ದೇವನಹಳ್ಳಿ: ಮಕ್ಕಳ ಹಕ್ಕುಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹೆಚ್ಚಾಗಿ ಹಮ್ಮಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷ ಡಾ.ಆಂಥೋಣಿ ಸೆಬಾಸ್ಟಿಯನ್ ಅಭಿಪ್ರಾಯ ಪಟ್ಟಿದ್ದಾರೆ. ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಗ್ರಾಮಾಂತರ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸಹಯೋಗದೊಂದಿಗೆ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತಿ ಕಚೇರಿ ಸಭಾಂಗಣದಲ್ಲಿ ನಡೆದ "ಆರ್.ಟಿ.ಇ ಪೋಕ್ಸೋ-2012, ಬಾಲ ನ್ಯಾಯ ಕಾಯ್ದೆ ಅನುಷ್ಠಾನದ ಬಗ್ಗೆ ವಿವಿಧ ಇಲಾಖೆಗಳ ಭಾಗೀದಾರರೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆ" ಯಲ್ಲಿ ಅವರು ಮಾತನಾಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಾಲ್ಯ ವಿವಾಹ, ಬಾಲ ಕಾರ್ಮಿಕ ಪ್ರಕರಣಗಳು ಕಡಿಮೆಯಾಗಬೇಕು ಎಂದರಲ್ಲದೆ, ಮಕ್ಕಳಿಗೆ ಸರಿಯಾದ ಶಿಕ್ಷಣ ನೀಡುವಲ್ಲಿ ಅಧಿಕಾರಿಗಳು ಸೂಕ್ತ ಕ್ರಮ ಜರುಗಿಸಬೇಕು ಹಾಗೂ ನಿರ್ಗತಿಕ ಮಕ್ಕಳಿಗೆ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಆಂಥೋಣಿ ಸೆಬಾಸ್ಟಿಯನ್ ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಯಾದ ಆರ್. ನಟೇಶ್ ಮಾತನಾಡಿ, ಮಕ್ಕಳಿಗೆ ಮುಕ್ತವಾಗಿ ಮಾತನಾಡುವ ಪರಿಸರ ನಿರ್ಮಾಣ ಮಾಡಬೇಕು, ಹಿಂದಿನ ಕಾಲದಂತೆ ಶಿಕ್ಷಣ ನೀಡವಲ್ಲಿ ಗುರುಕುಲ ಪದ್ದತಿಯ ಶಿಕ್ಷಣ ನೀಡಲು ಈಗ ಸಾಧ್ಯವಿಲ್ಲವಾದರೂ ಸರ್ಕಾರದ ಮಾರ್ಗಸೂಚನೆ ಅನ್ವಯ ಮಕ್ಕಳಿಗೆ ಶಿಕ್ಷಣ ನೀಡಬೇಕಾಗಿರುವುದರಿಂದ ಈ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಮಾತನಾಡಿ, ಸರ್ಕಾರದಿಂದ ಸೌಲಭ್ಯ ಪಡೆದು ಮಕ್ಕಳ ರಕ್ಷಣೆ, ಆರೋಗ್ಯ, ಯೋಗಕ್ಷೇಮ ಹಾಗೂ ಶಿಕ್ಷಣವನ್ನು ನೀಡಬೇಕು ಎಂದರಲ್ಲದೆ, ಮಕ್ಕಳ ಸರ್ವತೋಮುಖ ಬೆಳವಣಿಗೆಯ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದರು.
ಇದನ್ನೂ ಓದಿ: ಸಂಪುಟದಲ್ಲಿ ಸಮಾನತೆ ಇಲ್ಲ; ಬೆಂಗಳೂರು, ಬೆಳಗಾವಿಗೇ ಅರ್ಧಕ್ಕಿಂತ ಹೆಚ್ಚು ಕ್ಯಾಬಿನೆಟ್: ತಿಪ್ಪಾರೆಡ್ಡಿ ಬೇಸರ
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಆರ್.ರವಿಕುಮಾರ್ ಮಾತನಾಡಿ, ಬಾಲ್ಯ ವಿವಾಹವು ಮೊದಲು ಎರಡು ವರ್ಷಗಳಿಗೆ ಹೋಲಿಸಿದರೆ ಕಡಿಮೆಯಾಗಿದೆ. ಬಾಲ್ಯ ವಿವಾಹ ತಡೆಗಟ್ಟುವಲ್ಲಿ ಯಾವುದಾದರೂ ಪೊಲೀಸ್ ಠಾಣೆಯವರು ಸಹಕಾರ ನೀಡದಿದ್ದರೆ, ಅಂತಹ ಠಾಣೆಗಳ ಹೆಸರುಗಳನ್ನು ನೀಡಿದರೆ ಸೂಕ್ತ ಕ್ರಮ ಜರುಗಿಸುತ್ತೇವೆ. ಮಕ್ಕಳ ಗ್ರಾಮ ಸಭೆಯನ್ನು ಕಡ್ಡಾಯವಾಗಿ ಮಾಡಬೇಕು. ಅಲ್ಲದೇ ಸೌಲಭ್ಯವಿರುವ ಕಡೆಗಳಲ್ಲಿ ಡಿಜಿಟಲ್ ಗ್ರಂಥಾಲಯಗಳನ್ನು ತೆರೆಯಬೇಕು ಎಂದು ಸೂಚಿಸಿದರು.
ಮಕ್ಕಳು ತಮ್ಮ ಹಕ್ಕುಗಳನ್ನು ನಿವೇದನೆ ಮಾಡಿಕೊಳ್ಳಲು ಮನೆ, ಬೀದಿ, ಶಾಲೆಗಳಲ್ಲಿ ಯಾವುದಾದರೂ ಸಮಸ್ಯೆಗಳಿದ್ದರೆ ಅದನ್ನು ಮುಕ್ತವಾಗಿ ಹೇಳಿಕೊಳ್ಳಲು ಧ್ವನಿ ಪೆಟ್ಟಿಗೆಗಳನ್ನಿರಿಸುವ ವ್ಯವಸ್ಥೆ ಮಾಡಬೇಕು ಎಂದರಲ್ಲದೆ, ಮಕ್ಕಳ ಸಮಸ್ಯೆಗಳಿಗೆ ಶೀಘ್ರವಾಗಿ ಸ್ಪಂದಿಸಬೇಕು. ಹಾಗೂ ವಾರದ ಸಭೆ ಮಾಡುವ ಮೂಲಕ ಮಕ್ಕಳಿಗೆ ವೈಜ್ಞಾನಿಕ ಮನೋಭಾವ ಹೆಚ್ಚಿಸಬೇಕು ಎಂದು ತಿಳಿಹೇಳಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಡಿ. ಶಂಕರಪ್ಪ ಅವರು ಮಾತನಾಡಿ, ನಿಖರವಾದ ಮಾಹಿತಿ ಇಲ್ಲದೇ ಸಭೆಗೆ ಹಾಜರಾಗುವುದು ತಪ್ಪು. ಬಾಲ ಕಾರ್ಮಿಕ ಮಕ್ಕಳನ್ನು ಸರಿಯಾಗಿ ಗುರುತಿಸಿ, ಅವರಿಗೆ ಶಿಕ್ಷಣ ಕೊಡಿಸುವ ಕೆಲಸವಾಗಬೇಕು ಎಂದರು. ಆಯಾ ತಾಲ್ಲೂಕುಗಳಲ್ಲಿರುವ ಮಕ್ಕಳನ್ನು ಬಾಲ ಕಾರ್ಮಿಕ ಪದ್ದತಿಯಿಂದ ಮುಕ್ತಿ ಕೊಡಿಸಬೇಕು ಹಾಗೂ ಅಧಿಕಾರಿಗಳು ಸಭೆಗೆ ಬರುವ ಮುನ್ನ ಸಂಕ್ಷಿಪ್ತ ಮಾಹಿತಿಯೊಂದಿಗೆ ಬರಬೇಕು ಎಂದು ತಿಳಿಸಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಹೇಮಾವತಿ ಎನ್ ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ 2020-21ನೇ ಸಾಲಿನ ಬಾಲ್ಯವಿವಾಹ, ಬಾಲ ಕಾರ್ಮಿಕ, ನಿರಾಶ್ರಿತ ಮಕ್ಕಳು, ವಲಸೆ ಮಕ್ಕಳು, ನಿರ್ಗತಿಕ ಮಕ್ಕಳು, ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ಮಕ್ಕಳು, ಶಿಕ್ಷಣ ವಂಚಿತ ಮಕ್ಕಳಿಗೆ ತೆಗೆದುಕೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಿದರು.
ಸಭೆಯಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ. ಜಯಶ್ರೀ, ಪರಶುರಾಮ್ ಎಂ.ಎಲ್., ಹೆಚ್. ಸಿ. ರಾಘವೇಂದ್ರ, ಭಾರತಿ, ಅಶೋಕ್ ಜಿ. ಯರಗಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಪುಷ್ಪಾ ಜಿ. ರಾಯರ್ ಮತ್ತಿತ್ತರರು ಹಾಜರಿದ್ದರು.
ವರದಿ: ಎಸ್ ನವೀನ್ ಕುಮಾರ್
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ