ಶಿವಮೊಗ್ಗ(ಅಕ್ಟೋಬರ್. 12): ಸಾಮಾನ್ಯವಾಗಿ ಸರ್ಕಾರಿ ಆಸ್ಪತ್ರೆಗಳು ಎಂದರೇ ಮೂಗು ಮುರಿಯುವವರೆ ಹೆಚ್ಚು. ಸರ್ಕಾರಿ ಆಸ್ಪತ್ರೆಯಲ್ಲಿ ಒಳ್ಳೆಯ ಚಿಕಿತ್ಸೆ ಸಿಗಲ್ಲ, ಸ್ವಚ್ಚತೆಯಂತು ಮೊದಲೇ ಇರಲ್ಲ ಎಂಬ ಭಾವನೆ ಸಾರ್ವಜನಿಕರಲ್ಲಿ ಬಹಳ ವರ್ಷಗಳಿಂದಲೇ ಮೂಡಿ ಬಂದಿದೆ. ಆದರೆ ಅದಕ್ಕೆ ಅಪವಾದ ಎಂಬಂತೆ ಶಿವಮೊಗ್ಗ ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆ ಸ್ವಚ್ಚತೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆಯುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಆಸ್ಪತ್ರೆಯ ನಿರ್ವಹಣೆ, ದುರಸ್ತಿ, ನೈರ್ಮಲ್ಯ ಮತ್ತು ಶುಚಿತ್ವಕ್ಕೆ ಹೆಚ್ಚಿನ ಮಹತ್ವ ನೀಡಿದ್ದು, ಈ ಸಾಲಿನ ಕಾಯಕಲ್ಪ ಪ್ರಶಸ್ತಿಯಲ್ಲಿ ಎರಡನೇ ಸ್ಥಾನ ಪಡೆದು ಕೊಂಡಿದೆ. ಕೇಂದ್ರ ಸರ್ಕಾರ ಸ್ವಚ್ಚ ಭಾರತ ಅಭಿಯಾನಕ್ಕೆ 2014 ರಲ್ಲಿ ಕರೆ ನೀಡಿದಾಗಿನಿಂದ ಎಲ್ಲಾ ಕಡೆಯೂ ಕೂಡ ಸ್ವಚ್ಚತೆಗೆ ಹೆಚ್ಚಿನ ಆಧ್ಯತೆ ನೀಡಲಾಗುತ್ತಿದೆ. ದೇಶದಲ್ಲಿ ಸರ್ಕಾರಿ ಆಸ್ಪತ್ರೆಯಗಳಲ್ಲಿನ ಅವ್ಯವಸ್ಥೆಯ ಕಂಡು ಕೇಂದ್ರ ಸರ್ಕಾರ ಸರ್ಕಾರಿ ಆಸ್ಪತ್ರೆಯಲ್ಲೂ ಉತ್ತಮ ಚಿಕಿತ್ಯೆ ಮತ್ತು ಸ್ವಚ್ಚತೆ ಕಾಪಾಡುವ ಉದ್ದೇಶದಿಂದ ಕಾಯಕಲ್ಪ ಯೋಜನೆ ಜಾರಿಗೆ ತಂದಿದೆ.
ಕಾಯಕಲ್ಪದ ಉದ್ದೇಶ, ಸರ್ಕಾರಿ ಆಸ್ಪತ್ರೆಗೆ ಬರುವಂತ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಗಬೇಕು, ಜೊತೆಗೆ ಆಸ್ಪತ್ರೆಯ ವಾತಾವರಣ ಶುದ್ಧವಾಗಿರಬೇಕು ಎಂಬುದು ಆಗಿದೆ. ಇದರಿಂದಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಲು ಆರಂಭಿಸಲಾಯಿತು. ಆರಂಭದಲ್ಲಿ ಸರ್ಕಾರಿ ಆಸ್ಪತ್ರೆಗಳೆಂದರೆ ರೋಗಿಗಳ ಮೂಗು ಮುಚ್ಚಿಕೊಂಡು ಓಡಾಡ ಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ, ಕೇಂದ್ರ ಸರ್ಕಾರ ಸ್ವಚ್ಚ ಭಾರತ ಅಭಿಯಾನಕ್ಕೆ ಕರೆ ನೀಡಿ, ಆಸ್ಪತ್ರೆಗೆ ಕಾಯಕಲ್ಪ ಪ್ರಶಸ್ತಿಗಳನ್ನು ಘೋಷಣೆ ಮಾಡಿದ ನಂತರ ಆಸ್ಪತ್ರೆಗಳು ಸ್ವಚ್ಚತೆಗೆ ಹೆಚ್ಚಿನ ಒತ್ತು ನೀಡುತ್ತಿವೆ.
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯೂ ಕೂಡ ಇದೀಗ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ಕೊಟ್ಟಿದೆ. ಈ ವರ್ಷ ರಾಜ್ಯದ ಜಿಲ್ಲಾ ಮಟ್ಟದ ಸರ್ಕಾರಿ ಆಸ್ಪತ್ರೆಗಳ ನಡುವೆ ನಡೆದ ಪೈಪೋಟಿಯಲ್ಲಿ ಮೆಗ್ಗಾನ್ ಆಸ್ಪತ್ರೆಗೆ, ಕಾಯಕಲ್ಪ ಪ್ರಶಸ್ತಿಯಲ್ಲಿ ಎರಡನೇ ಸ್ಥಾನ ಗಳಿಸಿದೆ. ಆಸ್ಪತ್ರೆಯ ಸಿಬ್ಬಂದಿಗಳ ನಿರಂತರ ಪರಿಶ್ರಮದಿಂದಾಗಿ, ಈ ಪ್ರಶಸ್ತಿ ಬಂದಿದೆ. ಮುಂದಿನ ದಿನಗಳಲ್ಲಿ ಮೊದಲನೇ ಸ್ಥಾನ ಪಡೆಯಲು ಶ್ರಮ ವಹಿಸುವುದಾಗಿ ಅಧಿಕಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಹಾಸನ ಜಿಲ್ಲಾಡಳಿತ ಬಿಜೆಪಿ ಮುಖಂಡರ ಕೈಗೊಂಬೆ ; ಮಾಜಿ ಸಚಿವ ಹೆಚ್.ಡಿ ರೇವಣ್ಣ ಆರೋಪ
ಪ್ರತಿನಿತ್ಯ ಆಸ್ಪತ್ರೆಗೆ ಒಂದೂವರೆ ಸಾವಿರಕ್ಕೂ ಹೆಚ್ಚು ಹೊರರೋಗಿಗಳು ಬಂದು ಚಿಕಿತ್ಸೆ ಪಡೆಯುತ್ತಿದ್ದಾರೆ. ಒಂದು ಸಾವಿರಕ್ಕೂ ಹೆಚ್ಚು ಹಾಸಿಗೆ ವ್ಯವಸ್ಥೆಯನ್ನು ಈ ಆಸ್ಪತ್ರೆ ಹೊಂದಿದೆ. ಕಾಯಕಲ್ಪ ಪ್ರಶಸ್ತಿಗೆ ಕೇಂದ್ರ ಸರ್ಕಾರ ಆಸ್ಪತ್ರೆಯ ನಿರ್ವಹಣೆ, ದುರಸ್ಥಿ, ನೈರ್ಮಲ್ಯ, ಶುಚಿತ್ವ ಕಾಪಾಡುವಿಕೆ, ಸೋಂಕು ತಡಗಟ್ಟುವಿಕೆ, ಜೈವಿಕ ವೈದ್ಯಕೀಯ ತ್ಯಾಜ್ಯ ನಿರ್ವಹಣೆ, ನೈರ್ಮಲ್ಯ ಪ್ರಚಾರ ಎಂಬ ಆರು ಮಾನದಂಡಗಳನ್ನು ನೀಡಿದ್ದು. ಇವೆಲ್ಲವನ್ನೂ ಸಮರ್ಪಕವಾಗಿ ನಿಭಾಯಿಸಿಕೊಂಡು ಬಂದ ಹಿನ್ನಲೆಯಲ್ಲಿ ಮೆಗ್ಗಾನ್ ಆಸ್ಪತ್ರೆಗೆ ಈ ಪ್ರಶಸ್ತಿ ಸಂದಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ