ಹೈದರಾಬಾದ್: ಹಿರಿಯ ವಿದ್ಯಾರ್ಥಿಯಿಂದ ರಾಗಿಂಗ್‌ಗೆ (Ragging) ಒಳಗಾದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು (Medical Student) ವಿಷಕಾರಿ ಇಂಜೆಕ್ಷನ್ ಚುಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತೆಲಂಗಾಣದ (Telangana) ವಾರಂಗಲ್ ಜಿಲ್ಲೆಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿಯನ್ನು ಪ್ರೀತಿ ಎಂದು ಗುರುತಿಸಲಾಗಿದ್ದು, ಆಕೆಗೆ ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರಚೋದಿಸಿದ ಆರೋಪಿ ಸೈಫ್ (Saif) ಎಂದು ತಿಳಿದು ಬಂದಿದೆ, ಆರೋಪಿ ಸೈಫ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ಸಂತ್ರಸ್ತ ವಿದ್ಯಾರ್ಥಿನಿ ಪ್ರೀತಿ ಪ್ರಥಮ ವರ್ಷದ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಕಲಿಯುತ್ತಿದ್ದು, ಹೈದರಾಬಾದ್‌ನ ಬೋಡುಪ್ಪಲ್ ಪ್ರದೇಶದ ನಿವಾಸಿಯಾಗಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದ ಈಕೆ ಎಂಬಿಬಿಎಸ್ ಮುಗಿಸಿ ವಾರಂಗಲ್ ಕೆಎಂಸಿಯಲ್ಲಿ ಅನಸ್ತೇಶಿಯಾ ವಿಭಾಗದಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ಅಧ್ಯಯನ ಮಾಡುತ್ತಿದ್ದರು. ಮೂರು ತಿಂಗಳ ಹಿಂದಷ್ಟೇ ಈ ಕಾಲೇಜು ಸೇರಿದ್ದರು. ಅಂದಿನಿಂದ ಹಿರಿಯ ವಿದ್ಯಾರ್ಥಿ ಸೈಫ್ ಎಂಬಾತ ಜಾತಿಯ ಕಾರಣಕ್ಕೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಕೆಲ ದಿನಗಳ ಹಿಂದಷ್ಟೇ ಯುವತಿ ಪೋಷಕರಿಗೆ ಮಾಹಿತಿ ನೀಡಿದ್ದರು ಎಂದು ಅವರ ತಂದೆ ಹೇಳಿದ್ದಾರೆ.
ಇದನ್ನೂ ಓದಿ: Crime News: ಪ್ರೀತಿ ನಿರಾಕರಿಸಿದ ಕಾರಣಕ್ಕೆ ಪ್ರೇಯಸಿಗೆ ಇರಿದು ಆತ್ಮಹತ್ಯೆಗೆ ಯತ್ನಿಸಿದ ಭೂಪ ಚೇತರಿಕೆ
ವಿದ್ಯಾರ್ಥಿನಿ ಸ್ಥಿತಿ ಗಂಭೀರ
ಸದ್ಯ ಸಂತ್ರಸ್ತ ವಿದ್ಯಾರ್ಥಿನಿ ಪ್ರೀತಿ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ಪ್ರಸ್ತುತ ನಿಜಾಮ್ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ನಿಮ್ಸ್) ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ನಿಮ್ಸ್ ಆಸ್ಪತ್ರೆಯ ವೈದ್ಯರು ತುರ್ತು ನಿಗಾ ಘಟಕದಲ್ಲಿ ಪ್ರೀತಿ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಸಂತ್ರಸ್ತ ವಿದ್ಯಾರ್ಥಿನಿ ಯಾವ ಇಂಜೆಕ್ಷನ್ ತೆಗೆದುಕೊಂಡಿದ್ದಾರೆ ಎಂಬುದನ್ನು ತಿಳಿಯಲು ಆಕೆಯ ರಕ್ತದ ಮಾದರಿ ಸಂಗ್ರಹಿಸಲಾಗಿದೆ. ವರದಿ ಬಂದ ಬಳಿಕವಷ್ಟೇ ವಿಷಯ ತಿಳಿಯಲಿದೆ ಎಂದು ವೈದ್ಯರು ತಿಳಿಸಿದ್ದಾರೆ. ಪ್ರೀತಿಯನ್ನು ಕಾಪಾಡಲು ವೈದ್ಯರು ಶತಪ್ರಯತ್ನ ಮಾಡುತ್ತಿದ್ದು, ಆಕೆಯ ದೇಹ ಕ್ಷಣ ಕ್ಷಣಕ್ಕೆ ವಿಷಮಯ ಆಗುತ್ತಿದೆ ಎಂದು ವೈದ್ಯರು ತಿಳಿಸಿದ್ಧಾರೆ.
ವಿದ್ಯಾರ್ಥಿನಿ ಆತ್ಮಹತ್ಯೆಗೆ ಕಾರಣವೇನು?
ಕಾಲೇಜು ಆಸ್ಪತ್ರೆಯ ವಾರ್ಡ್‌ನಲ್ಲಿ ಸಂತ್ರಸ್ತ ವಿದ್ಯಾರ್ಥಿನಿ ಪ್ರೀತಿ ಕರ್ತವ್ಯ ನಿರ್ವಹಿಸುತ್ತಿರುವ ವೇಳೆ ಅಲ್ಲಿಗೆ ಬಂದ ಹಿರಿಯ ವಿದ್ಯಾರ್ಥಿ ಸೈಫ್ ಆಕೆ ದಲಿತ ಸಮುದಾಯದ ವಿದ್ಯಾರ್ಥಿನಿ ಆಗಿದ್ದರಿಂದ ಜಾತಿಯ ಕಾರಣಕ್ಕೆ ರ‍್ಯಾಗಿಂಗ್ ಮಾಡಿ ಹೀಯಾಳಿಸಿದ್ದಾನೆ. ಇದರಿಂದ ನೊಂದ ಪ್ರೀತಿ ಆಸ್ಪತ್ರೆಯ ಕೋಣೆಯೊಂದರಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪ್ರಜ್ಞೆ ತಪ್ಪಿ ಬಿದ್ದಿದ್ದ ಆಕೆಯನ್ನು ಅಲ್ಲಿದ್ದ ವಿದ್ಯಾರ್ಥಿಗಳು ಗಮನಿಸಿ ವರಂಗಲ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ತಂದೆಯ ಆಕ್ರೋಶ
ಮತ್ತೊಂದೆಡೆ ಪ್ರೀತಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ತಮ್ಮ ಮಗಳನ್ನು ಈ ದುಸ್ಥಿತಿಗೆ ತಳ್ಳಿದ ವಿದ್ಯಾರ್ಥಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರೀತಿ ಪೋಷಕರು ಆಗ್ರಹಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಪ್ರೀತಿಯ ತಂದೆ, ಆರೋಪಿ ಸೈಫ್ ಕಿರುಕುಳ ನೀಡುತ್ತಿದ್ದ ಎಂದು ಮಗಳು ನನ್ನ ಬಳಿ ಹೇಳಿಕೊಂಡಿದ್ದಳು. ಆದರೆ ಈ ಬಗ್ಗೆ ಕಾಲೇಜು ಆಡಳಿತ ಮಂಡಳಿಗೆ ದೂರು ನೀಡಿದರೂ ಅವರು ಗಮನ ಹರಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ. ಅಲ್ಲದೇ ಪ್ರೀತಿ ಆತ್ಮಹತ್ಯೆಗೆ ಯತ್ನಿಸಿದ ವಿಚಾರವನ್ನೂ ಕಾಲೇಜು ಆಡಳಿತ ಮಂಡಳಿ ನಮಗೆ ತಿಳಿಸಿಲ್ಲ ಎಂದು ತಂದೆ ಆರೋಪಿಸಿದ್ದಾರೆ.
ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಮೃತ್ಯು!
ವಿದ್ಯಾರ್ಥಿನಿ ಪ್ರೀತಿ ಕಳೆದ ವಾರ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದರು. ಇದೀಗ ಅವರು ನಾಲ್ಕು ದಿನಗಳ ನಂತರ (ಫೆಬ್ರವರಿ 27ರಂದು) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆ ಸಂಬಂಧ ವರಂಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಘಟನೆಗೆ ಸಂಬಂಧಿಸಿದಂತೆ ಆತಂಕ ವ್ಯಕ್ತಪಡಿಸಿರುವ ಮಾಜಿ ಸಚಿವೆ ಕೊಂಡ ಸುರೇಖಾ ಅವರು, ಪ್ರಕರಣವನ್ನು ಉನ್ನತ ಮಟ್ಟದಲ್ಲಿ ತನಿಖೆ ನಡೆಸಬೇಕು. ಕಾಲೇಜುಗಳಲ್ಲಿ ರ‍್ಯಾಗಿಂಗ್ ತಡೆಯಬೇಕು. ವೈದ್ಯ ಪದವಿ ಓದಲು ಬರುವ ಬಡಮಕ್ಕಳ ಮೇಲೆ ನಡೆಯುವ ದೌರ್ಜನ್ಯ, ದಬ್ಬಾಳಿಕೆಯನ್ನು ನಿಯಂತ್ರಿಸಬೇಕಿದೆ ಎಂದು ಒತ್ತಾಯಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ