HOME » NEWS » District » ALL PREPARATION FOR SECOND PUC EXAM IN BORDER DISTRICT CHAMARAJANAGAR LG

ಕೊರೋನಾ ಭೀತಿ ನಡುವೆಯೇ ದ್ವಿತೀಯ ಪಿಯು ಇಂಗ್ಲೀಷ್ ಪರೀಕ್ಷೆಗೆ ಚಾಮರಾಜನಗರದಲ್ಲಿ ಭಾರೀ ಮುಂಜಾಗ್ರತೆ

ಕರ್ನಾಟಕದಿಂದ ಕೇರಳ ಹಾಗೂ ತಮಿಳುನಾಡಿಗೆ ಹೋಗಿ ಲಾಕ್ ಡೌನ್ ಹಿನ್ನಲೆಯಲ್ಲಿ ಸಿಲುಕಿರುವ ಏಳು ವಿದ್ಯಾರ್ಥಿಗಳು ಚಾಮರಾಜನಗರ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲು ಇಚ್ಚಿಸಿದ್ದಾರೆ. ಅವರಿಗೆ ಈಗಾಗಲೇ ಜಿಲ್ಲಾಡಳಿತದಿಂದ  ಅನುಮತಿ ಕೊಡಿಸಲಾಗಿದ್ದು, ಇ-ಪಾಸ್ ಸೌಲಭ್ಯ ಕಲ್ಪಿಸಿಕೊಡಲಾಗಿದೆ.  ಇದರ ಜೊತೆಗೆ ಹೊರ ಜಿಲ್ಲೆಯ  240 ವಿದ್ಯಾರ್ಥಿಗಳು  ಸಹ ಚಾಮರಾಜನಗರ ಜಿಲ್ಲೆಯಲ್ಲಿ  ಪರೀಕ್ಷೆ ಬರೆಯಲಿದ್ದಾರೆ.

news18-kannada
Updated:June 16, 2020, 3:51 PM IST
ಕೊರೋನಾ ಭೀತಿ ನಡುವೆಯೇ ದ್ವಿತೀಯ ಪಿಯು ಇಂಗ್ಲೀಷ್ ಪರೀಕ್ಷೆಗೆ ಚಾಮರಾಜನಗರದಲ್ಲಿ ಭಾರೀ ಮುಂಜಾಗ್ರತೆ
ಸಾಂದರ್ಭಿಕ ಚಿತ್ರ.
  • Share this:
ಚಾಮರಾಜನಗರ (ಜೂ.16): ಕೊರೋನಾ ಆತಂಕದ ನಡುವೆ ಜೂನ್ 18 ರಂದು ನಡೆಯಲಿರುವ ದ್ವಿತೀಯ ಪಿಯುಸಿ ಇಂಗ್ಲೀಷ್ ಭಾಷೆಯ ಪರೀಕ್ಷೆಗೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಭಾರೀ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಪರೀಕ್ಷೆಗೆ ಎರಡು ದಿನ ಮುಂಚೆಯೇ ಎಲ್ಲಾ ಪರೀಕ್ಷಾ ಕೊಠಡಿಗಳನ್ನು ಸ್ಯಾನಿಟೈಜೇಷನ್ ಮಾಡಲಾಗಿದೆ. ಜಿಲ್ಲೆಯಲ್ಲಿ 16 ಪರೀಕ್ಷಾ ಕೇಂದ್ರಗಳ 314 ಕೊಠಡಿಗಳಲ್ಲಿ ಪರೀಕ್ಷೆ ನಡೆಯಲಿದ್ದು ಈಗಾಗಲೇ ಎಲ್ಲಾ ಕೊಠಡಿಗಳಿಗು ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ. ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಪ್ರತಿ ಕೊಠಡಿಯಲ್ಲಿ ಕನಿಷ್ಠ 12 ರಿಂದ ಗರಿಷ್ಠ 24 ವಿದ್ಯಾರ್ಥಿಗಳು ಮಾತ್ರ ಕುಳಿತುಕೊಳ್ಳುವಂತೆ ಡೆಸ್ಕ್ ವ್ಯವಸ್ಥೆ ಮಾಡಲಾಗಿದೆ.

ಜಿಲ್ಲೆಯಲ್ಲಿ 6535 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಇವರಿಗೆಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದಿಂದ ಉಚಿತವಾಗಿ ಮಾಸ್ಕ್  ನೀಡಲಾಗಿದೆ. ಈಗಾಗಲೇ ಪರೀಕ್ಷಾ ಕೇಂದ್ರಗಳಿಗೆ ಮಾಸ್ಕ್​ಗಳನ್ನು ರವಾನಿಸಲಾಗಿದೆ.  ಬೆಳಿಗ್ಗೆ 10.15 ಕ್ಕೆ ಪರೀಕ್ಷೆ ಆರಂಭವಾಗಲಿದ್ದರೂ ವಿದ್ಯಾರ್ಥಿಗಳು ಬೆಳಿಗ್ಗೆ 8.30 ಕ್ಕೆ ಪರೀಕ್ಷಾ ಕೇಂದ್ರಗಳಿಗೆ  ಬರಲು ಅವಕಾಶ ಮಾಡಿಕೊಡಲಾಗಿದೆ. ಪರೀಕ್ಷಾ ಕೇಂದ್ರಗಳ ಪ್ರವೇಶ ದ್ವಾರದಲ್ಲೇ ಪ್ರತಿ ವಿದ್ಯಾರ್ಥಿಗೂ ಮಾಸ್ಕ್ ನೀಡಿ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುವುದು. ಇದಕ್ಕಾಗಿ  ಆರೋಗ್ಯ ಸಹಾಯಕರನ್ನು ಪರೀಕ್ಷಾ  ಕೇಂದ್ರಗಳಿಗೆ ನಿಯೋಜಿಸಲಾಗಿದೆ.

ಕೋವಿಡ್ ಲಕ್ಷಣ ಇರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದಿಲ್ಲ. ಮಾಮೂಲಿ ಜ್ವರ, ಕೆಮ್ಮು ನೆಗಡಿ ಇರುವ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಗಳಲ್ಲಿ ಕೂರಿಸಿ ಪರೀಕ್ಷೆ ಬರೆಸಲಾಗವುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಿ.ಎಸ್.ಕೃಷ್ಣಮೂರ್ತಿ ನ್ಯೂಸ್ 18 ಗೆ ತಿಳಿಸಿದ್ದಾರೆ.

ಪರೀಕ್ಷಾ ಕೇಂದ್ರಕ್ಕೆ ಬರಲು ಅನುಕೂಲವಾಗುವಂತೆ ಜಿಲ್ಲೆಯ ವಿವಿದೆಡೆಯಿಂದ ಕೆ.ಎಸ್.ಆರ್.ಟಿ.ಸಿ ಬಸ್ ವ್ಯವಸ್ಥೆ ಮಾಡಲಾಗಿದೆ. ಕರ್ನಾಟಕದಿಂದ ಕೇರಳ ಹಾಗೂ ತಮಿಳುನಾಡಿಗೆ ಹೋಗಿ ಲಾಕ್ ಡೌನ್ ಹಿನ್ನಲೆಯಲ್ಲಿ ಸಿಲುಕಿರುವ ಏಳು ವಿದ್ಯಾರ್ಥಿಗಳು ಚಾಮರಾಜನಗರ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲು ಇಚ್ಚಿಸಿದ್ದಾರೆ. ಅವರಿಗೆ ಈಗಾಗಲೇ ಜಿಲ್ಲಾಡಳಿತದಿಂದ  ಅನುಮತಿ ಕೊಡಿಸಲಾಗಿದ್ದು, ಇ-ಪಾಸ್ ಸೌಲಭ್ಯ ಕಲ್ಪಿಸಿಕೊಡಲಾಗಿದೆ.  ಇದರ ಜೊತೆಗೆ ಹೊರ ಜಿಲ್ಲೆಯ  240 ವಿದ್ಯಾರ್ಥಿಗಳು  ಸಹ ಚಾಮರಾಜನಗರ ಜಿಲ್ಲೆಯಲ್ಲಿ  ಪರೀಕ್ಷೆ ಬರೆಯಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲಾಡಳಿತದಿಂದ 16 ಪರೀಕ್ಷಾ ಕೇಂದ್ರಗಳಿಗೂ ತಲಾ ಒಬ್ಬರಂತೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಇವರು ಪರೀಕ್ಷಾ ಕೇಂದ್ರಗಳ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ. ಅಲ್ಲದೆ ಪರೀಕ್ಷಾ ಕೇಂದ್ರಗಳಿಗೆ ತಲಾ ಒಬ್ಬರಂತೆ ಉಪನ್ಯಾಸಕರನ್ನು ಮಾರ್ಗದರ್ಶಕರನ್ನಾಗಿ  ನಿಯೋಜಿಸಲಾಗಿದೆ.  ಇವರು ವಿದ್ಯಾರ್ಥಿಗಳಿಗೆ ಸಾಮಾಜಿಕ ಅಂತರ, ಸ್ಯಾನಿಟೈಸರ್​​ ನಿಂದ ಕೈ ಸ್ವಚ್ಚಗೊಳಿಸಿಕೊಳ್ಳುವುದು, ಮಾಸ್ಕ್ ಧರಿಸುವುದು,  ವಿದ್ಯಾರ್ಥಿಗಳಿಗೆ ತಮ್ಮ  ರಿಜಿಸ್ಟರ್ ನಂಬರ್ ಇರುವ ಕೊಠಡಿ ಹುಡುಕಲು ನೆರವಾಗುವುದು ಸೇರಿದಂತೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಲಿದ್ದಾರೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಿ.ಎಸ್.ಕೃಷ್ಣಮೂರ್ತಿ ತಿಳಿಸಿದ್ದಾರೆ.
Youtube Video
ಇದಲ್ಲದೆ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಎದುರಾಗದಂತೆ ಗಮನಹರಿಸಲು ಒಬ್ಬ ಉಪನ್ಯಾಸಕರಿಗೆ ತಲಾ 20 ವಿದ್ಯಾರ್ಥಿಗಳ ಜವಬ್ದಾರಿ ನೀಡಲಾಗಿದೆ. ಆಯಾ ಉಪನ್ಯಾಸಕರು ವಿದ್ಯಾರ್ಥಿಗಳೊಂದಿಗೆ ಫೋನ್ ಸಂಪರ್ಕದಲ್ಲಿದ್ದು ತೊಂದರೆಗಳಿದ್ದರೆ ಬಗೆಹರಿಸಿ ಅವರು  ಪರೀಕ್ಷಾ ಕೇಂದ್ರಕ್ಕೆ ಹಾಜರಾಗಲು ನೆರವಾಗಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

 

 

 
First published: June 16, 2020, 3:51 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories