ಬೆಂಗಳೂರು (ಜೂ. 9): ಕೊರೋನಾ ಅಟ್ಟಹಾಸ ಮುಂದುವರೆದಿರುವ ಹಿನ್ನೆಲೆಯಲ್ಲಿ ಈಗಾಗಲೇ ತಮಿಳುನಾಡು, ತೆಲಂಗಾಣದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಆದರೆ, ಕರ್ನಾಟಕದಲ್ಲಿ ಜೂನ್ 25ರಿಂದ ಜುಲೈ 4ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವುದಾಗಿ ಘೋಷಿಸಲಾಗಿದೆ. ಹೀಗಿದ್ದರೂ ತಮಿಳುನಾಡು, ತೆಲಂಗಾಣದ ರೀತಿಯಲ್ಲೇ ಕರ್ನಾಟಕದಲ್ಲೂ 10ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸುವ ಬಗ್ಗೆ ಸುದ್ದಿ ಹರಡಿದೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಎಸ್ಎಸ್ಎಲ್ಸಿ ಪರೀಕ್ಷೆ ವಿಚಾರದಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ನಿರ್ಧರಿಸಿದೆ.
ಕರ್ನಾಟಕದಲ್ಲಿ ಜೂನ್ 25ರಂದ ಜುಲೈ 4ಕ್ಕೆ ಎಸ್ಎಸ್ಎಲ್ಸಿ ಪರೀಕ್ಷೆ ಮುಗಿಯಲಿದೆ. ಅದಾಗಿ ಒಂದು ತಿಂಗಳಲ್ಲಿ ಮೌಲ್ಯಮಾಪನ ನಡೆಸಲಾಗುವುದು. ಶಾಲೆಗಳ ಪ್ರಾರಂಭದ ಬಗ್ಗೆ ಚರ್ಚೆ ನಡೆಯುತ್ತಿದೆ. ಪರೀಕ್ಷೆ ನಡೆಯುವ ಶಾಲೆಗಳ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ: ಕರ್ನಾಟಕದಲ್ಲಿ ಕೋವಿಡ್-19: 24 ಗಂಟೆಯಲ್ಲಿ 161 ಕೇಸ್, 2 ಸಾವು; ಸೋಂಕಿತರ ಸಂಖ್ಯೆ 5,921ಕ್ಕೆ ಏರಿಕೆ
ಎಸ್ಎಸ್ಎಲ್ಸಿ ಪರೀಕ್ಷೆ ಮತ್ತು ದಿನಾಂಕದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುವ ಮುನ್ನ ಇನ್ನು ಎಚ್ಚರ ವಹಿಸುವುದು ಅಗತ್ಯ. ಸುಳ್ಳುಸುದ್ದಿ ಹಬ್ಬಿಸುವ ಕಿಡಿಗೇಡಿಗಳ ವಿರುದ್ಧ ಸರ್ಕಾರ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಿದೆ. ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ಧಾರ ಮಾಡಿದೆ.
ವಿದ್ಯಾರ್ಥಿಗಳಿಗೆ ಗೊಂದಲ ಉಂಟುಮಾಡುವ ದುರುದ್ದೇಶದಿಂದ ಕೆಲವು ಕಿಡಿಗೇಡಿಗಳು ಹೀಗೆ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಅಂಥವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಇಲಾಖೆ ಎಚ್ಚರಿಕೆ ನೀಡಿದೆ. ಈ ಸಂಬಂಧ ಜಿಲ್ಲಾ ಉಪ ನಿರ್ದೇಶಕರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ