ಪುತ್ತೂರು(ಜೂ.25): ಕೊರೋನಾ ಭಯದ ನಡುವೆ ರಾಜ್ಯಾದ್ಯಂತ ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 95 ಪರೀಕ್ಷಾ ಕೇಂದ್ರಗಳಲ್ಲಿ 30,368 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇನ್ನು, ಪುತ್ತೂರಿನಲ್ಲಿ ಒಟ್ಟು 12 ಪರೀಕ್ಷಾ ಕೇಂದ್ರಗಳಲ್ಲಿ 5007 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಇದರಲ್ಲಿ ಹೊರ ರಾಜ್ಯದ 32 ವಿದ್ಯಾರ್ಥಿಗಳಿದ್ದಾರೆ. ಪರೀಕ್ಷೆ ಹಿನ್ನಲೆಯಲ್ಲಿ ಎಲ್ಲಾ ಪರೀಕ್ಷಾ ಕೇಂದ್ರಗಳನ್ನು ಕೊಠಡಿಗಳಿಗೆ ಸ್ಯಾನಿಟೈಸರ್ ಬಳಸಿ ಶುಚಿಗೊಳಿಸಲಾಗಿದ್ದು, ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಪರೀಕ್ಷೆ ಬರೆಯಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ.
ಎಲ್ಲಾ ವಿದ್ಯಾರ್ಥಿಗಳು ಮಾಸ್ಕ್ ಹಾಕಿಕೊಂಡೇ ಪರೀಕ್ಷಾ ಕೊಠಡಿಗೆ ತೆರಳುವ ನಿಟ್ಟಿನಲ್ಲಿ ಪುತ್ತೂರು ಶಾಸಕರ ವತಿಯಿಂದ 10 ಸಾವಿರ ಮಾಸ್ಕ್ ಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಗೆ ಮೂರು ಜೊತೆ ಮಾಸ್ಕ್ ವಿತರಣೆ ಮಾಡಲು ವ್ಯವಸ್ಥೆ ಮಾಡಲಾಗಿದೆ. ಕೇರಳ ರಾಜ್ಯದಿಂದ ಬರುವ ವಿದ್ಯಾರ್ಥಿಗಳು ಕರ್ನಾಟಕ ಗಡಿಯಿಂದ ಪರೀಕ್ಷಾ ಕೇಂದ್ರಕ್ಕೆ ಕರೆತರುವ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಿದೆ.
ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ಪರೀಕ್ಷಾ ಕೇಂದ್ರಗಳ ಆವರಣದಲ್ಲಿ ಸುಣ್ಣದ ಚೌಕಗಳನ್ನು ರಚಿಸಲಾಗಿದ್ದು, ವಿದ್ಯಾರ್ಥಿಗಳು ಈ ಚೌಕದಲ್ಲೇ ನಿಲ್ಲಲು ಸೂಚನೆಯನ್ನೂ ನೀಡಲಾಗಿದೆ. ವಿಶೇಷ ಚೇತನ ಮಕ್ಕಳಿಗೂ ಎಲ್ಲಾ ರೀತಿಯ ವ್ಯವಸ್ಥೆಯನ್ನು ಮಾಡಲಾಗಿದ್ದು, ಯಾವುದೇ ರೀತಿಯ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ.
ಕೊರೊನಾತಂಕದ ನಡುವೆಯೇ ರಾಜ್ಯದಲ್ಲಿ ಪರೀಕ್ಷೆ ನಡೆಸಲಾಗುತ್ತಿದ್ದು, ಪೋಷಕರು ಭಯದಲ್ಲೇ ತಮ್ಮ ಮಕ್ಕಳನ್ನು ಪರೀಕ್ಷೆಗೆ ಕಳುಹಿಸುತ್ತಿದ್ದಾರೆ. ಬೆಂಗಳೂರು, ಮೈಸೂರು ಜಿಲ್ಲೆಗಳಿಗೆ ಹೋಲಿಸಿದಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಕೊರೊನಾ ನಿಯಂತ್ರಿಸುವಲ್ಲಿ ಉತ್ತಮ ಕ್ರಮ ಕೈಗೊಂಡಿದೆ. ಈ ಕಾರಣಕ್ಕಾಗಿ ಜಿಲ್ಲೆಯಲ್ಲಿ ಪರೀಕ್ಷೆ ನಡೆಸುವುದಕ್ಕೆ ಯಾವುದೇ ಸಮಸ್ಯೆಯಿಲ್ಲ.
ಇದನ್ನೂ ಓದಿ: 45 Years of Emergency: ತುರ್ತು ಪರಿಸ್ಥಿತಿಗೆ 45 ವರ್ಷ: ಅಧಿಕಾರಕ್ಕಾಗಿ ಪ್ರಜಾಪ್ರಭುತ್ವವನ್ನೇ ಕೊಂದ ಕಾಂಗ್ರೆಸ್ - ಅಮಿತ್ ಶಾ
ಆದರೂ ಪೋಷಕರು ತಮ್ಮ ಮಕ್ಕಳನ್ನು ಪರೀಕ್ಷಾ ಕೇಂದ್ರಕ್ಕೆ ಬಿಟ್ಟು ಹೋಗುತ್ತಿದ್ದು, ಮಕ್ಕಳ ಜೊತೆ ವ್ಯವಹರಿಸುವಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಕಿವಿ ಮಾತನ್ನೂ ಹೇಳುತ್ತಿದ್ದಾರೆ. ಪರೀಕ್ಷಾ ಕೇಂದ್ರಗಳನ್ನೂ ಹೆಚ್ಚಿನ ನಿಗಾವಹಿಸಿ ಮಕ್ಕಳಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಿರುವುದು ಪೋಷಕರು ನೆಮ್ಮದಿಗೂ ಕಾರಣವಾಗಿದೆ ಎನ್ನುತ್ತಾರೆ ಪೋಷಕರಾದ ಪ್ರಸಾದ್ ಕೌಶಲ್.
ಎಲ್ಲಾ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಶೇಧಾಜ್ಞೆಯನ್ನು ಜಾರಿಗೊಳಿಸಲಾಗಿದ್ದು, ಸಾರ್ವಜನಿಕ ಓಡಾಟಕ್ಕೆ ನಿಶೇಧ ಹೇರಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಪೋಲೀಸ್, ಆರೋಗ್ಯ ಇಲಾಖೆ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಪರೀಕ್ಷೆ ಬರೆಯಲು ಬರುವ ಎಲ್ಲಾ ವಿದ್ಯಾರ್ಥಿಗಳ ಥರ್ಮಲ್ ಸ್ಕ್ರೀನಿಂಗ್ ವಿವರವನ್ನು ದಾಖಲಿಸಲಾಗುತ್ತಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ