ನವದೆಹಲಿ (ಮೇ 18): ಭಾರತಕ್ಕೆ ತೌಕ್ತೆ ಚಂಡಮಾರುತ ಅಪ್ಪಳಿಸಿದ್ದು, ಕರ್ನಾಟಕ, ಮಹಾರಾಷ್ಟ್ರ, ಕೇರಳ ಸೇರಿದಂತೆ ಕರಾವಳಿ ತೀರದ ಹಲವು ದೇಶಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಕರ್ನಾಟಕದಲ್ಲಿ ತೌಕ್ತೆ ಚಂಡಮಾರುತದ ಅಬ್ಬರಕ್ಕೆ ಈಗಾಗಲೇ 8 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ನಿನ್ನೆ ರಾತ್ರಿಯಿಂದ ಗುಜರಾತ್ನಲ್ಲಿ ತೌಕ್ತೆ ಚಂಡಮಾರುತದ ಆರ್ಭಟ ಶುರುವಾಗಿದ್ದು, ಈಗಾಗಲೇ ಮೂವರು ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದಲ್ಲೂ ಚಂಡಮಾರುತದ ಹಿನ್ನೆಲೆಯಲ್ಲಿ ಭಾರೀ ಮಳೆ ಕಾಣಿಸಿಕೊಂಡಿದ್ದು, 6 ಮಂದಿ ಸಾವನ್ನಪ್ಪಿದ್ದಾರೆ.
ಗುಜರಾತ್ನಲ್ಲಿ ಇಂದು ಬೆಳಗ್ಗೆ ಭಾರೀ ಭೂ ಕುಸಿತವಾಗಿದ್ದು, ಗಂಟೆಗೆ 190 ಕಿ.ಮೀ. ವೇಗದಲ್ಲಿ ಬೀಸಿದ ಗಾಳಿಯಿಂದ ಅನೇಕ ಮನೆಗಳು, ಮರಗಳು ನೆಲಕ್ಕುರುಳಿವೆ. ಮುಂಬೈನಲ್ಲಿ ಭಾರೀ ಮಳೆ ಉಂಟಾಗಿ, ಸಮುದ್ರದ ತೀರದಲ್ಲಿರುವ ಗ್ರಾಮಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಶಿಫ್ಟ್ ಮಾಡಲಾಗಿದೆ. ಮುಂಬೈನಲ್ಲಿ 305 ಜನರಿದ್ದ ಬೋಟ್ ಮುಳುಗಿದ್ದು, ಇನ್ನೂ 95 ಜನರು ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.
ತೌಕ್ತೆ ಚಂಡಮಾರುತದಿಂದ ಗೇಟ್ ವೇ ಆಫ್ ಇಂಡಿಯಾಗೆ ಸಮುದ್ರದ ಅಲೆಗಳು ಅಪ್ಪಳಿಸುತ್ತಿರುವ ಭಯಾನಕ ವಿಡಿಯೋ ವೈರಲ್ ಆಗಿದೆ. ಭಾರತದಲ್ಲಿ 3 ದಿನಗಳಿಂದ ಚಂಡಮಾರುತದ ಅಬ್ಬರಕ್ಕೆ ಒಟ್ಟು 21 ಜನರು ಜೀವ ಕಳೆದುಕೊಂಡಿದ್ದಾರೆ.
ಮುಂಬೈನಲ್ಲಿರುವ ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಅವರ ಮನೆ ಕೂಡ ಸಂಪೂರ್ಣ ಜಲಾವೃತವಾಗಿದ್ದು, ಈ ಕುರಿತು ಬಿಗ್ ಬಿ ತಮ್ಮ ಬ್ಲಾಗ್ನಲ್ಲಿ ಬರೆದುಕೊಂಡಿದ್ದಾರೆ.
ಗುಜರಾತ್ನಲ್ಲಿ ಇದುವರೆಗೂ 2 ಲಕ್ಷ ಜನರನ್ನು ಸುರಕ್ಷಿತ ಸ್ಥಳಗಳಿಗೆ ಶಿಫ್ಟ್ ಮಾಡಲಾಗಿದೆ. ಅಹಮದಾಬಾದ್ ಏರ್ಪೋರ್ಟ್ ಸುತ್ತಲೂ ನೀರು ಆವರಿಸಿಕೊಂಡು, ವಿಮಾನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಗುಜರಾತ್ನ ಬಹುತೇಕ ಎಲ್ಲ ಪ್ರಮುಖ ವಿಮಾನ ನಿಲ್ದಾಣಗಳೂ ಬಂದ್ ಆಗಿದೆ. ಗುಜರಾತ್ನಲ್ಲಿ 1998ರ ನಂತರ ಕಳೆದ 23 ವರ್ಷಗಳಲ್ಲಿ ಉಂಟಾಗಿರುವ ಅತ್ಯಂತ ಭೀಕರ ಚಂಡಮಾರುತ ಇದು ಎನ್ನಲಾಗಿದೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಈಗಾಗಲೇ ತುರ್ತು ಕೆಲಸಗಳಿಗೆ 100 ತಂಡಗಳನ್ನು ಕೇರಳ, ಕರ್ನಾಟಕ, ತಮಿಳು ನಾಡು, ಗುಜರಾತ್, ಗೋವಾ ಮತ್ತು ಮಹಾರಾಷ್ಟ್ರ ಭಾಗಗಳಲ್ಲಿ ನಿಯೋಜಿಸಿದೆ. ಉತ್ತರ ವಾಯವ್ಯ ಭಾಗದತ್ತ ಗಂಟೆಗೆ 18 ಕಿಲೋ ಮೀಟರ್ ವೇಗದಲ್ಲಿ ಚಂಡಮಾರುತ ಬೀಸುತ್ತಿದ್ದು ಗಾಳಿಯ ವೇಗ 155ರಿಂದ 165 ಕಿಲೋ ಮೀಟರ್ ನಷ್ಟು ಇರಲಿದೆ. ಚಂಡಮಾರುತದ ಪ್ರಭಾವದಿಂದ ಮಹಾರಾಷ್ಟ್ರ, ಗುಜರಾತ್ನಲ್ಲಿ ಇಂದು ಮಳೆಯಾಗುತ್ತಿದೆ. ಭಾರತದ ಪಶ್ಚಿಮ ಕರಾವಳಿಯಲ್ಲಿ ಹಗುರ ಗಾಳಿಯಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಸೌರಾಷ್ಟ್ರ ಮತ್ತು ಕಚ್ ಒಳನಾಡು ಪ್ರದೇಶದ ಹಲವೆಡೆ ಅಧಿಕದಿಂದ ಕೂಡಿದ ಭಾರೀ ಮಳೆಯಾಗಲಿದೆ.
ತೌಕ್ತೆ ಚಂಡಮಾರುತದ ಅಬ್ಬರದಿಂದ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇದೇ 20ರವರೆಗೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಮೇ 20ರವರೆಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿ ಗಾಳಿಯ ವೇಗ ಹೆಚ್ಚಿರುವ ಕಾರಣ ಮೀನುಗಾರರು ಕಡಲಿಗೆ ಇಳಿಯದಂತೆ ಇಲಾಖೆ ಎಚ್ಚರಿಕೆ ನೀಡಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ