಂದ್ರಗಳು, ಶಾಲಾ-ಕಾಲೇಜುಗಳು, ಜಾತ್ರೆಗಳು, ಸಾರ್ವಜನಿಕ ಸಮಾರಂಭಗಳಿಗೆ ನಿಷೇಧ ಹೇರಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ