ಹಾವೇರಿ; ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ತೆರೆಯದೆ ಸರ್ಕಾರ ಕಾಲಹರಣ ಮಾಡುತ್ತಿದೆ. 15 ದಿನದೊಳಗೆ ಈ ಬಗ್ಗೆ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮೆಕ್ಕೆಜೋಳ ಸುರಿದು ಉಪವಾಸ ಸತ್ಯಾಗ್ರಹ ಮಾಡಲಾಗುವುದು ಎಂದು ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಲತೇಶ ಪೂಜಾರ ಎಚ್ಚರಿಕೆ ನೀಡಿದರು.
ಜಿಲ್ಲಾಡಳಿತ ಭವನದ ಮುಂಭಾಗ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಕೆಎಂಎಫ್‌ನಿಂದ ಮೆಕ್ಕೆಜೋಳ ಖರೀದಿಸುತ್ತೇವೆ ಎಂಬ ಸರ್ಕಾರದ ಭರವಸೆ ಈಡೇರಲಿಲ್ಲ. ಹೀಗಾಗಿ ಎಪಿಎಂಸಿ ಮೂಲಕ ಖರೀದಿ ಕೇಂದ್ರ ತೆರೆದು ಸಂಕಷ್ಟದಲ್ಲಿರುವ ರೈತರ ನೆರವಿಗೆ ಧಾವಿಸಬೇಕು. ದೇಶದ ಬೆನ್ನೆಲುಬು ಅಂತ ಹೇಳಿಕೆಯಲ್ಲಿ ಕಾಲ ಕಳೆಯುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಬದುಕನ್ನು ನಾಶ ಮಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನು ಓದಿ: ಪುಟ್ಟಪರ್ತಿಯ ಸಾಯಿಬಾಬಾ 95ನೇ ಜಯಂತ್ಯುತ್ಸವಕ್ಕೆ ಹಾವೇರಿಯ ಪ್ರಸಿದ್ಧ ಏಲಕ್ಕಿ ಹಾರಗಳು!
ಜಿಲ್ಲಾ ರೈತ ಸಂಘದ ಅಧ್ಯಕ್ಷ ಹನುಮಂತಪ್ಪ ಹುಚ್ಚಣ್ಣ ಮಾತನಾಡಿ, ರೈತರಿಗೆ ಸಂಬಂಧಪಟ್ಟ ಕಾಯ್ದೆಗಳನ್ನು ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ಮಾಡಿರುವುದನ್ನು ವಾಪಸ್ ಪಡೆಯಬೇಕು. ಕೃಷಿ ಉತ್ಪನ್ನಗಳನ್ನು ಎಂ.ಎಸ್.ಪಿ. ಬೆಲೆಗಿಂತ ಕಡಿಮೆ ಬೆಲೆಗೆ ಮಾರಾಟ ಮತ್ತು ಖರೀದಿ ಮಾಡುವುದು ಅಪರಾಧ ಎಂಬ ಪಂಜಾಬ್ ಸರ್ಕಾರದ ಮಾದರಿಯನ್ನು ರಾಜ್ಯದಲ್ಲೂ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ