ಪಶ್ಚಿಮ ಬಂಗಾಳದಲ್ಲಿ ಮತ್ತೆ ದೀದಿ ಸರ್ಕಾರ; 3ನೇ ಬಾರಿ ಮುಖ್ಯಮಂತ್ರಿಯಾಗಿ ಮಮತಾ ಬ್ಯಾನರ್ಜಿ ಪ್ರಮಾಣವಚನ ಸ್ವೀಕಾರ

Mamata Banerjee Swearing-in: ಇಂದು ಮಮತಾ ಬ್ಯಾನರ್ಜಿ 3ನೇ ಬಾರಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಮಮತಾ ಬ್ಯಾನರ್ಜಿ ಪ್ರಮಾಣವಚನ ಸ್ವೀಕಾರ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಮಮತಾ ಬ್ಯಾನರ್ಜಿ ಪ್ರಮಾಣವಚನ ಸ್ವೀಕಾರ

  • Share this:
ಕೊಲ್ಕತ್ತಾ (ಮೇ 5): ಪಶ್ಚಿಮ ಬಂಗಾಳದಲ್ಲಿ ಕೇಸರಿ ಧ್ವಜ ಹಾರಿಸಬೇಕೆಂಬ ಬಿಜೆಪಿಯ ಕನಸು ಕೊನೆಗೂ ಭಗ್ನವಾಗಿದ್ದು, ಬಂಗಾಳದಲ್ಲಿ ಮತ್ತೊಮ್ಮೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಜಯ ಪತಾಕೆ ಹಾರಿಸಿದೆ. ಮಮತಾ ಬ್ಯಾನರ್ಜಿ ಸ್ವ ಕ್ಷೇತ್ರದಲ್ಲಿ ಸೋಲನ್ನು ಅನುಭವಿಸಿದ್ದರೂ ಪಶ್ಚಿಮ ಬಂಗಾಳದಲ್ಲಿ ತಮ್ಮ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು ಮಮತಾ ಬ್ಯಾನರ್ಜಿ 3ನೇ ಬಾರಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಬೆಂಗಾಲಿ ಭಾಷೆಯಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿರುವ ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳದಲ್ಲಿ ಕೋವಿಡ್-19 ಬಿಕ್ಕಟ್ಟನ್ನು ನಿಯಂತ್ರಣ ಮಾಡುವುದೇ ತಮ್ಮ ಮೊದಲ ಗುರಿ ಎಂದಿದ್ದಾರೆ. ರಾಜ್ಯದಲ್ಲಿ ಕೊರೋನಾ ಬಿಕ್ಕಟ್ಟನ್ನು ಬಗೆಹರಿಸುವ ಬಗ್ಗೆ ಯಾವ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂಬ ಬಗ್ಗೆ ಇಂದು ಸಭೆ ನಡೆಸಿ, ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ. ಕೋವಿಡ್ ನಿಯಂತ್ರಣಕ್ಕೆ ನಾವು ಯಾವ ಕ್ರಮಗಳನ್ನು ಕೈಗೊಳ್ಳಲಿದ್ದೇವೆ ಎಂಬ ಬಗ್ಗೆ ಇಂದು ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಠಿ ಕರೆದು, ಮಾಹಿತಿ ನೀಡುತ್ತೇವೆ ಎಂದಿದ್ದಾರೆ.ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಫಲಿತಾಂಶದ ಬಳಿಕ ಗಲಭೆಗಳು ಹೆಚ್ಚಾಗಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ನನ್ನ ಎರಡನೇ ಗುರಿಯಾಗಿದೆ. ಇಲ್ಲಿನ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ವಿಶೇಷ ಅಧಿಕಾರಿಗಳನ್ನು ನೇಮಕ ಮಾಡುತ್ತೇನೆ. ಬಂಗಾಳದ ಹಿಂಸಾಚಾರದಲ್ಲಿ ಅನೇಕ ಅಮಾಯಕ ಜೀವಗಳು ಬಲಿಯಾಗಿವೆ. ಇದು ಬೇಸರದ ಸಂಗತಿ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿಷಆದ ವ್ಯಕ್ತಪಡಿಸಿದ್ದಾರೆ.ಕೊರೋನಾ ಅಟ್ಟಹಾಸ ಹೆಚ್ಚಾಗುತ್ತಿರುವುದರಿಂದ ಕೋವಿಡ್ ನಿಯಮಗಳನ್ನು ಗಮನದಲ್ಲಿಟ್ಟುಕೊಂಡು ಸರಳವಾಗಿ ಮಮತಾ ಬ್ಯಾನರ್ಜಿ ರಾಜಭವನದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ರಾಜ್ಯಪಾಲ ಜಗದೀಪ್ ಧನಕರ್ ಪ್ರಮಾಣವಚನ ಬೋಧಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಫಲಿತಾಂಶದ ಬಳಿಕ ಟಿಎಂಸಿ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಭೆ ನಡೆದು, 11 ಜನರು ಸಾವನ್ನಪ್ಪಿದ್ದರು. ಅನೇಕರು ಗಾಯಗೊಂಡಿದ್ದು, ಹಲವು ಮನೆಗಳು, ಅಂಗಡಿಗಳು ಧ್ವಂಸವಾಗಿದ್ದವು. ಬಂಗಾಳದಲ್ಲಿ ಹಿಂಸಾಚಾರ ಹೆಚ್ಚಾಗುತ್ತಿದ್ದಂತೆ ಕೇಂದ್ರ ಗೃಹ ಸಚಿವಾಲಯ ಈ ಘಟನೆ ಬಗ್ಗೆ ವರದಿ ನೀಡುವಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಆದೇಶಿಸಿತ್ತು.

ಭಾನುವಾರ ಪಶ್ಚಿಮ ಬಂಗಾಳದ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, 292 ಸ್ಥಾನಗಳ ಪೈಕಿ 213 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಟಿಎಂಸಿ ಮತ್ತೊಮ್ಮೆ ದಿಗ್ವಿಜಯ ಸಾಧಿಸಿದೆ. ಬಿಜೆಪಿ ಕೇವಲ 77 ಸ್ಥಾನಗಳಲ್ಲಿ ಗೆಲುವು ಕಂಡು ಹೀನಾಯ ಸೋಲು ಅನುಭವಿಸಿದೆ.
Published by:Sushma Chakre
First published: