ಅವಿರೋಧ ಆಯ್ಕೆಯಾಗುವ ಗ್ರಾ.ಪಂ.ಗೆ 1 ಕೋಟಿ : ಕೆಕೆಆರ್​ಡಿಬಿ ಅಧ್ಯಕ್ಷ ರೇವೂರ ವಿರುದ್ಧ ಎಫ್​ಐಆರ್​

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ

ಕೆ.ಕೆ.ಆರ್​​.ಡಿ.ಬಿ  ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ

ಕೆ.ಕೆ.ಆರ್​​.ಡಿ.ಬಿ  ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ

  • Share this:
ಕಲಬುರ್ಗಿ(ಡಿಸೆಂಬರ್​. 24): ಒಂದನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ಮುಗಿದು, ಎರಡನೇ ಹಂತದ ಚುನಾವಣೆಗೆ ಭರ್ಜರಿ ತಯಾರಿ ನಡೆದಿರುವಾಗಲೇ ಕಲಬುರ್ಗಿ ಜಿಲ್ಲೆಯಲ್ಲಿ ರಾಜಕೀಯ ಮೇಲಾಟಗಳು ಜೋರಾಗಿವೆ. ರಾಜಕೀಯೇತರವಾಗಿರುವ ಗ್ರಾಮ ಪಂಚಾಯಿತಿ ಚುನಾವಣೆಯ ಕುರಿತು ರಾಜಕೀಯ ನಾಯಕರ ಆರೋಪ, ಪ್ರತ್ಯಾರೋಪ ತಾರಕಕ್ಕೇರಿವೆ. ನೀತಿ ಸಂಹಿತಿ ಉಲ್ಲಂಘಿಸಿದ್ದಾರೆಂದು ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷರ ವಿರುದ್ಧ ಎಫ್.ಐ.ಆರ್. ದಾಖಲಿಸಲಾಗಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕಲಬುರ್ಗಿ ತಹಶೀಲ್ದಾರ್ ಸಂಗಯ್ಯ ಸ್ವಾಮಿ ನಗರದ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಬರುವ ಯಾವುದೇ ಗ್ರಾಮ ಪಂಚಾಯಿತಿಯ ಎಲ್ಲ ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡಿದಲ್ಲಿ 1 ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ನೀಡುವುದಾಗಿ ದತ್ತಾತ್ರೇಯ ಪಾಟೀಲ ರೇವೂರ ಘೋಷಿಸಿದ್ದರು. 

ಕಲಬುರ್ಗಿಯಲ್ಲಿ ನಡೆದಿದ್ದ ಬಿಜೆಪಿಯ ಗ್ರಾಮ ಸ್ವರಾಜ್ ಕಾರ್ಯಕ್ರಮ ಮತ್ತು ಬೇರೆ ಸಂದರ್ಭದಲ್ಲಿ ದತ್ತಾತ್ರೇಯ ಪಾಟೀಲ ರೇವೂರ ಒಂದು ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಬಗ್ಗೆ ಪ್ರಸ್ತಾರಿಸಿದ್ದರು. ಗ್ರಾಮ ಪಂಚಾಯಿತಿಯ ಎಲ್ಲ ಸದಸ್ಯರನ್ನೂ ಅವಿರೋಧವಾಗಿ ಆಯ್ಕೆ ಮಾಡಿದಲ್ಲಿ ಕೆ.ಕೆ.ಆರ್.ಡಿ.ಬಿ.ಯಿಂದ ವಿಶೇಷ ಪ್ಯಾಕೇಜ್ ನೀಡುವುದಾಗಿ ದತ್ತಾತ್ರೇಯ ಪಾಟೀಲ ಘೋಷಿಸಿದ್ದರು. ಇದಕ್ಕೆ ಕಾಂಗ್ರೆಸ್ ಪಕ್ಷ ಆಕ್ಷೇಪಿಸಿತ್ತು. ಪಕ್ಷಾತೀತವಾಗಿ ನಡೆಯುವ ಚುನಾವಣೆಯಲ್ಲಿ ಆಮಿಷವೊಡ್ಡಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ಪಕ್ಷ ರಾಜ್ಯ ಚುನಾವಣಾ ಆಯೋಗಕ್ಕೆ ದೂರನ್ನು ಸಹ ನೀಡಿತ್ತು. ಇದರ ಜೊತೆಗೆ ಮಾಧ್ಯಮಗಳಲ್ಲಿ ಬಂದ ವರದಿಯನ್ನು ಆಧರಿಸಿ ಡಿಸಿ ಸೂಚನೆ ಮೇರೆಗೆ ಜಿಲ್ಲಾ ಪಂಚಾಯ್ತಿ ಸಿಇಒ ಸಹ ಒಂದು ವರದಿ ಸಿದ್ಧಪಡಿಸಿ, ದೂರು ದಾಖಲಿಸಲು ಕಲಬುರ್ಗಿ ತಹಶೀಲ್ದಾರರಿಗೆ ಸೂಚಿಸಿದ್ದರು.

ಈ ಹಿನ್ನೆಲೆಯಲ್ಲಿ ಕಲಬುರ್ಗಿ ತಹಶೀಲ್ದಾರ್ ಸಂಗಯ್ಯ ಸ್ವಾಮಿ ದೂರು ದಾಖಲಿಸಿದ್ದಾರೆ. ತಹಶೀಲ್ದಾರರ ದೂರಿನ ಹಿನ್ನೆಲೆಯಲ್ಲಿ ಕಲಬುರ್ಗಿಯ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಪ್ರಕರಣದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಎಫ್​ಐಆರ್​ ದಾಖಲಿಸದೆ ಕರ್ತವ್ಯ ನಿರ್ಲಕ್ಷ ; ಪೊಲೀಸ್ ಇನ್ಸ್​ಪೆಕ್ಟರ್ ಗೆ ರಸ್ತೆ ಕಸ ಗುಡಿಸುವ ಶಿಕ್ಷೆ

ಎಫ್.ಐ.ಆರ್.ಗೆ ಹೆದರಲ್ಲ. ಇತಹ ಹಲವಾರು ಪ್ರಕರಣಗಳನ್ನು ಎದುರಿಸಿದ್ದೇನೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ದೃಷ್ಟಿಯ ಹಿನ್ನೆಲೆಯಲ್ಲಿ ನಾನು ವಿಶೇಷ ಪ್ಯಾಕೇಜ್ ಬಗ್ಗೆ ಹೇಳಿದ್ದೆ. ಆದರೆ ಕಾಂಗ್ರೆಸ್ ನಾಯಕರು ಈ ವಿಷಯದಲ್ಲಿಯೂ ರಾಜಕೀಯ ಮಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ಬಗ್ಗೆ ಎಷ್ಟು ಕಾಳಜಿ ಇದೆ ಎನ್ನುವುದು ಇದರಿಂದಲೇ ಅರ್ಥವಾಗುತ್ತದೆ ಎಂದು ಕಿಡಿಕಾರಿದ್ದಾರೆ.

ಕಲಬುರ್ಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ರಾವೂರು ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಎಲ್ಲ 32 ಸದಸ್ಯರೂ ಅವಿರೋಧವಾಗಿ ಆಯ್ಕೆಯಾಗಿದ್ದು, ವಿಶೇಷ ಪ್ಯಾಕೇಜ್ ನೀಡುವ ಕುರಿತು ಪ್ರತಿಕ್ರಿಯಿಸಿದ ದತ್ತಾತ್ರೇಯ ಪಾಟೀಲ ರೇವೂರ, ಸದ್ಯ ಎರಡನೆಯ ಹಂತದ ಚುನಾವಣೆ ನಡೆದಿದೆ. ನೀತಿ ಸಂಹಿತಿ ಜಾರಿಯಲ್ಲಿರುವುದರಿಂದ ಈ ಬಗ್ಗೆ ಏನನ್ನೂ ಭರವಸೆ ನೀಡಲು ಬರುವುದಿಲ್ಲ. ಚುನಾವಣೆ ಮುಗಿದ ನಂತರ ಇದೆಲ್ಲದಕ್ಕೂ ಉತ್ತರ ನೀಡುತ್ತೇನೆ ಎಂದಿದ್ದಾರೆ.
Published by:G Hareeshkumar
First published: