ಲಖನೌ (ಜುಲೈ 08); ಬಿಜೆಪಿ ಪಕ್ಷದ ಹಿರಿಯ ನಾಯಕ, ಉತ್ತರಪ್ರದೇಶದ ಮಾಜಿ ಸಿಎಂ ಹಾಗೂ ರಾಜಸ್ತಾನದಲ್ಲೂ ರಾಜ್ಯಪಾಲರಾಗಿ ಹಲವು ವರ್ಷ ಸೇವೆ ಸಲ್ಲಿಸಿದ್ದ ರಾಜಕೀಯ ಮುತ್ಸದ್ದಿ ಕಲ್ಯಾಣ್ ಸಿಂಗ್ ಅನಾರೋಗ್ಯದ ಕಾರಣದಿಂದಾಗಿ ಇಂದು ಲಖನೌನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ ಎಂದು ವರದಿಯಾಗಿದೆ. ಕಳೆದ ಹಲವು ದಿನಗಳಿಂದಲೂ ಕಲ್ಯಾಣ್ ಸಿಂಗ್ ವಯೋ ಸಹಜ ಖಾಯಿಲೆಗಳಿಗೆ ತುತ್ತಾಗಿ, ಅನಾರೋಗ್ಯದಿಂದ ಬಳಲಿದ್ದರು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಗುರುವಾರ ಆಸ್ಪತ್ರೆಗೆ ತೆರಳಿ ಅವರ ಯೋಗಕ್ಷೇಮ ವಿಚಾರಿಸಿದ್ದರು. ಆದರೆ, ಬಿಜೆಪಿ ನಾಯಕರು ಆಸ್ಪತ್ರೆಗೆ ಭೇಟಿ ನೀಡಿದ ಮರು ದಿನವೇ ಕಲ್ಯಾಣ್ ಸಿಂಗ್ ಕೊನೆ ಉಸಿರೆಳೆದಿದ್ದಾರೆ.
ಕಲ್ಯಾಣ್ ಸಿಂಗ್ ಎರಡು ವಾರಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಪಿಜಿಐ ಲಖನೌದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸಿಂಗ್ ಅವರನ್ನು ಮೊದಲು ರಾಜ್ಯ ರಾಜಧಾನಿಯ ಆರ್ಎಮ್ಎಲ್ ಇನ್ಸ್ಟಿಟ್ಯೂಟ್ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ನಂತರ ಅವರನ್ನು ಪಿಜಿಐಗೆ ವರ್ಗಾಯಿಸಲಾಯಿತು. ಇತ್ತೀಚೆಗೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ಮಾಜಿ ಸಿಎಂ ಕಲ್ಯಾಣ್ ಸಿಂಗ್ ಅವರ ಆರೋಗ್ಯದ ಬಗ್ಗೆ ದೂರವಾಣಿ ಕರೆ ಮಾಡಿ ವಿಚಾರಿಸಿದ್ದರು. ಸಿಎಂ ಯೋಗಿ ಆದಿತ್ಯನಾಥ್ ಕೂಡ ಅವರನ್ನು ಆಸ್ಪತ್ರೆಯಲ್ಲಿ ಹಲವು ಬಾರಿ ಭೇಟಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಗುರುವಾರ ಸಂಜೆ ಕಲ್ಯಾಣ್ ಸಿಂಗ್ ಅವರನ್ನು ಭೇಟಿಯಾದ ನಂತರ ಮಾತನಾಡಿದ್ದ ಜೆಪಿ ನಡ್ಡಾ, "ಇಂದು ನಾನು ಲಖನೌದ ಎಸ್‌ಜಿಪಿಜಿಐ ಆಸ್ಪತ್ರೆಗೆ ಹೋಗಿ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಜಿ ಅವರನ್ನು ಭೇಟಿ ಮಾಡಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದೆ. ಅವರ ತ್ವರಿತ ಚೇತರಿಕೆಗಾಗಿ ನಾನು ದೇವರನ್ನು ಪ್ರಾರ್ಥಿಸುತ್ತೇನೆ" ಎಂದಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಹಿರಿಯ ನಾಯಕ ಮೃತಪಟ್ಟಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ