ಚಾಮರಾಜನಗರ ( ಜುಲೈ 30); ಮುಂದಿನ ಮೂರು ವರ್ಷಕ್ಕೂ ಬಿ.ಎಸ್. ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿರಲಿದ್ದಾರೆ. ಅಲ್ಲದೆ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸುಭದ್ರವಾಗಿರಲಿದೆ ಈ ಕುರಿತು ಯಾರಿಗೂ ಸಂಶಯ ಬೇಡ ಎಂದು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಸುದ್ದಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಊಹಾಪೋಹಗಳಿಗೆ ಇಂದು ಚಾಮರಾಜನಗರದ ಕೊಳ್ಳೆಗಾಲದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತೆರೆ ಎಳೆಯಲು ಮುಂದಾಗಿದ್ದಾರೆ.
ಈ ಕುರಿತ ವಿವಾದಕ್ಕೆ ಸ್ಪಷ್ಟನೆ ನೀಡಿರುವ ಅವರು, "ಪಕ್ಷದ ಯಾವೊಬ್ಬ ಶಾಸಕರು, ಮಂತ್ರಿಗಳು ಸಿಎಂ ಬದಲಾವಣೆ ಬಗ್ಗೆ ಮಾತನಾಡಿಲ್ಲ. ನಮ್ಮ ಪಕ್ಷದಲ್ಲಿ ನಮ್ಮದೆ ಆದ ಶಿಸ್ತು ಮತ್ತು ನಿಮಯಗಳಿವೆ. ಪಕ್ಷದ ಶಿಸ್ತನ್ನು ಯಾರೇ ಉಲ್ಲಂಘನೆ ಮಾಡಿದರೂ ಸಹಿಸುವುದಿಲ್ಲ ಎಂದು ಪಕ್ಷ ವಿರೋಧಿ ಚಟುವಟಿಕೆ ಮಾಡುವವರಿಗೆ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ, ಮುಂದಿನ ಮೂರು ವರ್ಷಗಳೂ ಬಿ.ಎಸ್.ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ. ಪಕ್ಷವೂ ಸುಭದ್ರವಾಗಿರಲಿದೆ" ಎಂದು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಡಿಸಿಎಂ ಲಕ್ಷ್ಮಣ ಸವದಿ ದೆಹಲಿ ಭೇಟಿ ವಿಚಾರವಾಗಿಯೂ ಮಾತನಾಡಿರುವ ಅವರು, "ಲಕ್ಷ್ಮಣ ಸವದಿಇಲಾಖೆ ಕೆಲಸಕ್ಕಾಗಿ ದೆಹಲಿಗೆ ಹೋಗಿದ್ದಾರೆ. ಅವರೇ ಈ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ಕೇಂದ್ರ ಸಚಿವರ ಜೊತೆ ಅವರ ಇಲಾಖೆಯ ಕೆಲಸದ ನಿಮಿತ್ತ ದೆಹಲಿಗೆ ಹೋಗಿದ್ದಾರೆ. ಹೀಗಾಗಿ ಈ ವಿಚಾರಕ್ಕೆ ನಾನಾ ಅರ್ಥ ಕಲ್ಪಿಸುವ ಅಗತ್ಯ ಇಲ್ಲ" ಎಂದಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ