ಹೊಸಕೋಟೆ: ಕಾಮಗಾರಿಯೊಂದರ ಗುದ್ದಲಿ ಪೂಜೆ ನಡೆಸುವ ವಿಚಾರವಾಗಿ ಸಚಿವ ಎಂಟಿಬಿ ನಾಗರಾಜ್ ಮತ್ತು ಸ್ಥಳೀಯ ಶಾಸಕ ಶರತ್ ಬಚ್ಚೇಗೌಡ ಬೆಂಬಲಿಗರ ನಡುವೆ ಗಲಾಟೆ ನಡೆದಿದ್ದು, ಪರಿಸ್ಥಿತಿ ನಿಯಂತ್ರಣಕ್ಕಾಗಿ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಪಟ್ಟಣದಲ್ಲಿ ಜರುಗಿದೆ.
ಪಟ್ಟಣದ ಗೌತಮ್ ಕಾಲೋನಿಯಲ್ಲಿ ನಗರೋತ್ಥಾನ ಇಲಾಖೆಯಿಂದ 8 ಕೋಟಿ ವಿಶೇಷ ಅನುದಾನವನ್ನು ಮಂಜೂರು ಮಾಡಲಾಗಿತ್ತು. ನಿನ್ನೆ ಗುದ್ದಲಿ ಪೂಜೆ ನೆರವೇರಿಸಲು ಸಚಿವ ಎಂಟಿಬಿ ನಾಗರಾಜ್ ಸಹ ಸ್ಥಳಕ್ಕೆ ಆಗಮಿಸಿ ಗುದ್ದಲಿ ಪೂಜೆ ನಡೆಸಲು ಮುಂದಾಗಿದ್ದರು. ಈ ವೇಳೆ ಸ್ಥಳೀಯ ಶಾಸಕ ಶರತ್ ಬಚ್ಚೇಗೌಡರ ಬೆಂಬಲಿಗರು ವಿರೋಧ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಕಾರ್ಯಕ್ರಮ ನಡೆಸಲು ಶಿಷ್ಟಾಚಾರದ ಪ್ರಕಾರ ಸ್ಥಳೀಯ ಶಾಸಕರಿಗೆ ಮಾಹಿತಿ ನೀಡಬೇಕು. ಜೊತೆಗೆ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಈ ವೇಳೆ ಸಚಿವ ಎಂಟಿಬಿ ಬೆಂಬಲಿಗರು ಸಹ ವಾಗ್ವಾದಕ್ಕೆ ಇಳಿದಿದ್ದಾರೆ. ಪರಸ್ಪರ ಎರಡು ಕಡೆ ಕೈ ಕೈ ಮೀಲಾಯಿಸುವ ಹಂತಕ್ಕೆ ಹೋಗುತ್ತಿದ್ದಂತೆ ಪೊಲೀಸರು ನಿಯಂತ್ರಿಸಲು ಯತ್ನಿಸಿದ್ದಾರೆ. ಆದರೂ ಪರಿಸ್ಥಿತಿ ಸುಧಾರಿಸಲಿಲ್ಲ. ವಿಕೋಪಕ್ಕೆ ಹೋಗುವುದನ್ನು ತಪ್ಪಿಸಲು ಲಘು ಪ್ರಹಾರ ನಡೆಸಿ ಗುಂಪನ್ನು ಪೊಲೀಸರು ಚದುರಿಸಿದ್ದಾರೆ. ಈ ನಡುವೆ ನ್ಯಾಯ ಕೇಳಿದ್ದಕ್ಕೆ ಪೊಲೀಸರು ಲಾಠಿ ಪ್ರಹಾರ ನಡೆಸಿ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಶಾಸಕ ಶರತ್ ಬಚ್ಚೇಗೌಡ ನೇತೃತ್ವದಲ್ಲಿ ಹೊಸಕೋಟೆ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ಇದನ್ನೂ ಓದಿ: BS Yeddyurappa: ಮಹದಾಯಿ ನದಿ ನೀರು ವಿಚಾರದಲ್ಲಿ ಮತ್ತೆ ಕ್ಯಾತೆ ತೆಗೆದ ಗೋವಾ; ತಕ್ಕ ಉತ್ತರ ನೀಡ್ತಾರ ಯಡಿಯೂರಪ್ಪ?
ಕೂಡಲೇ ಹೊಸಕೋಟೆ ಡಿವೈಎಸ್ಪಿ ಸೇರಿದಂತೆ ಲಾಠಿ ಪ್ರಹಾರ ನಡೆಸಿದ ಎಲ್ಲರ ಮೇಲು ಕ್ರಮ ಜರುಗಿಸಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ಪಟ್ಟು ಹಿಡಿದು ಠಾಣೆಗೆ ನುಗ್ಗಲು ಮುಂದಾದರು. ಈ ವೇಳೆ ಹಿರಿಯ ಪೊಲೀಸ್ ಅಧಿಕಾರಿಗಳು ಶರತ್ ಬಚ್ಚೇಗೌಡರ ಮನವೊಲಿಸಿದ್ದು, ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.
ಇನ್ನು, ಗುದ್ದಲಿ ಪೂಜೆಗೆ ನಗರಸಭೆ ಆಯುಕ್ತರು ಸ್ಥಳೀಯ ಶಾಸಕರನ್ನು ಆಹ್ವಾನಿಸಲಾಗಿತ್ತು. ಆದರೂ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಿಲ್ಲ. ಜ. 26ರಂದು ನಡೆದ ಗಣರಾಜ್ಯೋತ್ಸವದಲ್ಲಿ ಭಾಗಿಯಾಗಿದ್ದರು. ಇವತ್ತು ಕರೆದರೂ ಗೈರಾಗಿದ್ದಾರೆ. ಹಾಗಾಗಿ ಗುದ್ದಲಿ ಪೂಜೆ ಮಾಡಿರುವುದಾಗಿ ಸಚಿವ ಎಂಟಿಬಿ ನಾಗರಾಜ್ ತಿಳಿಸಿದ್ದಾರೆ.
ಬಳಿಕ ಶರತ್ ಬಚ್ಚೇಗೌಡ ಪ್ರತಿಕ್ರಿಯಿಸಿ, ಅಧಿಕಾರಿಗಳು ಅಧಿಕಾರ ನಡೆಸುವವರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ನ್ಯಾಯ ಕೇಳಲು ಹೋದವರ ಮೇಲೆ ದೌರ್ಜನ್ಯ ಎಸಗಿದ್ದಾರೆ. ಹೊಸಕೋಟೆಯಲ್ಲಿ ಪ್ರಜಾಪ್ರಭುತ್ವಕ್ಕೆ ಬೆಲೆ ಇಲ್ಲದಂತಾಗಿದೆ. ಹಾಗಾಗಿ ಲಾಠಿ ಪ್ರಹಾರ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಲಾಗುವುದು. ಒಂದೆರಡು ದಿನಗಳಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಶರತ್ ಬಚ್ಚೇಗೌಡ ಎಚ್ಚರಿಕೆ ನೀಡಿದ್ದಾರೆ.
ವರದಿ: ಆದೂರು ಚಂದ್ರು
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ