ಚಿಕ್ಕಮಗಳೂರು: ಕೊರೋನಾಗೆ ಚಿಕಿತ್ಸೆ ಪಡೆಯುತ್ತಿರುವಾಗಲೇ ಕೊರೋನಾ ರೋಗಿ ಬ್ಲಾಕ್ ಫಂಗಸ್‍ಗೆ ಒಳಗಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಹಳ್ಳಿಯೊಂದರ 45 ವರ್ಷದ ತಮ್ಮಯ್ಯ ಎಂಬ ವ್ಯಕ್ತಿಗೆ ಕಳೆದ ನಾಲ್ಕೈದು ದಿನಗಳ ಹಿಂದೆ ಕೊರೋನಾ ಪಾಸಿಟಿವ್ ಬಂದಿತ್ತು. ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಅವರನ್ನು ಕಡೂರಿನ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿತ್ತು. ಆದರೆ, ಹೆಚ್ಚಿನ ಚಿಕಿತ್ಸೆಗೆಂದು ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಿವಮೊಗ್ಗದಲ್ಲಿ ಸಿಟಿ ಸ್ಕ್ಯಾನ್ ಮಾಡಿಸಿದ ಬಳಿಕ ತಮ್ಮಯ್ಯಗೆ ಕೊರೋನಾ ಪಾಸಿಟಿವ್ ಜೊತೆ ಬ್ಲ್ಯಾಕ್ ಫಂಗಸ್ ಇರುವುದು ಬೆಳಕಿಗೆ ಬಂದಿದೆ. ಅವರಿಗೆ ಅಲ್ಲೇ ಚಿಕಿತ್ಸೆ ಮುಂದುವರೆಸಿ ಚಿಕ್ಕಮಗಳೂರಿಗೆ ರವಾನಿಸಲಾಗಿತ್ತು.
ಚಿಕ್ಕಮಗಳೂರಿನಿಂದ ಹೆಚ್ಚಿನ ಚಿಕಿತ್ಸೆಗೆಂದು ಸದ್ಯ ಮಂಗಳೂರಿನ ವೆನ್‍ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರಿನಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿರುವ ವ್ಯಕ್ತಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೊರೋನಾದಿಂದ ಗುಣಮುಖರಾದವರಿಗೆ ಬ್ಲ್ಯಾಕ್ ಫಂಗಸ್ ಕಾಡಲಿದೆ ಎಂಬ ಸುದ್ದಿಯ ಮಧ್ಯೆ ಕೊರೋನಾಗೆ ಚಿಕಿತ್ಸೆ ಪಡೆಯುತ್ತಿರುವಾಗಲೇ ಬ್ಲ್ಯಾಕ್ ಫಂಗಸ್ ಪತ್ತೆಯಾಗಿರುವುದು ಜಿಲ್ಲೆಯ ಜನರಲ್ಲಿ ಆತಂಕ ಹುಟ್ಟಿಸಿದೆ. ಈಗಾಗಲೇ ರಾಜ್ಯದಲ್ಲಿ ಸಾಕಷ್ಟು ಬ್ಲ್ಯಾಕ್ ಫಂಗಸ್ ಪ್ರಕರಣಗಳು ಕಾಣಿಸಿಕೊಂಡಿವೆ. ಅದರಲ್ಲಿ ಎಲ್ಲರೂ ಕೊರೋನಾ ಸೋಂಕು ತಗುಲಿ ಗುಣಮುಖರಾದವರಲ್ಲಿ ಕಾಣಿಸಿಕೊಂಡಿದ್ದು ಹೆಚ್ಚು, ಆದರೆ
ಕಾಫಿನಾಡಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡ ಕೆಲ ದಿನಗಳಲ್ಲಿ ಸಿಟಿ ಸ್ಕ್ಯಾನ್ ಮಾಡಿಸಿದ್ದಾಗ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿರೋದು ವೈದ್ಯರಿಗೆ ಅಚ್ಚರಿ ಮೂಡಿಸಿದೆ.
ಈ ಬಗ್ಗೆ ಜಿಲ್ಲಾ ಆರೋಗ್ಯಧಿಕಾರಿ ಡಾ.ಉಮೇಶ್ ಮಾಹಿತಿ ನೀಡಿದ್ದು, ನಮ್ಮ ಜಿಲ್ಲೆಯಲ್ಲಿ ಸದ್ಯ ಒಂದು ಪ್ರಕರಣ ಪತ್ತೆಯಾಗಿದೆ. ಅವರು ಸದ್ಯ ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಂದು ಪ್ರಕರಣ ಬಿಟ್ಟು ಮತ್ತೆ ಯಾವುದೇ ಬ್ಲ್ಯಾಕ್ ಫಂಗಸ್ ಪತ್ತೆಯಾಗಿಲ್ಲ ಎಂದು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆಯಾಗಿರುವ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗಿದೆ.
ಇದನ್ನು ಓದಿ: ನಾಳೆ ಸಿಎಂ ಮಹತ್ವದ ಸುದ್ದಿಗೋಷ್ಠಿ; ಲಾಕ್ಡೌನ್ ಜೊತೆಗೆ ವಿಶೇಷ ಪ್ಯಾಕೇಜ್ ಘೋಷಣೆ ಸಾಧ್ಯತೆ; ಯಾರಿಗೆ ಯಾವ ನೆರವು?
ಕಾಫಿನಾಡಲ್ಲಿ ಸದ್ಯ ಕೊರೋನಾ ಆರ್ಭಟ ಜೋರಾಗಿದ್ದು ದಿನೇ ದಿನೇ ಕೊರೋನಾ ಕೇಸ್ಗಳು ಜಾಸ್ತಿಯಾಗಿವೆ. ಅಲ್ಲದೇ ಸಾವುಗಳ ಸಂಖ್ಯೆಯೂ ಜಾಸ್ತಿಯಾಗಿವೆ. ಈ ಮಧ್ಯೆ ಹಳ್ಳಿಗಳಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗಿ ಹಳ್ಳಿಯ ಜನರು ಕೂಡ ಆತಂಕದಲ್ಲೇ ದಿನ ದೂಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಮಧ್ಯೆ ಕಡೂರು ತಾಲೂಕಿನ ಹಳ್ಳಿವೊಂದರಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದ್ದು ಹಳ್ಳಿಯ ಜನರು ಮತ್ತೆ ಆತಂಕಕ್ಕೆ ಒಳಗಾಗಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ