HOME » NEWS » National-international » FARMERS PROTEST FARMERS TO HOLD TALKS WITH CENTRE TODAY AS STIR CONTINUES FOR 10TH DAY DBDEL LG

Farmers Protest: 10ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ; ಇಂದು ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಮತ್ತೊಂದು ಸಭೆ

ಕೇಂದ್ರ ಸರ್ಕಾರ ತಮ್ಮ ಬೇಡಿಕೆಗಳನ್ನು ‌ಈಡೇರಿಸದಿದ್ದರೆ ದೆಹಲಿಯ ಎಲ್ಲಾ ಗಡಿಗಳ ರಸ್ತೆಗಳನ್ನು ಬಂದ್ ಮಾಡುತ್ತೇವೆ ಎಂದು ರೈತರು ಎಚ್ಚರಿಸಿದ್ದರು. ಇದರಿಂದ ಬೆಚ್ಚಿದ ಕೇಂದ್ರ ಸರ್ಕಾರ ಪ್ರತಿಭಟನೆ ಕೈಬಿಟ್ಟು ಮಾತುಕತೆಗೆ ಬನ್ನಿ ಎಂದು ಆಹ್ವಾನಿಸಿತ್ತು.

news18-kannada
Updated:December 5, 2020, 8:35 AM IST
Farmers Protest: 10ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ; ಇಂದು ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಮತ್ತೊಂದು ಸಭೆ
ರೈತರ ಪ್ರತಿಭಟನೆ
  • Share this:
ನವದೆಹಲಿ (ಡಿ. 5): ರಾಷ್ಟ್ರ ರಾಜಧಾನಿ ದೆಹಲಿ ಗಡಿಯಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿರುವ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ನಡೆದ ನಾಲ್ಕನೇ ಸುತ್ತಿನ ಮಾತುಕತೆ ಕೂಡ ವಿಫಲವಾಗಿದ್ದು, ಇಂದು ಮತ್ತೊಂದು ಸುತ್ತಿನ ಸಭೆ ನಡೆಸಲಾಗುತ್ತಿದೆ. ಇನ್ನೊಂದೆಡೆ ರೈತರು ತಮ್ಮ ಪ್ರತಿಭಟನೆಯನ್ನು ಮುಂದುವರೆಸಲು ನಿರ್ಧರಿಸಿದ್ದಾರೆ. ಇದರಿಂದ ದೆಹಲಿ ಗಡಿಯಲ್ಲಿ ರೈತರು ನಡೆಸುತ್ತಿದ್ದ ಪ್ರತಿಭಟನೆ 10ನೇ ದಿನಕ್ಕೆ ಕಾಲಿಟ್ಟಿದೆ. ಕೇಂದ್ರ ಕೃಷಿ ಸಚಿವ ನರೇಂದ್ರ ತೋಮರ್, ಪಿಯೂಷ್ ಗೋಯಲ್, ಕಿರಿಯ ಕೈಗಾರಿಕಾ ಸಚಿವ ಸೋಮ್ ಪ್ರಕಾಶ್ ಹಾಗೂ ರೈತ ಸಂಘಟನೆಗಳ 30ಕ್ಕೂ ಹೆಚ್ಚು ಪ್ರತಿನಿಧಿಗಳ‌ ನಡುವೆ ಮೊನ್ನೆ‌ ನಾಲ್ಕನೇ ಸುತ್ತಿನ  ಸಭೆ ನಡೆದಿತ್ತು. ಆದರೆ 7 ಗಂಟೆ ನಡೆದ ಸಭೆಯಲ್ಲಿ ರೈತ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕೇಂದ್ರ ಸರ್ಕಾರದ ನಡುವೆ ಸಹಮತ ಮೂಡಲೇ ಇಲ್ಲ.‌ ಆದುದರಿಂದ ಇನ್ನೊಂದು ಸಭೆಯನ್ನು ಇಂದು (ಡಿಸೆಂಬರ್ 5) ಕರೆಯಲಾಗಿತ್ತು.

ಕೇಂದ್ರ ಸರ್ಕಾರದ ಜೊತೆಗಿನ ಮಾತುಕತೆ ಫಲಪ್ರದವಾಗಿಲ್ಲದ ಕಾರಣ ದೆಹಲಿ ಗಡಿಯಲ್ಲಿ ಪ್ರತಿಭಟನೆ ಮುಂದುವರೆಸಲು ನಿರ್ಧರಿಸಿರುವ ರೈತ ಸಂಘಟನೆಗಳು ಇಂದು ದೇಶಾದ್ಯಂತ ಹೋರಾಟ ಹಮ್ಮಿಕೊಂಡಿವೆ. ದೇಶದ ವಿವಿಧ ಭಾಗಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರತಿಕೃತಿ ಸುಡಲು ಮುಂದಾಗಿವೆ.

ಹಿಂದಿನ ಸಭೆಗಳಲ್ಲಿ ಕೇಂದ್ರ ಸಚಿವರು ಕೃಷಿ ಕಾನೂನುಗಳಲ್ಲಿನ ಭಿನ್ನಾಭಿಪ್ರಾಯಗಳನ್ನು ವಿಂಗಡಿಸಿ ಚರ್ಚಿಸಲು ಸಮಿತಿಯೊಂದನ್ನು ರಚಿಸುವ ಪ್ರಸ್ತಾಪವನ್ನು ಮುಂದಿಟ್ಟರು. ಜೊತೆಗೆ ಕನಿಷ್ಠ ಬೆಂಬಲ ಬೆಲೆ ಪದ್ದತಿ ಮುಂದುವರೆಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಆದರೆ ಈ ಪ್ರಸ್ತಾಪಗಳಿಗೆ ಒಪ್ಪದ ರೈತ ಮುಖಂಡರು ಕೇಂದ್ರ ಸರ್ಕಾರ ಇತ್ತೀಚೆಗೆ ತಂದಿರುವ ಮೂರು ವಿವಾದಾತ್ಮಕ ಮಸೂದೆಗಳನ್ನು ಹಿಂಪಡೆಯಲೇಬೇಕು. ರೈತರ ಎಲ್ಲಾ ಉತ್ಪನ್ನಗಳಿಗೂ ಕನಿಷ್ಠ ಬೆಂಬಲ ಬೆಲೆ ಕೊಡಬೇಕು. ಜೊತೆಗೆ ರೈತರಿಗೆ ಮಾರಕವಾಗಿರುವ ವಿದ್ಯುತ್ ಕಾನೂನನ್ನು ವಾಪಸ್ ಪಡೆಯಲೇಬೇಕು ಎಂದು ಒತ್ತಾಯಿಸಿದರು.

Karnataka Bandh LIVE: ಇಂದು ಕರ್ನಾಟಕ ಬಂದ್: ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಮೇಲೆ ಕಲ್ಲು ತೂರಾಟ

ಕೇಂದ್ರ ಸರ್ಕಾರ ತಮ್ಮ ಬೇಡಿಕೆಗಳನ್ನು ‌ಈಡೇರಿಸದಿದ್ದರೆ ದೆಹಲಿಯ ಎಲ್ಲಾ ಗಡಿಗಳ ರಸ್ತೆಗಳನ್ನು ಬಂದ್ ಮಾಡುತ್ತೇವೆ ಎಂದು ರೈತರು ಎಚ್ಚರಿಸಿದ್ದರು. ಇದರಿಂದ ಬೆಚ್ಚಿದ ಕೇಂದ್ರ ಸರ್ಕಾರ ಪ್ರತಿಭಟನೆ ಕೈಬಿಟ್ಟು ಮಾತುಕತೆಗೆ ಬನ್ನಿ ಎಂದು ಆಹ್ವಾನಿಸಿತ್ತು. ಮೊದಲಿಗೆ ಈಗಾಗಲೇ ಮಾತುಕತೆ ನಡೆದು ತಮ್ಮ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರ ಸಿದ್ದವಿಲ್ಲ ಎಂದು ರೈತ ಪ್ರತಿನಿಧಿಗಳು ಸಭೆಗೆ ಒಪ್ಪಿರಲಿಲ್ಲ. ಕಡೆಗೆ ಪ್ರತಿಭಟನೆ ನಡೆಸುತ್ತಲೇ ಸಭೆಯಲ್ಲಿ ಪಾಲ್ಗೊಂಡಿದ್ದರು. ಆದರೆ ಆ ಸಭೆಗಳೂ ವಿಫಲವಾಗಿರುವುದರಿಂದ ಇಂದು ಇನ್ನೊಂದು ಸಭೆ ಕರೆಯಲಾಗಿದೆ.

ದೇಶದ ವಿವಿಧ ಮೂಲೆಗಳಿಂದ ದೆಹಲಿಯತ್ತ ಧಾವಿಸಿದ್ದ ರೈತರು ನವೆಂಬರ್ 26ರಂದುದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ಪ್ರತಿಭಟನೆಗೆ ಮೊದಲು ಒಪ್ಪಿಗೆ ನೀಡಿದ್ದ ಪೊಲೀಸರು ನಂತರ ಪ್ರತಿಭಟನೆ ಹತ್ತಿಕ್ಕಲೆಂದೇ ಕೊರೋನಾ ಕಾರಣವೊಡ್ಡಿ ಒಪ್ಪಿಗೆಯನ್ನು ಹಿಂಪಡೆದರು. ಇದಲ್ಲದೆ ರೈತರು ದೆಹಲಿಯನ್ನು ಪ್ರವೇಶಿಸದಂತೆ ಗಡಿಯಲ್ಲೇ ತಡೆದರು. ಸದ್ಯ ದೆಹಲಿಯ ಗಡಿಯಲ್ಲಿರುವ ರೈತರು ತಾವಿದ್ದ ಸ್ಥಳಗಳಲ್ಲೇ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ದೇಶದ ಬೇರೆಡೆಯಲ್ಲೂ ಪ್ರತಿಭಟನೆ ನಡೆಸುವಂತೆ ಕರೆಕೊಟ್ಟಿದ್ದಾರೆ.
ದೇಶದ ಬೇರೆ ಬೇರೆ ಭಾಗಗಳಿಂದ ರೈತರು ಸಾಂಕೇತಿಕವಾಗಿ ಭಾಗವಹಿಸಿದ್ದರೆ, ದೆಹಲಿಗೆ ಸಮೀಪ ಇರುವ ಹರಿಯಾಣ, ರಾಜಸ್ಥಾನ, ಪಂಜಾಬ್ ಮತ್ತು ಉತ್ತರ ಪ್ರದೇಶಗಳಿಂದ‌ ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದಾರೆ. ಈ‌ ಹಿನ್ನೆಲೆಯಲ್ಲಿ ದೆಹಲಿ‌ ಪೊಲೀಸರು ಹರಿಯಾಣ, ರಾಜಸ್ಥಾನ, ಪಂಜಾಬ್ ಮತ್ತು ಉತ್ತರ ಪ್ರದೇಶಗಳಿಂದ‌ ಬರುವ ರಸ್ತೆಗಳಲ್ಲಿ ರೈತರನ್ನು ತಡೆದಿದ್ದಾರೆ. ಇಂದಿನ ಸಭೆ ವಿಫಲವಾದರೆ ಡಿಸೆಂಬರ್ 8ರಂದು ಭಾರತ್ ಬಂದ್ ನಡೆಸುವ ಸಾಧ್ಯತೆ ಇದೆ. ಈಗಾಗಲೇ ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆನೀಡಿವೆ.
Published by: Latha CG
First published: December 5, 2020, 8:35 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories