ಪಿಯುಸಿ ಪರೀಕ್ಷೆಗೆ ಕಾಫಿನಾಡಲ್ಲಿ ಸಿದ್ಧತೆ; ಕೊರೋನಾತಂಕದ ನಡುವೆಯೂ ವಿದ್ಯಾರ್ಥಿಗಳು ಎಕ್ಸಾಂಗೆ ರೆಡಿ

ದೂರದ ಹಾಗೂ ಗ್ರಾಮೀಣ ಪ್ರದೇಶದಿಂದ ಬರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಉಚಿತ ಕೆಎಸ್ಆರ್‌ಟಿಸಿ ರೂಟ್ ಬಸ್ ಹಾಗೂ ವಿಶೇಷ ಬಸ್ ವ್ಯವಸ್ಥೆಯನ್ನು  ಕಲ್ಪಿಸಲಾಗಿದ್ದು ವಿದ್ಯಾರ್ಥಿಗಳು ತಮ್ಮಗೆ ಯಾವುದು ಅನುಕೂಲವೋ ಅದನ್ನು ಬಳಸಿಕೊಳ್ಳಬಹುದಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಚಿಕ್ಕಮಗಳೂರು (ಜೂನ್‌ 16); ಕೊರೋನಾ ಆತಂಕದ ಮಧ್ಯೆ ದೇಶವೇ ಲಾಕ್ ಡೌನ್ ಆದ ಹಿನ್ನೆಲೆ ಮುಂದೂಡಿಕೆಯಾಗಿದ್ದ ದ್ವಿತೀಯ ಪಿಯುಸಿ ಇಂಗ್ಲೀಷ್‌ ಭಾಷಾ ಪರೀಕ್ಷೆ ಜೂನ್ 18ಕ್ಕೆ ನಿಗದಿಯಾಗಿದೆ. ಈ ಪರೀಕ್ಷೆಗೆ ಕಾಫಿನಾಡು ಚಿಕ್ಕಮಗಳೂರಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, 9,986 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 18 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಚಿಕ್ಕಮಗಳೂರು ನಗರದಲ್ಲಿ-5, ಕಡೂರು ಪಟ್ಟಣದಲ್ಲಿ-2, ಬೀರೂರು ಪಟ್ಟಣದಲ್ಲಿ-1, ಕಡೂರು ತಾಲ್ಲೂಕು ದೇವನೂರಿನಲ್ಲಿ-1, ಅಜ್ಜಂಪುರ-1, ತರೀಕೆರೆ ಪಟ್ಟಣದಲ್ಲಿ-2, ಎನ್.ಆರ್.ಪುರ-1, ಕೊಪ್ಪ ಪಟ್ಟಣದಲ್ಲಿ-1, ಶೃಂಗೇರಿ-1, ಬಾಳೆಹೊನ್ನೂರು-1, ಕಳಸ-1, ಮೂಡಿಗೆರೆಯಲ್ಲಿ-1 ಕೇಂದ್ರಗಳನ್ನು ತೆರೆಯಲಾಗಿದೆ.

18 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 9,986 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, 1,300 ಹೊರ ಜಿಲ್ಲೆಗಳ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಹೊರ ಜಿಲ್ಲೆಗಳ ವಿದ್ಯಾರ್ಥಿಗಳ ಪೈಕಿ ದಕ್ಷಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅದೇ ರೀತಿ ಜಿಲ್ಲೆಯ 112 ವಿದ್ಯಾರ್ಥಿಗಳು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ.

ಈಗಾಗಲೇ ಜಿಲ್ಲೆಯಲ್ಲಿ ತೆರೆಯಲಾಗಿರುವ ಎಲ್ಲಾ ಪರೀಕ್ಷಾ ಕೇಂದ್ರಗಳನ್ನು ಸಾನಿಟೈಸರ್ ಹಾಗೂ ರಾಸಾಯನಿಕ ಬಳಸಿ ಶುಚಿಗೊಳಿಸಲಾಗಿದೆ. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಆಗಮಿಸುತ್ತಿದ್ದಂತೆ ಅವರು ಕೈಗಳನ್ನು ಶುದ್ಧೀಕರಿಸಿಕೊಳ್ಳಲು ಪರೀಕ್ಷಾ ಕೇಂದ್ರದ ಪ್ರವೇಶ ದ್ವಾರಗಳಲ್ಲಿ ಸ್ಯಾನಿಟೈಸರ್ ಹಾಗೂ ಸೋಪು ನೀರಿನ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಪ್ರವೇಶಿಸುವ ಮುನ್ನಾ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ಯಾನಿಂಗ್ ನಡೆಸಲು ಸಕಲ ಸಿದ್ಧತೆ ಮಾಡಿಕೊಂಡಿದ್ದು, ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತರು  ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ಯಾನಿಂಗ್ ನಡೆಸಿದ ನಂತರವೇ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರದ ಒಳ ಪ್ರವೇಶಿಸಲು ಅವಕಾಶ ನೀಡಲಿದ್ದಾರೆ. ಈ ಸಂಬಂಧ ಆರೋಗ್ಯ ಇಲಾಖೆಯೊಂದಿಗೆ ಶಿಕ್ಷಣ ಇಲಾಖೆ ಚರ್ಚಿಸಿದ್ದು ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳು ಕಾರ್ಯ ನಿರ್ವಹಿಸಲಿದ್ದಾರೆ.

ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸಲು 600ಕ್ಕೂ ಅಧಿಕ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ಒಂದು ಕೊಠಡಿಯಲ್ಲಿ 24 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅವಕಾಶವಿದ್ದು, ಕೊಠಡಿಗಳು ಚಿಕ್ಕದಿದ್ದರೇ 16 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲು ಸಿದ್ಧತೆ ನಡೆಸಲಾಗಿದೆ. ಒಂದು ಡೆಸ್ಕ್‌ನಿಂದ ಮತ್ತೊಂದು ಡೆಸ್ಕ್‌ಗೆ ಒಂದೂವರೆ ಮೀಟರ್ ಅಂತರ ಕಾಯ್ದುಕೊಳ್ಳುವಂತೆ ಮಾಡಲಾಗಿದೆ.

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿ ಬರುವಂತೆ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಮನವರಿಕೆ ಮಾಡಿಕೊಡಲಾಗಿದೆ. ಒಂದು ವೇಳೆ ವಿದ್ಯಾರ್ಥಿಗಳು ಮಾಸ್ಕ್ ಮೆರೆತು ಪರೀಕ್ಷಾ ಕೇಂದ್ರಕ್ಕೆ ಬಂದಲ್ಲಿ ಅವರಿಗೆ ಮಾಸ್ಕ್ ನೀಡಲು ಮಾಸ್ಕ್‌ಗಳನ್ನು ಸಂಗ್ರಹಿಸಿಟ್ಟುಕೊಳ್ಳಲಾಗಿದೆ. ಸಾಕಷ್ಟು ಪ್ರಮಾಣದಲ್ಲಿ ಸ್ಯಾನಿಟೈಸರ್ ಸಹ ಸಂಗ್ರಹಿಸಿಟ್ಟುಕೊಳ್ಳಲಾಗಿದೆ.

ದೂರದ ಹಾಗೂ ಗ್ರಾಮೀಣ ಪ್ರದೇಶದಿಂದ ಬರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಉಚಿತ ಕೆಎಸ್ಆರ್‌ಟಿಸಿ ರೂಟ್ ಬಸ್ ಹಾಗೂ ವಿಶೇಷ ಬಸ್ ವ್ಯವಸ್ಥೆಯನ್ನು  ಕಲ್ಪಿಸಲಾಗಿದ್ದು ವಿದ್ಯಾರ್ಥಿಗಳು ತಮ್ಮಗೆ ಯಾವುದು ಅನುಕೂಲವೋ ಅದನ್ನು ಬಳಸಿಕೊಳ್ಳಬಹುದಾಗಿದೆ.

ಇದನ್ನೂ ಓದಿ; ಕೊರೋನಾ ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಎಲ್ಲಾ ರಾಜ್ಯಗಳಿಗೂ ಪಂಜಾಬ್ ಮಾದರಿಯಾಗಲಿ; ನರೇಂದ್ರ ಮೋದಿ

ಪರೀಕ್ಷಾ ಕೇಂದ್ರಕ್ಕೆ ಬರಲು ಬಹಳಷ್ಟು ತೊಂದರೆಯಿರುವ ಕಮ್ಮರಡಿಯಿಂದ ಕೊಪ್ಪ ಹಾಗೂ ಕಮ್ಮರಡಿಯಿಂದ ಶೃಂಗೇರಿ ಖಾಸಗಿ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಇದಲ್ಲದೆ ವಿದ್ಯಾರ್ಥಿಗಳಿಗೆ ಸಹಾಯವಾಣಿ ಸಂಖ್ಯೆಯನ್ನು ಜಿಲ್ಲಾಡಳಿತ ನೀಡಿದೆ.

ವಿದ್ಯಾರ್ಥಿಗಳ ಸಹಾಯವಾಣಿ ಸಂಖ್ಯೆ: 08262-232128, 9449083291.
First published: