news18-kannada Updated:December 27, 2020, 7:02 AM IST
ಸಾಂದರ್ಭಿಕ ಚಿತ್ರ
ನವದೆಹಲಿ, ಡಿ. 26: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 'ಮನ್ ಕಿ ಬಾತ್' ಕಾರ್ಯಕ್ರಮ ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ಜನ ಚಪ್ಪಾಳೆ ತಟ್ಟಿ ಅಥವಾ ತಟ್ಟೆ ಬಡಿದು ಅಡ್ಡಿಪಡಿಸಿ. ಈ ಮುಖಾಂತರ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇತ್ತೀಚೆಗೆ ತಂದಿರುವ ರೈತ ವಿರೋಧಿಯಾದ ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸಿ ಎಂದು ಭಾರತೀಯ ಕಿಸಾನ್ ಯೂನಿಯನ್ ಕರೆ ನೀಡಿದೆ.
ಭಾರತೀಯ ಕಿಸಾನ್ ಯೂನಿಯನ್ ಡಿಸೆಂಬರ್ 20ರಂದೇ ಈ ರೀತಿಯ ಭಿನ್ನ ಹೋರಾಟವನ್ನು ರೂಪಿಸಿ ಘೋಷಿಸಿತ್ತು. ಈಗ ಅಗತ್ಯ ತಯಾರಿಯನ್ನು ಮಾಡಿಕೊಳ್ಳಲಾಗಿದ್ದು, ಭಾನುವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ 'ಮನ್ ಕಿ ಬಾತ್' ಕಾರ್ಯಕ್ರಮ ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ರೈತರು ಚಪ್ಪಾಳೆ ತಟ್ಟಿ ಅಥವಾ ತಟ್ಟೆ ಬಡಿದು ಕೇಂದ್ರ ಸರ್ಕಾರ ತಂದಿರುವ ರೈತ ವಿರೋಧಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಲಿದ್ದಾರೆ.
ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಅವರು ಕೃಷಿ ಮಸೂದೆಗಳನ್ನು ಹಿಂಪಡೆಯದೆ ಹಠ ಹಿಡಿದು ಕುಳಿತಿರುವ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕಾಗಿದೆ. ಶಾಂತಿಯುತವಾಗಿ ಮತ್ತು ಭಿನ್ನವಾಗಿ ಪ್ರತಿಭಟನೆ ನಡೆಸಬೇಕಿದೆ. ಈ ಹಿನ್ನಲೆಯಲ್ಲಿ ಪ್ರಧಾನ ಮಂತ್ರಿ ಮೋದಿ ಅವರ 'ಮನ್ ಕಿ ಬಾತ್' ಕಾರ್ಯಕ್ರಮ ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ರೈತರು ಚಪ್ಪಾಳೆ ತಟ್ಟಿ ಅಥವಾ ತಟ್ಟೆ ಬಡಿದು ತಮ್ಮ ಪ್ರತಿಭಟನೆಯನ್ನು ದಾಖಲಿಸಲಿದ್ದಾರೆ ಎಂದು ಹೇಳಿದ್ದಾರೆ.
ನವೆಂಬರ್ 26ರಿಂದಲೂ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ರೈತರು ಡಿಸೆಂಬರ್ 8ರಂದು 'ಭಾರತ್ ಬಂದ್'ಗೆ ಕರೆ ಕೊಟ್ಟಿದ್ದರು. ಡಿಸೆಂಬರ್ 12ರಂದು ರೈತರು ಪಂಜಾಬ್, ಹರಿಯಾಣ ಮತ್ತಿತರ ಕಡೆ ಟೋಲ್ ಪ್ಲಾಜಾಗಳನ್ನು ಬಂದ್ ಮಾಡಿ ಮುಷ್ಕರ ನಡೆಸಿದ್ದರು. ಮೊದಲಿಗೆ ಪಂಜಾಬ್, ಹರಿಯಾಣಗಳಿಂದ ದೆಹಲಿಗೆ ಬರುವ ರಸ್ತೆಗಳನ್ನು ತಡೆದಿದ್ದ ರೈತರು ಬಳಿಕ ಉತ್ತರ ಪ್ರದೇಶ ಹಾಗೂ ರಾಜಸ್ಥಾನಗಳಿಂದ ದೆಹಲಿಗೆ ಬರುವ ದೆಹಲಿ-ಜೈಪುರ್ ರಸ್ತೆಯನ್ನೂ ಬಂದ್ ಮಾಡಿದ್ದರು. ಡಿಸೆಂಬರ್ 14ರಂದು ಒಂದು ದಿನದ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು. ಡಿಸೆಂಬರ್ 21ರಿಂದಲೇ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಅಂದರೆ 11 ಜನ ರೈತರ ತಂಡ 24 ಗಂಟೆ ಉಪವಾಸ ಇರುವುದು ಇದಾದ ಮೇಲೆ ಮತ್ತೆ 11 ಜನ ರೈತರ ತಂಡ 24 ಗಂಟೆ ಉಪವಾಸ ಇರುವುದಾಗಿದೆ. ಡಿಸೆಂಬರ್ 25ರಿಂದ ಹರಿಯಾಣದ ಎಲ್ಲಾ ಟೋಲ್ ಗಳಲ್ಲಿ ಶುಲ್ಕ ಸಂಗ್ರಹಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಸಾರ್ವಜನಿಕರ ಸಂಚಾರಕ್ಕೆ ತೊಂದರೆಯೂ ಆಗದಂತೆ, ಸರ್ಕಾರಕ್ಕೆ ಶುಲ್ಕ ಸಿಗಬಾರದಂತೆ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸುತ್ತಿದ್ದಾರೆ.
ಕೇಂದ್ರ ಸರ್ಕಾರ ಕೃಷಿ ಕಾನೂನುಗಳಲ್ಲಿನ ಭಿನ್ನಾಭಿಪ್ರಾಯಗಳನ್ನು ವಿಂಗಡಿಸಿ ಚರ್ಚಿಸಲು ಸಮಿತಿಯೊಂದನ್ನು ರಚಿಸುವ ಪ್ರಸ್ತಾಪವನ್ನು ಮುಂದಿಟ್ಟಿದೆ. ಜೊತೆಗೆ ಕನಿಷ್ಠ ಬೆಂಬಲ ಬೆಲೆ ಪದ್ದತಿ ಮುಂದುವರೆಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ. ಆದರೆ ಈ ಪ್ರಸ್ತಾಪಗಳಿಗೆ ಒಪ್ಪದ ರೈತ ಮುಖಂಡರು ಕೇಂದ್ರ ಸರ್ಕಾರ ಇತ್ತೀಚೆಗೆ ತಂದಿರುವ ಮೂರು ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂಪಡೆಯಲೇಬೇಕು. ರೈತರ ಎಲ್ಲಾ ಉತ್ಪನ್ನಗಳಿಗೂ ಕನಿಷ್ಠ ಬೆಂಬಲ ಬೆಲೆ ಕೊಡಬೇಕು. ಜೊತೆಗೆ ರೈತರಿಗೆ ಮಾರಕವಾಗಿರುವ ವಿದ್ಯುತ್ ಕಾನೂನನ್ನು ವಾಪಸ್ ಪಡೆಯಲೇಬೇಕು ಎಂದು ಒತ್ತಾಯಿಸಿದ್ದಾರೆ.
ಇದನ್ನು ಓದಿ: Farmers Protest: ಕೇಂದ್ರ ಸರ್ಕಾರದ ಜೊತೆ ಮಾತುಕತೆಗೆ ಒಪ್ಪಿದ ರೈತ ಸಂಘಟನೆಗಳು; ಡಿ.29ರಂದು ಸಭೆ ನಿಗದಿ
ಹೀಗೆ ಪರಸ್ಪರ ಒಮ್ಮತ ಮೂಡದೇ ಸಮಸ್ಯೆ ಸಮಸ್ಯೆಯಾಗಿಯೇ ಉಳಿದಿದೆ. ಅಧಿಕೃತವಾಗಿ ಹಾಗೂ ಅನೌಪಚಾರಿಕವಾಗಿ ನಡೆಸಿದ ಮಾತುಕತೆಗಳು ವಿಫಲವಾಗಿವೆ. ರೈತರು ದೆಹಲಿ ಚಲೊ, ಹೆದ್ದಾರಿ ತಡೆ, ಟೋಲ್ ಫ್ಲಾಜಾಗಳ ಬಂದ್, ಬಿಜೆಪಿ ನಾಯಕರ ಮನೆ ಮುಂದೆ ಮುಷ್ಕರ, ಭಾರತ್ ಬಂದ್, ಉಪವಾಸ ಸತ್ಯಾಗ್ರಹಗಳೆಲ್ಲವನ್ನೂ ಶಾಂತವಾಗಿ ನಡೆಸಿದ್ದರೂ ಕೇಂದ್ರ ಸರ್ಕಾರ ತನ್ನ ಹಠಮಾರಿತನದಿಂದ ಹಿಂದೆ ಸರಿದಿಲ್ಲ. ಹಾಗಾಗಿ ಮುಂದೇನಾಗುತ್ತದೆ ಎನ್ನುವುದನ್ನು ಈಗಲೇ ಹೇಳಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ದೇಶದ ವಿವಿಧ ಮೂಲೆಗಳಿಂದ ದೆಹಲಿಯತ್ತ ಧಾವಿಸಿದ್ದ ರೈತರು ನವೆಂಬರ್ 26ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ಪ್ರತಿಭಟನೆಗೆ ಮೊದಲು ಒಪ್ಪಿಗೆ ನೀಡಿದ್ದ ಕೇಂದ್ರ ಸರ್ಕಾರ ನಂತರ ಪ್ರತಿಭಟನೆ ಹತ್ತಿಕ್ಕಲೆಂದೇ ಕೊರೋನಾ ಕಾರಣವೊಡ್ಡಿ ಒಪ್ಪಿಗೆಯನ್ನು ಹಿಂಪಡೆದಿತ್ತು. ರೈತರು ದೆಹಲಿಯನ್ನು ಪ್ರವೇಶಿಸದಂತೆ ಗಡಿಯಲ್ಲೇ ತಡೆದಿತ್ತು. ಆದುದರಿಂದ ಸದ್ಯ ದೆಹಲಿಯ ಗಡಿಗಳಲ್ಲೇ ಇರುವ ರೈತರು ಅಲ್ಲೇ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ.
Published by:
HR Ramesh
First published:
December 26, 2020, 7:45 PM IST