ಬೆಂಗಳೂರು - (28) ಹೆಚ್ಚುತ್ತಿರುವ ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಮಹಾರಾಷ್ಟ್ರ ತಮಿಳುನಾಡು, ಮಧ್ಯಪ್ರದೇಶ, ಗುಜರಾತ್ , ರಾಜಸ್ಥಾನದಿಂದ ಕರ್ನಾಟಕಕ್ಕೆ ವಿಮಾನಗಳ ಹಾರಾಟವನ್ನು ನಿರ್ಬಂಧಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಸಂಜೆ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, "ಮಹಾರಾಷ್ಟ್ರ ತಮಿಳುನಾಡು, ಮಧ್ಯಪ್ರದೇಶ, ಗುಜರಾತ್ , ರಾಜಸ್ಥಾನದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಅಧಿಕವಿದೆ. ಹೀಗಾಗಿ ರಾಜ್ಯದಲ್ಲಿ ಸಮಸ್ಯೆ ಉಲ್ಭಣಿಸದೆ ಇರುವ ಸಲುವಾಗಿ ಈ ರಾಜ್ಯಗಳಿಂದ ಕರ್ನಾಟಕಕ್ಕೆ ಮುಂದಿನ 15 ದಿನಗಳ ಕಾಲ ವಿಮಾನ ಯಾನವನ್ನು ರದ್ದು ಮಾಡಲಾಗಿದೆ.
ರಸ್ತೆ, ರೈಲ್ವೇ ಮೂಲಕವೂ ಸಹ ಈ ರಾಜ್ಯಗಳಿಂದ ಬರುವವರಿಗೆ ವಿಧಿಸುವ ನಿರ್ಬಂಧ ಮುಂದುವರಿಸಲಾಗಿದೆ. ಕಳ್ಳದಾರಿಯಿಂದ ರಾಜ್ಯ ಪ್ರವೇಶ ಮಾಡುವುದನ್ನು ತಡೆಯಲು ಹೆಚ್ಚು ನಿಗಾ ವಹಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ.
ಹೊರ ರಾಜ್ಯಗಳಿಂದ ಬಂದಿರುವವರ ಪರೀಕ್ಷೆ ಹಾಗೂ ಕ್ವಾರಂಟೈನ್ ಅವಧಿ ಮುಗಿಯುವವರೆಗೆ ಮತ್ತೆ ಬೇರೆಯವರಿಗೆ ರಾಜ್ಯ ಪ್ರವೇಶಕ್ಕೆ ಅವಕಾಶವಿಲ್ಲ. ಬ್ಯಾಚ್ ಬೈ ಬ್ಯಾಚ್ ಜನರನ್ನು ರಾಜ್ಯಕ್ಕೆ ಕರೆಸಿಕೊಳ್ಳಲಾಗುವುದು. ಈ ಕುರಿತು ಸಂಪುಟ ಸಭೆಯಲ್ಲಿ ದೀರ್ಘವಾಗಿ ಚರ್ಚೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗಿದೆ" ಎಂದು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.
ಇದನ್ನೂ ಓದಿ : ಬಿಜೆಪಿ ಪಕ್ಷದ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರಗೆ ಕೊರೋನಾ; ಆಸ್ಪತ್ರೆಗೆ ದಾಖಲು, ಚಿಕಿತ್ಸೆ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ