ನವದೆಹಲಿ (ಜನವರಿ 22): ಕಾಶ್ಮೀರದ ಬಿಕ್ಕಟ್ಟು ಭಾರತ-ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ವಿಚಾರವಾಗಿದ್ದು ಇದರಲ್ಲಿ ಯಾವುದೇ ಮೂರನೇ ದೇಶದ ಅಥವಾ ಶಕ್ತಿಯ ಹಸ್ತಕ್ಷೇಪದ ಪ್ರಶ್ನೆಯೇ ಇಲ್ಲ. ಇದು ದೆಹಲಿ ಸರ್ಕಾರದ ದೀರ್ಘ ಕಾಲದ ನಿಲುವು ಎಂದು ಕೇಂದ್ರ ಸರ್ಕಾರದ ಮೂಲಗಳು ಸ್ಪಷ್ಟಪಡಿಸಿವೆ.
ನಿನ್ನೆ ದಾವೋಸ್ನಲ್ಲಿ ನಡೆದ ಅಂತಾರಾಷ್ಟ್ರೀಯ ಆರ್ಥಿಕ ಶೃಂಗಸಭೆಯಲ್ಲಿ ವಿಶೇಷ ಭಾಷಣದ ವೇಳೆ ಕಾಶ್ಮೀರದ ಬಿಕ್ಕಟ್ಟನ್ನು ಉಲ್ಲೇಖಿಸಿ ಮಾತನಾಡಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, “ಕಾಶ್ಮೀರಕ್ಕೆ ಸಂಬಂಧಿಸಿದ ವಿಚಾರವನ್ನು ಅಮೆರಿಕ ಬಹಳ ಸೂಕ್ಷ್ಮವಾಗಿ ಗಮನಿಸುತ್ತಿದೆ. ಅಲ್ಲದೆ, ಭಾರತ ಮತ್ತು ಪಾಕಿಸ್ತಾನ ಇಚ್ಛಿಸುವುದಾದರೆ ಕಾಶ್ಮೀರದ ಬಿಕ್ಕಟ್ಟನ್ನು ಬಗೆಹರಿಸಲು ಅಮೆರಿಕ ಸಹಾಯ ಮಾಡುತ್ತದೆ” ಎಂದು ಅಭಯ ನೀಡಿದ್ದರು.
ಆದರೆ, ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೀಗೊಂದು ಆಫರ್ ನೀಡಿದ ಬೆನ್ನಿಗೆ ಭಾರತ ಸರ್ಕಾರದ ವಿದೇಶಾಂಗ ಸಚಿವಾಲಯ "ಕಾಶ್ಮೀರದ ವಿಚಾರದಲ್ಲಿ ಅಮೆರಿಕದ ಸಹಾಯಹಸ್ತದ ಅವಶ್ಯಕತೆ ಭಾರತಕ್ಕೆ ಇಲ್ಲ" ಎಂದು ತಿಳಿಸುವ ಮೂಲಕ ಡೊನಾಲ್ಡ್ ಟ್ರಂಪ್ ಆಫರ್ ಅನ್ನು ಸಾರಾಸಗಟಾಗಿ ತಿರಸ್ಕರಿಸಿದೆ.
ಕಣಿವೆ ರಾಜ್ಯ ಜಮ್ಮು-ಕಾಶ್ಮೀರಕ್ಕೆ ಭಾರತ ಸರ್ಕಾರ ನೀಡುತ್ತಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿ ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿದ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿತ್ತು. ಈ ವೇಳೆ ಕಾಶ್ಮೀರದ ವಿಚಾರದಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ತಾನು ಮಧ್ಯಸ್ಥಿಕೆ ವಹಿಸಲು ಸಿದ್ದ ಎಂದು ಅಮೆರಿಕ ಹೇಳುತ್ತಿರುವುದು ಕಳೆದ ನಾಲ್ಕು ತಿಂಗಳ ಅವಧಿಯಲ್ಲಿ ಇದು 5ನೇ ಬಾರಿ ಎಂಬುದು ಉಲ್ಲೇಖಾರ್ಹ.
ಆದರೆ, ಈ ವಿಚಾರದಲ್ಲಿ ಯಾವುದೇ ಮೂರನೇ ಶಕ್ತಿಯ ಹಸ್ತಕ್ಷೇಪಕ್ಕೆ ಭಾರತ ಅವಕಾಶ ನೀಡುವುದಿಲ್ಲ ಎಂದು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಈ ಹಿಂದೆಯೇ ಸ್ಪಷ್ಟವಾಗಿ ತಿಳಿಸಿತ್ತು. ಫೆಬ್ರವರಿ ಎರಡನೇ ವಾರದಲ್ಲಿ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಆಗಮಿಸುವ ಸಾಧ್ಯತೆ ಇದ್ದು, ಕಾಶ್ಮೀರ ಬಿಕ್ಕಟ್ಟಿನ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿಯ ಜೊತೆಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ.
ಇದನ್ನೂ ಓದಿ : ರಂಗೇರಿದ ದೆಹಲಿ ಚುನಾವಣಾ ಕಣ; ರಾಷ್ಟ್ರ ರಾಜಧಾನಿ ಗದ್ದುಗೆಗೆ ಸ್ಟಾರ್ ಪ್ರಚಾರಕರ ಮೊರೆ ಹೋದ ಕಾಂಗ್ರೆಸ್-ಬಿಜೆಪಿ!
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ