ಶಹಜಹಾನಪುರ (ಆಗಸ್ಟ್ 23): ಉತ್ತರಪ್ರದೇಶದಲ್ಲಿ ಹೆಣ್ಣು ಮಕ್ಕಳ ಮೇಲೆ ಅದರಲ್ಲೂ ದಲಿತ ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಅಧಿಕವಾಗುತ್ತಲೇ ಇದೆ. ಈ ಹಿಂದೆ ಉತ್ತರಪ್ರದೇಶದ ಹತ್ರಾಸ್ ಮತ್ತು ಉನ್ನಾವೋ ಪ್ರದೇಶದಲ್ಲಿ ನಡೆದ ಅತ್ಯಾಚಾರ ಪ್ರಕರಣಗಳು ಇಡೀ ದೇಶವನ್ನು ತಲ್ಲಣಕ್ಕೆ ದೂಡಿತ್ತು. ಆದರೂ, ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣ ಮಾತ್ರ ಉತ್ತರಪ್ರದೇಶದಲ್ಲಿ ಕಡಿಮೆಯಾಗುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಇದೀಗ ಮತ್ತೆ 18 ವರ್ಷದ ದಲಿತ ಯುವತಿ ಮೇಲೆ ಅತ್ಯಾಚಾರ ನಡೆದಿದ್ದು, ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.
ಉತ್ತರ ಪ್ರದೇಶ ರಾಜ್ಯದ ಶಹಜಹಾನ್‌ಪುರದ ಹಳ್ಳಿಯೊಂದರಲ್ಲಿ 18 ವರ್ಷದ ದಲಿತ ಯುವತಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸ್ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸಂತ್ರಸ್ತ ಯುವತಿ ದನಗಳನ್ನು ಮೇಯಿಸಲು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ತಿಲ್ಹಾರ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ಸಂಜಯ್ ಕುಮಾರ್ ಹೇಳಿದ್ದಾರೆ. ಆರೋಪಿ ಮಧ್ಯವಯಸ್ಕ ವ್ಯಕ್ತಿಯಾಗಿದ್ದು, ಸಂತ್ರಸ್ತೆಯ ಗ್ರಾಮದವನೇ ಆಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮನೆಗೆ ಹಿಂದಿರುಗಿದ ನಂತರ ಯುವತಿ ತನ್ನ ಕುಟುಂಬ ಸದಸ್ಯರಿಗೆ ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ತಿಳಿಸಿದ್ದಾರೆ. ನಂತರ ಪೊಲೀಸರು ಭಾನುವಾರ ಪ್ರಕರಣ ದಾಖಲಿಸಿಕೊಂಡದ್ದು, ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ದೆಹಲಿಯ ನೈರುತ್ಯ ದೆಹಲಿಯ ಕಂಟೋನ್ಮೆಂಟ್ ಬಳಿ ಆಗಸ್ಟ್ 1 ರಂದು ದಲಿತ ಬಾಲಕಿ ಮೇಲೆ 55 ವರ್ಷದ ಸ್ಮಶಾನದ ಪೂಜಾರಿ ರಾಧೇ ಶ್ಯಾಮ್ ಮತ್ತು ಸ್ಮಶಾನದ ಉದ್ಯೋಗಿ ಕುಲದೀಪ್ ಸಿಂಗ್ ಇಬ್ಬರು ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿ, ಕುಟುಂಬದ ಒಪ್ಪಿಗೆಯಿಲ್ಲದೆ ಅಂತ್ಯಸಂಸ್ಕಾರ ಮಾಡಲಾಗಿತ್ತು. ಈ ಕುರಿತು ಬಾಲಕಿಯ ತಾಯಿಯ ಹೇಳಿಕೆಯ ಆಧಾರದ ಮೇಲೆ ದೆಹಲಿ ಪೊಲೀಸರು ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ