ಶ್ರೀನಗರ (ಜು.18): ಜಮ್ಮು-ಕಾಶ್ಮೀರದ ಶೋಫಿಯಾನ ಜಿಲ್ಲೆಯಲ್ಲಿ ಇಂದು ಮುಂಜಾನೆ ಸೇನೆ ನಡೆಸಿದ ಕಾರ್ಯಾಚರಣೆ ವೇಳೆ ಮೂವರು ಉಗ್ರರರನ್ನು ಹೊಡೆದುರುಳಿಸಲಾಗಿದೆ. ಈ ಮೂಲಕ ಕಳೆದ 24 ಗಂಟೆಯಲ್ಲಿ 6 ಭಯೋತ್ಪಾದಕರನ್ನು ಹತ್ಯೆ ಮಾಡಿದಂತಾಗಿದೆ.
ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಆಮ್ಶಿಪೊರ ಭಾಗದಲ್ಲಿ ಉಗ್ರರು ಅಡಗಿರುವ ಬಗ್ಗೆ ಸೇನೆಗೆ ಮಾಹಿತಿ ದೊರೆತಿತ್ತು. ಈ ಹಿನ್ನೆಲೆಯಲ್ಲಿ ಸೇನೆ ಶೋಧ ಕಾರ್ಯ ನಡೆಸಿತ್ತು. ಈ ವೇಳೆ ಉಗ್ರರು ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಯೋಧರು ಪ್ರತಿದಾಳಿ ನಡೆಸಿ ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ.
ಉಗ್ರರು ಯಾವ ಸಂಘಟನೆಗೆ ಸೇರಿದವರು ಎನ್ನುವ ಬಗ್ಗೆ ಇನ್ನೂ ಮಾಹಿತಿ ಸಿಕ್ಕಿಲ್ಲ.ಸದ್ಯ ಇವರ ಬಳಿ ಇರುವ ಶಸ್ತ್ರಾಸ್ತ್ರಗಳನ್ನು ಸೇನಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಇವರ ಬಳಿ ಕೆಲ ದಾಖಲೆಗಳಿದ್ದು, ಅವುಗಳನ್ನು ಕೂಡ ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ: ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರರ ನೆಲೆ ಮೇಲೆ ಮತ್ತೊಮ್ಮೆ ದಾಳಿ ನಡೆಸಿದ ಭಾರತೀಯ ಸೇನೆ
ಶುಕ್ರವಾರ ಮುಂಜಾನೆ ಕುಲ್ಗಮ್ ಭಾಗದಲ್ಲಿ ಭಾರತೀಯ ಸೇನೆ ನಡೆಸಿದ ಕಾರ್ಯಾಚರಣೆ ವೇಳೆ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿತ್ತು. ಈ ಪೈಕಿ ಜೈಲ್-ಎ-ಮೊಹ್ಮದ್ ಉಗ್ರ ಸಂಘಟನೆಯ ಕಮಾಂಡರ್ ಕೂಡ ಹತನಾಗಿದ್ದ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ