HOME » NEWS » National-international » FARMERS PROTEST ONE MONTH TO FARMERS PROTEST WHICH HAS CONTINUE IN DELHI BORDER DBDEL LG

Farmers Protest: ದೆಹಲಿ ಗಡಿಯಲ್ಲಿ ತಿಂಗಳು ಪೂರೈಸಿದ ರೈತರ ಅನಿರ್ದಾಷ್ಟವಧಿ ಧರಣಿ

ಡಿಸೆಂಬರ್ 25ರಿಂದ ಹರಿಯಾಣದ ಎಲ್ಲಾ ಟೋಲ್ ಗಳಲ್ಲಿ ಶುಲ್ಕ ಸಂಗ್ರಹಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಸಾರ್ವಜನಿಕರ ಸಂಚಾರಕ್ಕೆ ತೊಂದರೆಯೂ ಆಗದಂತೆ, ಸರ್ಕಾರಕ್ಕೆ ಶುಲ್ಕ ಸಿಗಬಾರದಂತೆ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸುತ್ತಿದ್ದಾರೆ.

news18-kannada
Updated:December 26, 2020, 9:47 AM IST
Farmers Protest: ದೆಹಲಿ ಗಡಿಯಲ್ಲಿ ತಿಂಗಳು ಪೂರೈಸಿದ ರೈತರ ಅನಿರ್ದಾಷ್ಟವಧಿ ಧರಣಿ
ಸಾಂದರ್ಭಿಕ ಚಿತ್ರ
  • Share this:
ನವದೆಹಲಿ(ಡಿ. 26): ಕೇಂದ್ರ ಸರ್ಕಾರ ಇತ್ತೀಚೆಗೆ ತಂದಿರುವ ರೈತ ವಿರೋಧಿ ಮೂರು ಕೃಷಿ ಕಾನೂನುಗಳನ್ನು ರದ್ದು ಮಾಡಬೇಕೆಂದು ಆಗ್ರಹಿಸಿ ಕಳೆದ ನವೆಂಬರ್ 26ರಿಂದ ದೆಹಲಿಯ ಗಡಿಗಳಲ್ಲಿ ರೈತರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಇಂದು ಒಂದು ತಿಂಗಳನ್ನು ಪೂರೈಸಿದೆ. ಈ ನಡುವೆ ರೈತ ಸಂಘಟನೆಗಳ ಪ್ರತಿನಿಧಿಗಳು ಮತ್ತು ಕೇಂದ್ರ ಸರ್ಕಾರದ ನಡುವೆ 5 ಸಭೆಗಳಾಗಿವೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಒಮ್ಮೆ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಅನೌಪಚಾರಿಕ ಮಾತುಕತೆ ನಡೆಸಿದ್ದಾರೆ. ಅವೆಲ್ಲವೂ ವಿಫಲವಾಗಿದ್ದು ರೈತರು ಅನಿರ್ದಿಷ್ಟಾವಧಿ ಪ್ರತಿಭಟನೆ ಮುಂದುವರೆಸುತ್ತಿದ್ದಾರೆ.

ನವೆಂಬರ್ 26ರಿಂದಲೂ ಶಾಂತಯುತವಾಗಿ ಪ್ರತಿಭಟನೆ ನಡೆಸುತ್ತಿರುವ ರೈತರು ಡಿಸೆಂಬರ್ 8ರಂದು 'ಭಾರತ್ ಬಂದ್'ಗೆ ಕರೆ ಕೊಟ್ಟಿದ್ದರು. ಡಿಸೆಂಬರ್ 12ರಂದು ರೈತರು ಪಂಜಾಬ್, ಹರಿಯಾಣ ಮತ್ತಿತರ ಕಡೆ ಟೋಲ್ ಪ್ಲಾಜಾಗಳನ್ನು ಬಂದ್ ಮಾಡಿ ಮುಷ್ಕರ ನಡೆಸಿದ್ದರು. ಮೊದಲಿಗೆ ಪಂಜಾಬ್, ಹರಿಯಾಣಗಳಿಂದ ದೆಹಲಿಗೆ ಬರುವ ರಸ್ತೆಗಳನ್ನು ತಡೆದಿದ್ದ ರೈತರು ಬಳಿಕ ಉತ್ತರ ಪ್ರದೇಶ ಹಾಗೂ ರಾಜಸ್ಥಾನಗಳಿಂದ ದೆಹಲಿಗೆ ಬರುವ ದೆಹಲಿ-ಜೈಪುರ್ ರಸ್ತೆಯನ್ನೂ ಬಂದ್ ಮಾಡಿದ್ದರು.

ಡಿಸೆಂಬರ್ 14ರಂದು ಒಂದು ದಿನದ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು. ಡಿಸೆಂಬರ್ 21ರಿಂದ ರಿಲೇ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಅಂದರೆ 11 ಜನ ರೈತರ ತಂಡ 24 ಗಂಟೆ ಉಪವಾಸ ಇರುವುದು ಇದಾದ ಮೇಲೆ ಮತ್ತೆ 11 ಜನ ರೈತರ ತಂಡ 24 ಗಂಟೆ ಉಪವಾಸ ಇರುವುದಾಗಿದೆ. ಡಿಸೆಂಬರ್ 25ರಿಂದ ಹರಿಯಾಣದ ಎಲ್ಲಾ ಟೋಲ್ ಗಳಲ್ಲಿ ಶುಲ್ಕ ಸಂಗ್ರಹಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಸಾರ್ವಜನಿಕರ ಸಂಚಾರಕ್ಕೆ ತೊಂದರೆಯೂ ಆಗದಂತೆ, ಸರ್ಕಾರಕ್ಕೆ ಶುಲ್ಕ ಸಿಗಬಾರದಂತೆ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸುತ್ತಿದ್ದಾರೆ.

2024ಕ್ಕೆ ಸ್ವಯಂಚಾಲಿತ ಎಲೆಕ್ಟ್ರಿಕ್​ ಕಾರು ಪರಿಚಯಿಸಲಿದೆ ಆ್ಯಪಲ್​ ಸಂಸ್ಥೆ?

ಕೇಂದ್ರ ಸರ್ಕಾರ ಕೃಷಿ ಕಾನೂನುಗಳಲ್ಲಿನ ಭಿನ್ನಾಭಿಪ್ರಾಯಗಳನ್ನು ವಿಂಗಡಿಸಿ ಚರ್ಚಿಸಲು ಸಮಿತಿಯೊಂದನ್ನು ರಚಿಸುವ ಪ್ರಸ್ತಾಪವನ್ನು ಮುಂದಿಟ್ಟಿದ್ದಾರೆ. ಜೊತೆಗೆ ಕನಿಷ್ಠ ಬೆಂಬಲ ಬೆಲೆ ಪದ್ದತಿ ಮುಂದುವರೆಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಆದರೆ ಈ ಪ್ರಸ್ತಾಪಗಳಿಗೆ ಒಪ್ಪದ ರೈತ ಮುಖಂಡರು ಕೇಂದ್ರ ಸರ್ಕಾರ ಇತ್ತೀಚೆಗೆ ತಂದಿರುವ ಮೂರು ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂಪಡೆಯಲೇಬೇಕು. ರೈತರ ಎಲ್ಲಾ ಉತ್ಪನ್ನಗಳಿಗೂ ಕನಿಷ್ಠ ಬೆಂಬಲ ಬೆಲೆ ಕೊಡಬೇಕು. ಜೊತೆಗೆ ರೈತರಿಗೆ ಮಾರಕವಾಗಿರುವ ವಿದ್ಯುತ್ ಕಾನೂನನ್ನು ವಾಪಸ್ ಪಡೆಯಲೇಬೇಕು ಎಂದು ಒತ್ತಾಯಿಸಿದ್ದಾರೆ.

ಹೀಗೆ ಪರಸ್ಪರ ಒಮ್ಮತ ಮೂಡದೇ ಸಮಸ್ಯೆ ಸಮಸ್ಯೆಯಾಗಿಯೇ ಉಳಿದಿದೆ. ಅಧಿಕೃತವಾಗಿ ಹಾಗೂ ಅನೌಪಚಾರಿಕವಾಗಿ ನಡೆಸಿದ ಮಾತುಕತೆಗಳು ವಿಫಲವಾಗಿವೆ. ರೈತರು ದೆಹಲಿ ಚಲೊ, ಹೆದ್ದಾರಿ ತಡೆ, ಟೋಲ್ ಫ್ಲಾಜಾಗಳ ಬಂದ್, ಬಿಜೆಪಿ ನಾಯಕರ ಮನೆ ಮುಂದೆ ಮುಷ್ಕರ, ಭಾರತ್ ಬಂದ್, ಉಪವಾಸ ಸತ್ಯಾಗ್ರಹಗಳೆಲ್ಲವನ್ನೂ ಶಾಂತವಾಗಿ ನಡೆಸಿದ್ದರೂ ಕೇಂದ್ರ ಸರ್ಕಾರ ತನ್ನ ಹಠಮಾರಿತನದಿಂದ ಹಿಂದೆ ಸರಿದಿಲ್ಲ. ಹಾಗಾಗಿ ಮುಂದೇನಾಗುತ್ತದೆ ಎನ್ನುವುದನ್ನು ಈಗಲೇ ಹೇಳಲು‌ ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
Youtube Video
ದೇಶದ ವಿವಿಧ ಮೂಲೆಗಳಿಂದ ದೆಹಲಿಯತ್ತ ಧಾವಿಸಿದ್ದ ರೈತರು ನವೆಂಬರ್ 26ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ಪ್ರತಿಭಟನೆಗೆ ಮೊದಲು ಒಪ್ಪಿಗೆ ನೀಡಿದ್ದ ಕೇಂದ್ರ ಸರ್ಕಾರ ನಂತರ ಪ್ರತಿಭಟನೆ ಹತ್ತಿಕ್ಕಲೆಂದೇ ಕೊರೋನಾ ಕಾರಣವೊಡ್ಡಿ ಒಪ್ಪಿಗೆಯನ್ನು ಹಿಂಪಡೆದಿತ್ತು. ರೈತರು ದೆಹಲಿಯನ್ನು ಪ್ರವೇಶಿಸದಂತೆ ಗಡಿಯಲ್ಲೇ ತಡೆದಿತ್ತು. ಆದುದರಿಂದ ಸದ್ಯ ದೆಹಲಿಯ ಗಡಿಗಳಲ್ಲೇ ಇರುವ ರೈತರು ಅಲ್ಲೇ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ.
Published by: Latha CG
First published: December 26, 2020, 9:47 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories