ಹರಿಯಾಣ (ಮಾರ್ಚ್ 10); ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಮೂರು ಕೃಷಿ ಮಸೂದೆಗಳ ವಿರುದ್ಧ ದೇಶದ ರೈತರು ಕಳೆದ 104 ದಿನಗಳಿಂದ ವ್ಯಾಪಕ ಹೋರಾಟ ನಡೆಸುತ್ತಿದ್ದಾರೆ. ಈ ಕಾಯ್ದೆಗಳನ್ನು ಹಿಂಪಡೆಯುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಆದರೆ, ರೈತರ ಹೋರಾಟಕ್ಕೆ ಅವರ ಬೇಡಿಕೆಗೆ ಸರ್ಕಾರ ಈ ವರೆಗೆ ಮಣಿದಿಲ್ಲ. ಹೀಗಾಗಿ ಈವರೆಗೆ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳ ವಿರುದ್ಧದ ಹೋರಾಟ ಸರ್ಕಾರದ ವಿರುದ್ಧದ ಹೋರಾಟವಾಗಿ ಬದಲಾಗಿತ್ತು. ಪರಿಣಾಮ ಹರಿಯಾಣದ ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ್ದವು. ಆದರೆ, ಹರಿಯಾಣ ವಿಧಾನಸಭೆಯಲ್ಲಿ ಇಂದು ಮಂಡಿಸಿದ್ದ ಅವಿಶ್ವಾಸ ನಿರ್ಣಯವನ್ನು ಬಿಜೆಪಿ ಗೆದ್ದುಕೊಂಡಿದೆ. ಅವಿಶ್ವಾಸ ನಿರ್ಣಯ ಪ್ರಕ್ರಿಯೆಯಲ್ಲಿ ಬಿಜೆಪಿ-ಜೆಜೆಪಿ ಮೈತ್ರಿ ಸರ್ಕಾರದ ಪರ 55 ಮತಗಳು ಚಲಾವಣೆಯಾಗಿದ್ದರೆ, ಪ್ರತಿಪಕ್ಷ ಕಾಂಗ್ರೆಸ್ ಪರ 32 ಮತಗಳು ಚಲಾವಣೆಯಾಗಿವೆ.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಮಸೂದೆಗಳ ವಿರುದ್ಧ ನಿಲುವನ್ನು ತಳೆದಿರುವ ಇಬ್ಬರು ಸ್ವತಂತ್ರ ಅಭ್ಯರ್ಥಿಗಳು ಸರ್ಕಾರದ ಬೆಂಬಲವನ್ನು ಹಿಂಪಡೆದು ಕೊಂಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷವು ವಿಧಾನಸಭೆಯಲ್ಲಿ ಇಂದು ಅವಿಶ್ವಾಸ ನಿರ್ಣಯವನ್ನು ಮಂಡಿಸಿತ್ತು. ರೈತ ಹೋರಾಟಗಾರರು ಸಹ ಎಲ್ಲಾ ಶಾಸಕರು ಸರ್ಕಾರದ ವಿರುದ್ಧ ಮತ ಚಲಾಯಿಸಬೇಕು ಎಂದು ಹೇಳಿಕೆ ಹೊರಡಿಸಿದ್ದರು. ಆದರೂ ಸಹ ಬಿಜೆಪಿ ಹರಿಯಾಣದಲ್ಲಿ ತನ್ನ ಅಧಿಕಾರವನ್ನು ಉಳಿಸಿಕೊಳ್ಳಲು ಕೊನೆಗೂ ಸಫಲವಾಗಿದೆ.
90 ಸದಸ್ಯರ ಹರಿಯಾಣ ವಿಧಾನಸಭೆಯಲ್ಲಿ ಬಿಜೆಪಿಗೆ 40 ಸ್ಥಾನಗಳಿವೆ. ಐದು ಸ್ವತಂತ್ರ ಶಾಸಕರ ಜೊತೆಗೆ 10 ಜೆಜೆಪಿ ಶಾಸಕರ ಬೆಂಬಲವೂ ಇದೆ. ಕಾಂಗ್ರೆಸ್ 31 ಸ್ಥಾನಗಳನ್ನು ಹೊಂದಿದೆ. ವಿಧಾನ ಸಭೆಯಲ್ಲಿ ಎರಡು ಸ್ಥಾನಗಳು ಖಾಲಿ ಇದ್ದು, ಬಹುಮತವು 45 ಸ್ಥಾನಗಳಲ್ಲಿದೆ ಎಂದು ತಿಳಿದು ಬಂದಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ