ಕೋವಿಡ್ ಕಾಲದಲ್ಲಿ ಶಿಕ್ಷಣ ಪ್ರಕ್ರಿಯೆಗೆ ತಜ್ಞರ ಸಮಿತಿ ರಚನೆ; ಸಚಿವ ಸುರೇಶ್ ಕುಮಾರ್

ಕೊರೋನಾ ಸೋಂಕಿನ ಭೀತಿಯಿಂದಾಗಿ 2021-22ನೇ ಶೈಕ್ಷಣಿಕ ವರ್ಷವೂ ನಿಗದಿಯಂತೆ ಆರಂಭವಾಗುವ ಲಕ್ಷಣಗಳು ಗೋಚರಿಸದ ಹಿನ್ನೆಲೆಯಲ್ಲಿ ಮಕ್ಕಳ ಕಲಿಕಾ ನಿರಂತರತೆಗೆ ತೊಂದರೆಯಾಗದಂತೆ ಈಗಿನಿಂದಲೇ ಕ್ರಮ ವಹಿಸಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸಚಿವ ಸುರೇಶ್ ಕುಮಾರ್.

ಸಚಿವ ಸುರೇಶ್ ಕುಮಾರ್.

  • Share this:
ಬೆಂಗಳೂರು: ಮರುಕಳಿಸುತ್ತಿರುವ ಆತಂಕ ಒಡ್ಡಿರುವ ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಮಕ್ಕಳನ್ನು ಕಲಿಕೆಯಿಂದ ಹೊರಗುಳಿಯದಂತೆ ಮಾಡುವ ಉದ್ದೇಶದಿಂದ ಕೋವಿಡ್ ಸಂಕಷ್ಟದ ಕಾಲದಲ್ಲಿ ಶಿಕ್ಷಣದ ಮುಂದುವರಿಕೆ ಕ್ರಮಗಳ ಕುರಿತಂತೆ ತಜ್ಞರ ಸಮಿತಿ ರಚಿಸಿ ವರದಿ ಪಡೆಯಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಕೊರೋನಾ ಸೋಂಕಿನ ಭೀತಿಯಿಂದಾಗಿ 2021-22ನೇ ಶೈಕ್ಷಣಿಕ ವರ್ಷವೂ ನಿಗದಿಯಂತೆ ಆರಂಭವಾಗುವ ಲಕ್ಷಣಗಳು ಗೋಚರಿಸದ ಹಿನ್ನೆಲೆಯಲ್ಲಿ ಮಕ್ಕಳ ಕಲಿಕಾ ನಿರಂತರತೆಗೆ ತೊಂದರೆಯಾಗದಂತೆ ಈಗಿನಿಂದಲೇ ಕ್ರಮ ವಹಿಸುವ ನಿಟ್ಟಿನಲ್ಲಿ ಬುಧವಾರ ವಿಧಾನಸೌಧದಲ್ಲಿ ಅಧಿಕಾರಿಗಳ ಸಭೆಯ ನಂತರ ಮಾತನಾಡಿದ ಅವರು, "ವಿಶೇಷವಾಗಿ ಗ್ರಾಮೀಣ ಹಾಗೂ ಸರ್ಕಾರಿ ಶಾಲಾ ಮಕ್ಕಳನ್ನು ಕಲಿಕೆಯಿಂದ ಹೊರಗುಳಿಯದಂತೆ  ಮಾಡುವುದು ಆ ಮೂಲಕ  ಅವರ ಶಿಕ್ಷಣದ ಹಕ್ಕುಗಳನ್ನು ರಕ್ಷಿಸುವುದು, ಹಾಗೆಯೇ ಕಳೆದ ಸಾಲಿನಲ್ಲಿ ಕಲಿತ ಪಾಠದಂತೆ ನಮ್ಮ ಮಕ್ಕಳನ್ನು ತಲುಪಲು ಪರ್ಯಾಯ ಕ್ರಮಗಳನ್ನು ಅನುಸರಿಸಬೇಕೆಂಬ ಕುರಿತು ಈ ಸಮಿತಿಯು ರೂಪುರೇಷೆ ಸಿದ್ಧಪಡಿಸಲಿದೆ" ಎಂದು ಮಾಹಿತಿ ನೀಡಿದ್ದಾರೆ.

ಕೊರೋನಾ ಮೂರನೇ ಅಲೆಯಲ್ಲಿ ಮಕ್ಕಳಿಗೆ ತೊಂದರೆಯಾಗಬಹುದು ಎಂದು ಪರ್ಯಾಯ ಬೋಧನಾ ಹಾಗೂ ಕಲಿಕಾ ಕ್ರಮಗಳು ಪ್ರಾಮುಖ್ಯತೆ ಹೊಂದಲಿದ್ದು, ಈ ಹಿನ್ನೆಲೆಯಲ್ಲಿ ತಜ್ಞರ ತಂಡದಿಂದ ಸಲ್ಲಿಕೆಯಾಗುವ ವರದಿಯ ಆಧಾರದಲ್ಲಿ ಬರುವ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಕಾರ್ಯೋನ್ಮುಖವಾಗಲಾಗುವುದು  ಎಂದು ಸಚಿವರು ತಿಳಿಸಿದರು.

ಲಭ್ಯವಿರುವ ಸ್ಥಿತಿಗತಿಗಳು, ಮೌಲ್ಯಾಂಕನ ಪದ್ಧತಿ, ಮಂಡಳಿ ಪರೀಕ್ಷೆಗಳು, ಆನ್ ಲೈನ್ / ದೂರಶಿಕ್ಷಣ, ಶಿಕ್ಷಕರ ತರಬೇತಿ, ಸಂಪನ್ಮೂಲ ಸದ್ಬಳಕೆ ಸೇರಿದಂತೆ ಎಲ್ಲ ಆಯಾಮ ಗಳನ್ನೂ ಆಧ್ಯಯನ ಮಾಡಿ  ವರದಿ ನೀಡಲು ಸಮಿತಿಯಲ್ಲಿ  ಖ್ಯಾತ ವಿವಿಧ ಶಿಕ್ಷಣ ತಜ್ಞರು,  ಭಾರತೀಯ ವಿಜ್ಞಾನ ಸಂಸ್ಥೆ ಪ್ರತಿನಿಧಿಗಳು,  ನಿಮ್ಹಾನ್ಸ್ ಪ್ರತಿನಿಧಿಗಳು,  ರಾಜ್ಯದ ಆರೋಗ್ಯ ಇಲಾಖೆಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರು, ಖಾಸಗಿ ಶಾಲೆಗಳ  ಪ್ರತಿನಿಧಿ, ಪೋಷಕ ಸಂಘಟನೆಯ   ಪ್ರತಿನಿಧಿಗಳು,  ಶಿಕ್ಷಕ/ಉಪನ್ಯಾಸಕರ ಸಂಘಟನೆಗಳ ಪ್ರತಿನಿಧಿಗಳು ಸೇರಿದಂತೆ ಹಿರಿಯ ಅಧಿಕಾರಿಗಳು ಇರಲಿದ್ದಾರೆ. ತಕ್ಷಣದಲ್ಲೇ ಸಮಿತಿ ರಚಿಸಿ ಇಲಾಖೆ ಅಧಿಸೂಚನೆ ಹೊರಡಿಸಿ ಒಂದು ತಿಂಗಳ ಅವಧಿಯಲ್ಲಿ ನೀಲನಕ್ಷೆಯನ್ನು  ಮಂಡಿಸಲು ಸಮಿತಿಯನ್ನು ಕೋರಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದರು.

ರಾಷ್ಟ್ರೀಯ ಶಿಕ್ಷಣ ನೀತಿ:

ರಾಷ್ಟ್ರೀಯ ಶಿಕ್ಷಣ ನೀತಿ ಕುರಿತಂತೆ ಕೇಂದ್ರ ಶಿಕ್ಷಣ ಸಚಿವರ ಸಭೆಯಲ್ಲಿ ವಿಶೇಷ ಚರ್ಚೆ ನಡೆದಿದ್ದು, ಹಲವಾರು ರಾಜ್ಯಗಳು, ಅದರ ಅನುಷ್ಠಾನಕ್ಕೆ ಸಾಕಷ್ಟು ಪೂರ್ವಭಾವಿ ಕೆಲಸಗಳನ್ನು ಕೈಗೊಂಡಿವೆ. ಕರ್ನಾಟಕ ರಾಜ್ಯದಲ್ಲಿ‌ ಇದರ‌ ಬಗ್ಗೆ  ವರದಿ ಸಲ್ಲಿಕೆಯಾದ ಬಳಿಕ ಇನ್ನಷ್ಟು ಸಾಂಸ್ಥಿಕ  ಸುಧಾರಣೆಗಳು ಅವಶ್ಯವಿದ್ದು,  ರಾಜ್ಯ ಸಂಪನ್ಮೂಲ ತಂಡದ ರಚನೆಯೂ ಸೇರಿದಂತೆ ಇದರಲ್ಲಿ ಉಲ್ಲೇಖಿಸಿರುವ ಹಲವು ಆಡಳಿತಾತ್ಮಕ ಪ್ರಕ್ರಿಯೆಗಳಿಗೆ ಚಾಲನೆ ನೀಡಲು ಕೂಡಲೇ ಕಾರ್ಯೋನ್ಮುಖರಾಗಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಸಚಿವರು ವಿವರಿಸಿದರು.

ಇದನ್ನೂ ಓದಿ: Rahul Gandhi: ಸೋಂಕಿನಿಂದ ಸಾವಿನ ಸಂಖ್ಯೆ ಏರುತ್ತಿದೆ, ಕೇಂದ್ರ ಜನರ ಗಮನವನ್ನು ಬೇರೆಡೆ ಸೆಳೆಯುತ್ತಿದೆ; ರಾಹುಲ್ ಗಾಂಧಿ ಕಿಡಿ

ಮೃತ ಶಿಕ್ಷಕರಿಗೆ ಪರಿಹಾರ;

ಕೋವಿಡ್ ನಿಂದ ರಾಜ್ಯದ ವಿವಿಧೆಡೆ ಸರ್ಕಾರಿ/ಅನುದಾನಿತ ಶಾಲೆಗಳಲ್ಲಿ ಕೆಲಸ ಮಾಡುತ್ತಿದ್ದ ಶಿಕ್ಷಕರು ಮೃತರಾಗಿರುವ ಕುರಿತು  ಅಂಕಿ ಅಂಶಗಳನ್ನು ಮಂಡಿಸಲು ಈಗಾಗಲೇ ಸೂಚನೆ ನೀಡಲಾಗಿದೆ. ಶಿಕ್ಷಕರ‌ ಕಲ್ಯಾಣ ನಿಧಿಯಿಂದ ವಿಶೇಷ ಪ್ರಕರಣವೆಂದು ಈ ಶಿಕ್ಷಕರ ಕುಟುಂಬಗಳಿಗೆ ಪರಿಹಾರ ನೀಡುವ ಕುರಿತೂ ಇಲಾಖೆ ಚಿಂತನೆ ನಡೆಸಿದೆ ಎಂದು ಅವರು ತಿಳಿಸಿದರು. ಹಾಗೆಯೇ  ಶಿಕ್ಷಕ ಸಮುದಾಯವನ್ನ ಕೋವಿಡ್ ವಾರಿಯರ್ಸ್ ಎಂದು ಪರಿಗಣಿಸಿ ಮುಂದಿನ ಶೈಕ್ಷಣಿಕ ಸಾಲಿನ ಪ್ರಾರಂಭಕ್ಕೆ ಮುನ್ನ ಮಕ್ಕಳ ಆರೋಗ್ಯಕ್ಕೆ ತೊಂದರೆಯಾಗದ ರೀತಿಯಲ್ಲಿ ಲಸಿಕೆ‌ ನೀಡುವಲ್ಲಿ ಪ್ರಾಧಾನ್ಯತೆ ನೀಡಬೇಕಿದ್ದು,

ಈ ಕುರಿತು ಆರೋಗ್ಯ ಇಲಾಖೆಗೆ ಕೂಡಲೇ‌ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದ ಸುರೇಶ್ ಕುಮಾರ್ ಈ ಕುರಿತಂತೆ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದು, ಅವರೂ ಸಹ ತಾತ್ವಿಕವಾಗಿ ಒಪ್ಪಿಗೆ ಸೂಚಿಸಿದ್ದಾರೆ.  ಈ ಬಗ್ಗೆ ಆರೋಗ್ಯ ಸಚಿವರೊಂದಿಗೆ ಸಹ  ಮಾತನಾಡುವುದಾಗಿ ತಿಳಿಸಿದರು. ಕೂಡಲೇ ಈ ಕುರಿತು ಅರೋಗ್ಯ ಇಲಾಖೆಗೆ ಸಲ್ಲಿಸಿರುವ ಅಂಕಿ ಅಂಶಗಳನ್ನು ಅನುಪಾಲಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದೂ ಸುರೇಶ್ ಕುಮಾರ್ ತಿಳಿಸಿದರು.
Published by:MAshok Kumar
First published: