ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಎಲ್ಲ ಸಿದ್ಧತೆ: ಸಚಿವ ಸುರೇಶ್ ಕುಮಾರ್

ರಾಜ್ಯದಲ್ಲಿ ಕೋವಿಡ್ ಸೋಂಕಿನ ಎರಡನೇ ಅಲೆ ತೀವ್ರವಾಗಿ ಇಳಿಮುಖ ಕಾಣುತ್ತಿರುವುದು ಪೋಷಕರು ಮತ್ತು ಮಕ್ಕಳಲ್ಲಿ ಸಂತಸದ ಭಾವನೆ ಮೂಡಿಸಿದ್ದು ಪರೀಕ್ಷೆಗೆ ಮಕ್ಕಳನ್ನು ಧೈರ್ಯವಾಗಿ ಕಳಿಸಲು ಪೋಷಕರು ಉತ್ಸುಕವಾಗಿರುವುದು ಕಂಡು ಬಂದಿದೆ ಎಂದು ಸಚಿವರು ಹೇಳಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆ ಕುರಿತು ಸಚಿವ ಸುರೇಶ್​ ಕುಮಾರ್​ ಮಂಗಳವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆ ಕುರಿತು ಸಚಿವ ಸುರೇಶ್​ ಕುಮಾರ್​ ಮಂಗಳವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

  • Share this:
ಬೆಂಗಳೂರು: ಈ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಎಲ್ಲ ಅಧಿಕಾರಿಗಳು, ಶಿಕ್ಷಕರು ಮತ್ತು ಸಿಬ್ಬಂದಿ ಲಸಿಕೆ ಪಡೆಯುವುದರೊಂದಿಗೆ ಪರೀಕ್ಷೆ ಸುರಕ್ಷಿತ ವಾತಾವರಣದಲ್ಲಿ ಅಚ್ಚುಕಟ್ಟಾಗಿ ನಡೆಯಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಈ ಕುರಿತಂತೆ ಮಕ್ಕಳು ಮತ್ತು ಪೋಷಕರಲ್ಲಿ ಆತ್ಮ ವಿಶ್ವಾಸ ಮೂಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. 

ಮಂಗಳವಾರ ಜಿಲ್ಲಾ ಶೈಕ್ಷಣಿಕ ಉಪನಿರ್ದೇಶಕರು ಮತ್ತು ಬಿಇಒಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಸಿದ್ಧತೆ ಕುರಿತು ಪರಿಶೀಲನೆ ನಡೆಸಿ ಮಾರ್ಗದರ್ಶನ ನೀಡಿದ ನಂತರ ಮಾತನಾಡಿದ ಅವರು, ಹೊಸ ರೀತಿಯಲ್ಲಿ ನಡೆಯುತ್ತಿರುವ ಪರೀಕ್ಷೆಗಳನ್ನು ಬರೆಯುವ ಕುರಿತು ಮಕ್ಕಳ ಮನಃಸ್ಥಿತಿ ಕುರಿತು ಮಾಹಿತಿ ಪಡೆದುಕೊಂಡು, ಕಳೆದ ಬಾರಿಯಂತೆ ಎಲ್ಲ ಅಧಿಕಾರಿಗಳು ಮತ್ತು ಶಿಕ್ಷಕರು ಈ ಬಾರಿಯೂ ಪರೀಕ್ಷೆಯ ಯಶಸ್ಸಿಗೆ ಸಹಕರಿಸಿ ಮಕ್ಕಳ ಹಿತಕ್ಕಾಗಿ ಶ್ರಮಿಸಬೇಕೆಂದು ಸೂಚನೆ ನೀಡಿದರು.

ರಾಜ್ಯದಲ್ಲಿ ಕೋವಿಡ್ ಸೋಂಕಿನ ಎರಡನೇ ಅಲೆ ತೀವ್ರವಾಗಿ ಇಳಿಮುಖ ಕಾಣುತ್ತಿರುವುದು ಪೋಷಕರು ಮತ್ತು ಮಕ್ಕಳಲ್ಲಿ ಸಂತಸದ ಭಾವನೆ ಮೂಡಿಸಿದ್ದು ಪರೀಕ್ಷೆಗೆ ಮಕ್ಕಳನ್ನು ಧೈರ್ಯವಾಗಿ ಕಳಿಸಲು ಪೋಷಕರು ಉತ್ಸುಕವಾಗಿರುವುದು ಕಂಡು ಬಂದಿದೆ ಎಂದು ಸಚಿವರು ಹೇಳಿದರು.

ಶೇಕಡಾ 95 ಕ್ಕಿಂತ ಹೆಚ್ಚು ಸಂಖ್ಯೆಯ ಪರೀಕ್ಷಾ ಸಿಬ್ಬಂದಿ ಲಸಿಕೆಯನ್ನು ಈಗಾಗಲೇ ಪಡೆದುಕೊಂಡಿರುವುದು ಅತ್ಯಂತ ಭರವಸೆ ತಂದಿರುವ ಸಂಗತಿ. ಇನ್ನುಳಿದವರು ಇನ್ನೆರಡು ದಿನಗಳಲ್ಲಿ ಲಸಿಕೆ ಪಡೆಯಲಿದ್ದಾರೆ ಎಂದು ಡಿಡಿಪಿಐ ಗಳು ಅಂಕಿ - ಅಂಶ ಗಳ ಮೂಲಕ ತಿಳಿಸಿದ್ದಾರೆ. ಪರೀಕ್ಷೆಗಳ ಕುರಿತು ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಲು ಆಯಾ ಹಂತದಲ್ಲಿ ಕೈಗೊಂಡ ಉಪಕ್ರಮಗಳನ್ನು ಆಲಿಸಿದ ಸಚಿವರು ಉತ್ತಮ ಕ್ರಮಗಳನ್ನು ಇತರೆ ಜಿಲ್ಲೆಗಳವರು ವಿನಿಮಯ ಮಾಡಿಕೊಳ್ಳಬೇಕೆಂದು ಸೂಚನೆ ನೀಡಿದರು.

ಯಾವುದೇ ಕಾರಣದಿಂದಲೂ ಯಾವುದೇ ಒಂದು ಮಗುವೂ ಸಹ ಪರೀಕ್ಷೆಯಿಂದ ವಂಚಿತವಾಗದಂತೆ ಕ್ರಮ ವಹಿಸುವುದೂ ಸೇರಿದಂತೆ ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ರೂಪಿಸಿದ ಎಸ್‍ಒಪಿ ಅನುಷ್ಠಾನ ಕುರಿತು ಚರ್ಚಿಸಿ, ಅಗತ್ಯವಿರುವ ಮಕ್ಕಳಿಗೆ ಪರೀಕ್ಷಾ ಕೇಂದ್ರಕ್ಕೆ ಬರಲು ವಾಹನ ವ್ಯವಸ್ಥೆ ಮಾಡಲು ಸಚಿವರು ಸೂಚನೆ ನೀಡಿದರು.

ಈಗಾಗಲೇ ಎಸ್ ಎಸ್ ಎಲ್ ಸಿ ಪರೀಕ್ಷಾ ಮಂಡಳಿ ನೀಡಿದ ಪ್ರಶ್ನೆ ಪತ್ರಿಕೆಗಳ ಒಎಂಆರ್ ಶೀಟ್ ಸೇರಿದಂತೆ ಆಯಾ ಜಿಲ್ಲೆಗಳಲ್ಲಿ ರೂಪಿಸಲಾದ ಮಾದರಿ ಪ್ರಶ್ನೆಪತ್ರಿಕೆಗಳಿಗೆ ಮಕ್ಕಳು ಉತ್ತರಿಸಿ ಪರೀಕ್ಷಾ ಪದ್ಧತಿ ಕುರಿತು ಆತ್ಮವಿಶ್ವಾಸ ಮೂಡಿಸಿಕೊಂಡಿದ್ದಾರೆ. ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಪರೀಕ್ಷಾ ಕೇಂದ್ರಗಳಲ್ಲಿ ಮತ್ತು ಆಯಾ ಶಾಲೆಗಳಲ್ಲಿ ಪರೀಕ್ಷೆ ನಡೆಸಿ ಮಾರ್ಗದರ್ಶನ ನೀಡಲಾಗಿದೆ. ಕೆಲ ಜಿಲ್ಲೆಗಳಲ್ಲಿ ಮಕ್ಕಳ ಮನೆಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ತಲುಪಿಸಿ ಅವುಗಳನ್ನು ಪಡೆದುಕೊಂಡು ಮಾರ್ಗದರ್ಶನ ನೀಡಲಾಗಿದೆ ಎಂದೂ ಸಚಿವರು ವಿವರಿಸಿದರು.

ಈಗಾಗಲೇ ಆಯಾ ಜಿಲ್ಲಾಧಿಕಾರಿಗಳು, ಜಿಪಂ ಸಿಇಒ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಸಭೆ ನಡೆಸಿ ಪರೀಕ್ಷೆ ಸಿದ್ಧತೆ ಕುರಿತು ಚರ್ಚಿಸಿ ವಿವಿಧ ಇಲಾಖೆ ಅಧಿಕಾರಿಗಳ ಸಕ್ರಿಯ ಪಾಲ್ಗೊಳ್ಳುವಿಕೆ ಕುರಿತು ಸೂಚನೆ ನೀಡಿದ್ದಾರೆ. ಗ್ರಾಮ ಪಂಚಾಯತಿ, ಪುರಸಭೆ, ನಗರಸಭೆ, ಪಟ್ಟಣ ಪಂಚಾಯತ್ ಸೇರಿದಂತೆ ಆಯಾ ಸ್ಥಳೀಯ ಸಂಸ್ಥೆಗಳು ಪರೀಕ್ಷಾ ಕೇಂದ್ರದ ಸ್ಯಾನಿಟೈಸೇಷನ್ ಮಾಡುವ ಕುರಿತು ಸೂಚನೆಗಳನ್ನು ನೀಡಿದ್ದಾರೆ. ಸಾರಿಗೆ ವ್ಯವಸ್ಥೆಯ ಕೊರತೆಯಿರುವ ಮಕ್ಕಳನ್ನು ಕರೆತರಲು ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಮಕ್ಕಳು ಪರೀಕ್ಷೆಗೆ ಬಹಳ ಮೊದಲೇ ಪರೀಕ್ಷಾ ಕೇಂದ್ರಕ್ಕೆ ಬರುತ್ತಿರುವುದರಿಂದ ಮಕ್ಕಳು ಕೇಂದ್ರದಿಂದ ಹೊರಡುವಾಗ ಅವರಿಗೆ ಲಘು ಉಪಹಾರದ ವ್ಯವಸ್ಥೆಯನ್ನೂ ಕೆಲ ಜಿಲ್ಲೆಗಳಲ್ಲಿ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು

ಜನಪ್ರತಿನಿಧಿಗಳ ಸಹಕಾರ: ಪರೀಕ್ಷೆ ಕುರಿತು ಕೆಲವೆಡೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಆಯಾ ಭಾಗದ ವಿಧಾನಸಭಾ ಸದಸ್ಯರು, ವಿಧಾನಪರಿಷತ್ತಿನ ಸದಸ್ಯರು ಅಧಿಕಾರಿಗಳ ಸಭೆ ನಡೆಸಿ ಪರೀಕ್ಷೆ ಯಶಸ್ಸಿಗೆ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಜಿಲ್ಲಾಧಿಕಾರಿಗಳು ಈಗಾಗಲೇ ಎರಡೆರಡು ಬಾರಿ ಸಭೆಗಳನ್ನು ನಡೆಸಿ ಸಿದ್ಧತೆ ಪರಿಶೀಲಿಸಿದ್ದಾರೆ.

ಹೆಚ್ಚು ಮಳೆಯ ಜಿಲ್ಲೆಗಳಲ್ಲಿ ಸಾರಿಗೆ ವ್ಯವಸ್ಥೆ: ಪರೀಕ್ಷೆ ಮಳೆಗಾಲದ ಸಮಯದಲ್ಲಿ ನಡೆಯುತ್ತಿರುವುದರಿಂದ ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಮಕ್ಕಳು ಪರೀಕ್ಷೆಗೆ ಬಂದು ಹೋಗುವ ಕುರಿತು ಕೈಗೊಳ್ಳಲಾದ ಕ್ರಮಗಳನ್ನು ಆಲಿಸಿದರು.

15-17ರಂದು ಅಣಕು ಪರೀಕ್ಷೆ: ಪರೀಕ್ಷಾ ಸಿದ್ಧತೆ ಕುರಿತಂತೆ ವಿವರಣೆ ಪಡೆದ ಸುರೇಶ್ ಕುಮಾರ್, ಜುಲೈ 15 ಮತ್ತು 17ರಂದು ಆಯಾ ಪರೀಕ್ಷಾ ಕೇಂದ್ರಗಳಲ್ಲಿ ಅಣಕು ಪರೀಕ್ಷೆಗಳನ್ನು ನಡೆಸುವುದಕ್ಕೆ ಸೂಚನೆ ನೀಡಿ, ಪರೀಕ್ಷಾ ಕೇಂದ್ರ ಪ್ರವೇಶದಿಂದ ಹಿಡಿದು ಪರೀಕ್ಷಾ ಕೊಠಡಿ ಪ್ರವೇಶ ಹಾಗೆಯೇ ಪರೀಕ್ಷೆ ನಂತರ ಮಕ್ಕಳು ಸಾಮಾಜಿಕ ಅಂತರದ ಮೂಲಕ ಪರೀಕ್ಷಾ ಕೇಂದ್ರದಿಂದ ಹೊರಬರುವ ತನಕ ಎಲ್ಲ ರೀತಿಯ ಕ್ರಮಗಳನ್ನು ಪಾಲಿಸುವಂತೆ ಸಚಿವರು ಸೂಚಿಸಿದರು.

ಇದನ್ನೂ ಓದಿ: ಸುಮಲತಾರ ಅಹಂಕಾರ, ಮದ ಎರಡೂ ಕಮ್ಮಿ ಆಗಬೇಕು: ಕಟುವಾಗಿ ಟೀಕಿಸಿದ ಶಾಸಕ ರವೀಂದ್ರ ಶ್ರೀಕಂಠಯ್ಯ

*ಮಕ್ಕಳೊಂದಿಗೆ ಫೋನ್ ಇನ್ ಸಂವೇದನಾ:* ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಭಾಗಿಯಾಗುತ್ತಿರುವ ವಿದ್ಯಾರ್ಥಿಗಳೊಂದಿಗೆ ಮಾತನಾಡಿ ಪರೀಕ್ಷೆಗೆ ಮಕ್ಕಳು ಸಜ್ಜಾಗಿರುವ ಕುರಿತು ಮಕ್ಕಳೊಂದಿಗೆ ತಾವು ಮಾತನಾಡು ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಲು ಜುಲೈ 9 ಮತ್ತು 14ರಂದು ಫೋನ್ ಇನ್ ಸಂವೇದನಾ ಕಾರ್ಯಕ್ರಮ ನಡೆಯಲಿದೆ. ಪ್ರತಿಯೊಂದು ಜಿಲ್ಲೆಗಳಿಂದ 2000ಕ್ಕೂ ಹೆಚ್ಚು ಮಕ್ಕಳು ಈ ಸಂವೇದನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆಂದು ಸುರೇಶ್ ಕುಮಾರ್ ತಿಳಿಸಿದರು.

ಮಂಗಳವಾರ ಡಿಡಿಪಿಐ ಮತ್ತು ಬಿಇಒಗಳೊಂದಿಗೆ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ನಮ್ಮ ರಾಜ್ಯದ ಶೇ. 31ರಷ್ಟು ಮಕ್ಕಳಿಗೆ ದೂರದರ್ಶನ ಸೌಲಭ್ಯವೂ ಇಲ್ಲದೇ ಇರುವುದರಿಂದ ಆ ಮಕ್ಕಳಿಗೆ ಅನುಕೂಲವಾಗುವಂತೆ ಸ್ಥಳೀಯ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ದೂರದರ್ಶನ ಸೌಲಭ್ಯ ಒದಗಿಸಿ ಅಂತಹ ಮಕ್ಕಳಿಗೆ ಚಂದನಾ ವಾಹಿನಿಯ ಪಾಠಗಳನ್ನು ತಲುಪುವಂತೆ ವ್ಯವಸ್ಥೆ ಮಾಡಬೇಕೆಂದು ಸೂಚನೆ ನೀಡಿದರು.
ಸ್ಮಾರ್ಟ್ ಫೋನ್‍ಗಳು ಮತ್ತು ದೂರದ‌ರ್ಶನ ವ್ಯವಸ್ಥೆಯೂ ಇಲ್ಲದ ಮಕ್ಕಳಿಗೆ ಸಂವೇದನಾ ತರಗತಿಗಳು ತಲುಪುವಂತೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಸುರೇಶ್ ಕುಮಾರ್ ತಿಳಿಸಿದರು.
Published by:HR Ramesh
First published: