Mekedatu Project: ನಾಳೆ ಕೇಂದ್ರ ಜಲಸಂಪನ್ಮೂಲ ಸಚಿವರ ಭೇಟಿ ಮಾಡಲಿರುವ ತಮಿಳುನಾಡು ಸರ್ವಪಕ್ಷ ನಿಯೋಗ

ತಮಿಳುನಾಡಿನ ಜಲ ಸಂಪನ್ಮೂಲ ಸಚಿವ ದೊರೈ ಮುರುಗನ್ ನೇತೃತ್ವದಲ್ಲಿ ನಾಳೆ ಕೇಂದ್ರ ಜಲ ಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ಮೇಕೆದಾಟು ಬಳಿ ಅಣೆಕಟ್ಟು ನಿರ್ಮಾಣಕ್ಕೆ ‌ಒಪ್ಪಿಗೆ ನೀಡದಂತೆ ಒತ್ತಡ ಹೇರಲಾಗುತ್ತದೆ.

ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್

ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್

  • Share this:
ನವದೆಹಲಿ(ಜು. 15): ಬೆಂಗಳೂರಿನ ಕುಡಿಯುವ ನೀರು ಸರಬರಾಜು ಮಾಡುವ ಸಲುವಾಗಿ ಕರ್ನಾಟಕ ಸರ್ಕಾರ ಮೇಕೆದಾಟು ಯೋಜನೆಯನ್ನು ಆರಂಭಿಸಿತ್ತು. ಈ ಯೋಜನೆ ಬಗ್ಗೆ ತಮಿಳುನಾಡು ಸರ್ಕಾರ ಆರಂಭದಿಂದಲೂ ವಿರೋಧ ವ್ಯಕ್ತಪಡಿಸುತ್ತಿದೆ. ಮೊನ್ನೆ (ಜುಲೈ 12ರಂದು) ಸರ್ವ ಪಕ್ಷಗಳ ಸಭೆ ನಡೆಸಿ ಮೇಕೆದಾಟು ಯೋಜನೆ ವಿರೋಧಿಸಿ 3 ನಿರ್ಣಯ ತೆಗೆದುಕೊಂಡಿದೆ. ಈ ನಿರ್ಣಯಗಳ ಭಾಗವಾಗಿ ನಾಳೆ ತಮಿಳುನಾಡಿನ ಸರ್ವಪಕ್ಷ ನಿಯೋಗವು ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಲಿದೆ.

ಮೊನ್ನೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನೇತೃತ್ವದಲ್ಲಿ ನಡೆದ ಸರ್ವ ಪಕ್ಷಗಳ ಸಭೆಯಲ್ಲಿ ಡಿಎಂಕೆ, ಎಐಎಡಿಎಂಕೆ, ಕಾಂಗ್ರೆಸ್, ಬಿಜೆಪಿ, ಎಡಪಕ್ಷಗಳು ಸೇರಿ ಒಟ್ಟು 13 ಪಕ್ಷಗಳು ಭಾಗವಹಿಸಿದ್ದವು. ಎಲ್ಲಾ ಪಕ್ಷಗಳು ಮೇಕೆದಾಟು ವಿಚಾರದಲ್ಲಿ ತಮಿಳುನಾಡು ಸರ್ಕಾರದ ಪರ ಬೆಂಬಲ ವ್ಯಕ್ತಪಡಿಸಿದವು. ಸರ್ವ ಪಕ್ಷ ಸಭೆಯಲ್ಲಿ ತೆಗೆದುಕೊಂಡ ಮೂರು ನಿರ್ಣಯಗಳು ಈ ರೀತಿ ಇವೆ.

1) ಕರ್ನಾಟಕ ಸರ್ಕಾರ ಮೇಕೆದಾಟು ಬಳಿ ಅಣೆಕಟ್ಟು ನಿರ್ಮಿಸಲು ಮುಂದಾಗುತ್ತಿರುವ ನಿರ್ಧಾರಕ್ಕೆ ವಿರೋಧ ಮಾಡುವುದು.
2) ಸರ್ವ ಪಕ್ಷಗಳ ನಿಯೋಗ ಕೇಂದ್ರ ಜಲ ಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ಅಣೆಕಟ್ಟು ನಿರ್ಮಾಣಕ್ಕೆ ‌ಒಪ್ಪಿಗೆ ನೀಡದಂತೆ ಒತ್ತಡ ಹೇರುವುದು.
3) ಒಕ್ಕೂಟ ಸರ್ಕಾರದ ಮೇಲೆ ಒತ್ತಡ ಹೇರುವುದರ ಜೊತೆಗೆ ಯೋಜನೆಗೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದಲ್ಲಿ ಕಾನೂನು ಹೋರಾಟ ಮಾಡುವುದು.

ಇದನ್ನೂ ಓದಿ: Karnataka SSLC Exam: ಫೀಸ್ ಕಟ್ಟದಿದ್ರೂ ಹಾಲ್ ಟಿಕೆಟ್ ಕೊಡಲೇಬೇಕು; ಶಿಕ್ಷಣ ಸಚಿವ ಸುರೇಶ್ ಕುಮಾರ್

ಈ ನಿರ್ಣಯಗಳ ಪ್ರಕಾರ ತಮಿಳುನಾಡಿನ ಜಲ ಸಂಪನ್ಮೂಲ ಸಚಿವ ದೊರೈ ಮುರುಗನ್ ನೇತೃತ್ವದಲ್ಲಿ ನಾಳೆ ಕೇಂದ್ರ ಜಲ ಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ಮೇಕೆದಾಟು ಬಳಿ ಅಣೆಕಟ್ಟು ನಿರ್ಮಾಣಕ್ಕೆ ‌ಒಪ್ಪಿಗೆ ನೀಡದಂತೆ ಒತ್ತಡ ಹೇರಲಾಗುತ್ತದೆ. ಸಚಿವ ದೊರೈ ಮುರುಗನ್ ಅವರು ಈಗಾಗಲೇ ಜುಲೈ 7ರಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ಮೇಕೆದಾಟು ಯೋಜನೆಯನ್ನು ತಡೆಯುವಂತೆ ಮನವಿ ಸಲ್ಲಿಸಿದ್ದರು.

ಭೇಟಿ ವೇಳೆ "ಯೋಜನೆ ಬಗೆಗಿನ ವ್ಯಾಜ್ಯ ಸುಪ್ರೀಂ ಕೋರ್ಟಿನಲ್ಲಿ ವಿಚಾರಣೆ ನಡೆಯುತ್ತಿದೆ. ಸುಪ್ರೀಂ ಕೋರ್ಟ್ ತೀರ್ಪು ನೀಡುವರೆಗೆ ಯೋಜನೆಗೆ ಅನುಮತಿ ಕೊಡಬೇಡಿ. ಕರ್ನಾಟಕ ತರಾತುರಿಯಲ್ಲಿ ಯೋಜನೆ ಆರಂಭಿಸುತ್ತಿದೆ. ಈ ಯೋಜನೆ ಆರಂಭವಾದರೆ ಎರಡೂ ರಾಜ್ಯಗಳ ಗಡಿಯಲ್ಲಿ ಮತ್ತೆ ಸಮಸ್ಯೆ ಉಲ್ಬಣವಾಗುತ್ತದೆ. ತಮಿಳುನಾಡಿನ ರೈತರಿಗೆ ಅನ್ಯಾಯವಾಗಲಿದೆ" ಎಂದು ದೂರು ನೀಡಿದ್ದರು. ಈಗ ಸರ್ವಪಕ್ಷ ನಿಯೋಗದ ಮೂಲಕ ಒತ್ತಡ ಹೇರಲಾಗುತ್ತಿದೆ.

ಇದನ್ನೂ ಓದಿ:Gold Price Today: ಸತತ ಏರಿಕೆ ಕಂಡ ಚಿನ್ನದ ಬೆಲೆ; ಇಂದಿನ ದರವೆಷ್ಟು? ಇಲ್ಲಿದೆ ಸಂಪೂರ್ಣ ಮಾಹಿತಿ

ಅಸಲಿಗೆ ಅಂತರ ರಾಜ್ಯ ಜಲ ವಿವಾದಗಳು ನ್ಯಾಯಾಲಯ ಹೇಳಿದಾಗಲೂ ಮಾತುಕತೆ ಮೂಲಕ ಬಗೆಹರಿದ ಉದಾಹರಣೆಗಳಿಲ್ಲ. ಅದರಲ್ಲೂ ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಶತಕಗಳಿಂದಲೂ ನಡೆದುಕೊಂಡು ಬರುತ್ತಿರುವ ಕಾವೇರಿ ಜಲ ವಿವಾದ ಅತ್ಯಂತ ಸೂಕ್ಷ್ಮವಾದುದಾಗಿದೆ. ಇದನ್ನು ಸೂಕ್ಷ್ಮವಾಗಿ ಗಮನಿಸದೆ ಮುಖ್ಯಮಂತ್ರಿ ಯಡಿಯೂರಪ್ಪ ತಮಿಳುನಾಡಿನ ನೂತನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ಪತ್ರ ಬರೆದು ಯಡವಟ್ಟು ಮಾಡಿಕೊಂಡಿದ್ದಾರೆ.

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
Published by:Latha CG
First published: