ದೇವನಹಳ್ಳಿ: ದೇಶದ ವಿವಿಧ ರಾಜ್ಯಗಳಲ್ಲಿ ಹಕ್ಕಿ ಜ್ವರ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು. ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾಣಿಜನ್ಯ ರೋಗಗಳ ತುರ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದುವರೆಗೂ ಹಕ್ಕಿಜ್ವರದ ಯಾವುದೇ ಪ್ರಕರಣಗಳು ಪತ್ತೆಯಾಗಿರುವುದಿಲ್ಲ. ಹಕ್ಕಿ ಜ್ವರದ ಬಗ್ಗೆ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ಇದುವರೆಗೂ 254 ಹಕ್ಕಿಗಳ ದ್ರಾವಣದ ಮಾದರಿಯನ್ನು ಸಂಗ್ರಹಿಸಿ ಪ್ರಾಣಿ ಆರೋಗ್ಯ ಮತ್ತು ಜೈವಿಕ ಸಂಸ್ಥೆಗೆ ಕಳಿಸಲಾಗಿದ್ದು, ಎಲ್ಲಾ ವರದಿಗಳು ನೆಗೆಟಿವ್ ಎಂದು ಬಂದಿರುತ್ತದೆ. ಜನರು ಕೋಳಿ ಮಾಂಸ ಮತ್ತು ಮೊಟ್ಟೆಯನ್ನು ಚೆನ್ನಾಗಿ ಬೇಯಿಸಿ ತಿನ್ನಬಹುದು ಎಂದು ಸಲಹೆ ನೀಡಿದರು.
ಜಿಲ್ಲಾ ವ್ಯಾಪ್ತಿಯಲ್ಲಿ ಐದಕ್ಕಿಂತ ಹೆಚ್ಚು ಹಕ್ಕಿಗಳು ಅಸಹಜ ಸಾವು ಕಂಡುಬಂದಲ್ಲಿ ಸಾರ್ವಜನಿಕರು ಕೂಡಲೇ ಹತ್ತಿರದ ಸ್ಥಳೀಯ ಸಂಸ್ಥೆ, ಪಶುವೈದ್ಯ ಇಲಾಖೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ತಿಳಿಸಿದರು.
ಇದನ್ನೂ ಓದಿ: ಬೆಳಗಾವಿಗೆ ಲಗ್ಗೆ ಹಾಕಲು ಶಿವಸೈನಿಕರ ಪ್ರಯತ್ನ; ಶಿನ್ನೊಳ್ಳಿ ಗಡಿಭಾಗದಲ್ಲಿ ಪೊಲೀಸರೊಂದಿಗೆ ತಿಕ್ಕಾಟ
ಜಿಲ್ಲೆಯಲ್ಲಿರುವ ಕೆರೆಗಳ ನೀರನ್ನು ಪರೀಕ್ಷಿಸುವ ಕಾರ್ಯ ಮಾಡಬೇಕು ಎಂದರಲ್ಲದೆ, ಕೋಳಿ ಸಾಕಾಣಿಕೆ, ಕಸಾಯಿಖಾನೆ, ಕೋಳಿ ಮಾಂಸದ ಅಂಗಡಿಗಳಿಗೆ ಭೇಟಿ ನೀಡಿ ಸ್ವಚ್ಛತೆ ಬಗ್ಗೆ ಪರಿಶೀಲಿಸುವ ಜೊತೆಗೆ ತ್ಯಾಜ್ಯವನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ ಅವರು, ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಸಭೆ ನಡೆಸುವ ಮೂಲಕ ಹಕ್ಕಿ ಜ್ವರದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ. ಉದಾಸೀನತೆ ತೋರದೆ, ಎಚ್ಚರಿಕೆ ವಹಿಸಿ ಎಂದು ಅಪ್ಪಣೆ ಮಾಡಿದರು.
ಪಶುಪಾಲನೆ ಮತ್ತು ಪಶು ವೈದ್ಯಕೀಯ ಇಲಾಖೆ ಉಪ ನಿರ್ದೇಶಕ ಡಾ. ಜಿ ಎಂ ನಾಗರಾಜು ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 385 ಕೋಳಿ ಸಾಕಾಣಿಕೆ ಕೇಂದ್ರಗಳಿದ್ದು, ಒಟ್ಟಾರೆ 31,38,559 ಕೋಳಿಗಳನ್ನು ಸಾಕಲಾಗುತ್ತಿದೆ ಹಾಗೂ ಹೊಸಕೋಟೆ ತಾಲ್ಲೂಕಿನ ಅಮಾನಿಕೆರೆ ಮಾತ್ರ ವಲಸೆ ಹಕ್ಕಿಗಳ ತಾಣವಾಗಿದೆ ಎಂದರು.
ನಾಲ್ಕು ತಾಲ್ಲೂಕಿನ ಪಶು ಪಾಲನಾ ಇಲಾಖೆ ಸಹಾಯಕ ನಿರ್ದೇಶಕರು ಕೋಳಿ ಸಾಕಾಣಿಕೆ ಕೇಂದ್ರಗಳಿಗೆ ಭೇಟಿ ನೀಡಿ ಕೋಳಿಗಳ ಅಸಹಜ ಸಾವಿನ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸುತ್ತಿದ್ದು, ಹಕ್ಕಿಜ್ವರದ ಯಾವುದೇ ಪ್ರಕರಣಗಳು ವರದಿಯಾಗಿಲ್ಲ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ: ಹಣ ಡಬ್ಲಿಂಗ್ ಆಮಿಷ, 20 ಕೋಟಿ ಪಂಗನಾಮ: ಸಿಐಡಿ ತನಿಖೆಗೆ ಆಗ್ರಹಿಸಿ ಪ್ರತಿಭಟನೆ
ಪ್ರಾಣಿ ಆರೋಗ್ಯ ಮತ್ತು ಜೈವಿಕ ಸಂಸ್ಥೆಯ ವಿಜ್ಞಾನಿ ಡಾ. ಶಿವರಾಜು ಹಕ್ಕಿ ಜ್ವರದ ಬಗ್ಗೆ ಮಾಹಿತಿ ನೀಡುತ್ತಾ, ಸೋಂಕಿತ ಹಕ್ಕಿಗಳ ಹಿಕ್ಕೆ, ಕಣ್ಣು, ಮೂಗು ದ್ರವದ ನೇರ ಸಂಪರ್ಕದಿಂದ ಗಾಳಿಯ ಮೂಲಕ ಹಾಗೂ ಸೋಂಕಿತ ಕೋಳಿ ಆಹಾರ, ನೀರು ಮತ್ತು ಉಪಕರಣಗಳಿಂದ ಈ ವೈರಸ್ ಹರಡುತ್ತದೆ ಎಂದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುಳಾ ದೇವಿ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಆಂಥೋಣಿ ಮಾರಿಯಪ್ಪನ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಸುಮಾ, ಪಶುವೈದ್ಯಕೀಯ ಸಹಾಯಕ ನಿರ್ದೇಶಕ ಡಾ.ಅನಿಲ್‌ಕುಮಾರ್, ನಗರಸಭೆ ಪೌರಾಯುಕ್ತರು/ಮುಖ್ಯಾಧಿಕಾರಿಗಳು ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
ವರದಿ: ನವೀನ್ ಕುಮಾರ್
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ