news18-kannada Updated:June 27, 2020, 9:14 PM IST
ಭವಾನಿ ರೇವಣ್ಣ
ಹಾಸನ; ಈಗಾಗಲೇ ರಾಜ್ಯಾದ್ಯಂತ ಎಸ್.ಎಸ್.ಎಲ್.ಸಿ ಪರೀಕ್ಷೆಯು ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಪರೀಕ್ಷೆಗೆ ಹಾಜರಾಗಿ ಲವಲವಿಕೆಯಿಂದ ಪರೀಕ್ಷೆ ಬರೆಯುತ್ತಿದ್ದಾರೆ ಎಂದು ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ಭವಾನಿ ರೇವಣ್ಣ ಅವರು ತಿಳಿಸಿದ್ದಾರೆ.
ಹಾಸನ ನಗರದ ಗಂಧದ ಕೋಠಿಯ ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಕ್ಕೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಭವಾನಿ ರೇವಣ್ಣ ಅವರು, ಮೊದಲನೇ ದಿನದ ಪರೀಕ್ಷೆಯಂದು ವಿದ್ಯಾರ್ಥಿಗಳಲ್ಲಿ ಸ್ವಲ್ಪ ಆತಂಕದ ಮನೋಭಾವವಿದ್ದರೂ ಸಹ ರಾಜ್ಯಾದ್ಯಂತ ಶೇ. 98.3 ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ ಎಂದರು.
ಚನ್ನರಾಯಪಟ್ಟಣ ಹಾಗೂ ಹೊಳೆನರಸೀಪುರ ತಾಲ್ಲೂಕಿನ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಈಗಾಗಲೇ ಭೇಟಿ ನೀಡಿ ವಿದ್ಯಾರ್ಥಿಗಳೊಡನೆ ಮಾತನಾಡಿದ್ದೇನೆ. ವಿದ್ಯಾರ್ಥಿಗಳು ಯಾವುದೇ ಆತಂಕಕ್ಕೆ ಒಳಗಾಗದೆ ಪರೀಕ್ಷೆ ಬರೆಯುತ್ತಿದ್ದಾರೆ ಎಂದು ಭವಾನಿ ರೇವಣ್ಣ ಹೇಳಿದರು.
ಕಳೆದ ಬಾರಿ ಜಿಲ್ಲೆಯು ಎಸ್. ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲನೇ ಸ್ಥಾನ ಪಡೆದುಕೊಂಡಿತ್ತು. ಈ ಬಾರಿಯೂ ಸಹ ಪ್ರಥಮ ಸ್ಥಾನ ಪಡೆದುಕೊಳ್ಳುವ ಆಶಯವಿದೆ. ಈ ನಿಟ್ಟಿನಲ್ಲಿ ಶಿಕ್ಷಕರೊಡನೆ, ವಿದ್ಯಾರ್ಥಿಗಳೊಡನೆ ಹಾಗೂ ಪೋಷಕರೊಡನೆ ಸಾಕಷ್ಟು ಸಭೆಗಳನ್ನು ಮಾಡಲಾಗಿದೆ. ಅದರೆ ಈ ಬಾರಿ ಕೊರೋನಾ ಕಾರಣದಿಂದಾಗಿ ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರಲಾಗುವುದಿಲ್ಲ. ಒಟ್ಟಾರೆಯಾಗಿ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದೆ ಎಸ್.ಎಸ್.ಎಲ್.ಸಿ ಪರೀಕ್ಷೆ ಮುಗಿಯುವಂತೆ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಭವಾನಿ ರೇವಣ್ಣ ಹೇಳಿದರು.
ಇದನ್ನು ಓದಿ: ವಲ್ಲಭಭಾಯಿ ಪಟೇಲರ ಪ್ರತಿಮೆ ನಿರ್ಮಾಣ ಮಾಡಿದ ತಂಡದಿಂದ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆ ನಿರ್ಮಾಣ
ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಭಾನುವಾರ ಮತ್ತೆ ಲಾಕ್ಡೌನ್ ಜಾರಿ ಮಾಡಿರುವುದರ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮೊದಲ ಬಾರಿ ಲಾಕ್ ಡೌನ್ ಮಾಡಿದಾಗಲೇ ಕೆಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದರೆ ರಾಜ್ಯದಲ್ಲಿ ಯಾವುದೇ ಕೊರೋನಾ ಪ್ರಕರಣಗಳು ದಾಖಲಾಗುತ್ತಿರಲಿಲ್ಲ. ಹೊರ ರಾಜ್ಯಗಳಿಂದ ಜನರು ನಮ್ಮ ರಾಜ್ಯಕ್ಕೆ ಬರಲು ಅನುಮತಿ ನೀಡಿದ್ದರಿಂದಲೇ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗಿವೆ. ಈಗಲೂ ಸಹ ಜಿಲ್ಲೆಯಲ್ಲಿ ಹೊರ ರಾಜ್ಯಗಳಿಂದ ಬಂದವರಲ್ಲಿ ಮಾತ್ರ ಸೋಂಕು ದೃಢಪಟ್ಟಿದೆಯೇ ವಿನಃ ಸ್ಥಳೀಯರಲ್ಲಿ ಇಲ್ಲ. ಪ್ರಸ್ತುತ ಕೊರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ಅವಶ್ಯಕತೆ ಇದೆ ಎಂದು ಅವರು ಹೇಳಿದರು.
First published:
June 27, 2020, 9:14 PM IST