ದೆಹಲಿ: ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್ಡಿಎ ಸರ್ಕಾರದಲ್ಲಿ (NDA Government) ಕೇಂದ್ರ ಸಚಿವರಾಗಿ ಜವಾಬ್ದಾರಿ ನಿರ್ವಹಿಸಿದ್ದ ಯಶವಂತ್ ಸಿನ್ಹಾ (Yashwant Sinha) ವಿರೋಧ ಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿಯಾಗಿ (President Candidate) ಕಣಕ್ಕಿಳಿಯಲಿದ್ದಾರೆ. ರಾಷ್ಟ್ರಪತಿ ಚುನಾವಣೆಗೆ ಯಶವಂತ್ ಸಿನ್ಹಾ ಅವರ ಹೆಸರನ್ನು ವಿರೋಧ ಪಕ್ಷದ ಅಭ್ಯರ್ಥಿಯಾಗಿ (Opposition President Candidate) ಇಂದು ಹೆಸರಿಸಲಾಗಿದೆ. ಜುಲೈ ತಿಂಗಳಲ್ಲಿ ನಡೆಯಲಿರುವ ಚುನಾವಣೆಗೆ ಬಿಜೆಪಿ ಇನ್ನೂ ತನ್ನ ಅಭ್ಯರ್ಥಿಯ ಹೆಸರನ್ನು ಪ್ರಕಟಿಸಿಲ್ಲ. ಬಿಜೆಪಿ ಯಾರನ್ನು ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲಿದೆ ಎಂಬುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಸದ್ಯ ಕಾಂಗ್ರೆಸ್ ಸೇರಿ ಎಲ್ಲ ವಿರೋಧ ಪಕ್ಷಗಳೂ ಸಹ ಏಕಮತದಿಂದ ಯಶವಂತ್ ಸಿನ್ಹಾ ಅವರನ್ನು ಕಣಕ್ಕಿಳಿಸಿವೆ.
ಮುಂಬರುವ ರಾಷ್ಟ್ರಪತಿ ಚುನಾವಣೆಯಲ್ಲಿ ನಾವು ಸಾಮಾನ್ಯ ಅಭ್ಯರ್ಥಿಯನ್ನು ಆಯ್ಕೆ ಮಾಡಲು ನಿರ್ಧರಿಸಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ಮಣಿಸಲು ಒಗ್ಗಟ್ಟಾಗಿ ಒಂದೇ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದ್ದೇವೆ. ಇಂದು ನಡೆದ ಸಭೆಯಲ್ಲಿ ನಾವು ಯಶವಂತ್ ಸಿನ್ಹಾ ಅವರನ್ನು ಸಾಮಾನ್ಯ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದೇವೆ. ನಾವು ಎಲ್ಲಾ ರಾಜಕೀಯ ಪಕ್ಷಗಳಿಗೆ ಯಶವಂತ್ ಸಿನ್ಹಾ ಅವರಿಗೆ ಮತ ನೀಡುವಂತೆ ಮನವಿ ಮಾಡುತ್ತೇವೆ ಎಂದು ಕಾಂಗ್ರೆಸ್ನ ಸಂವಹನ ವಿಭಾಗದ ಮುಖ್ಯಸ್ಥ ಜೈರಾಮ್ ರಮೇಶ್ ಹೇಳಿದ್ದಾರೆ.
ಇಂದು ಬಿಜೆಪಿ ಸಂಸದೀಯ ಮಂಡಳಿ ಸಭೆ ಬಿಜೆಪಿಯಲ್ಲಿ ವಿಧಾನಸಭೆಯಿಂದ ಮೇಲಿನ ಎಲ್ಲಾ ಚುನಾವಣೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಪಕ್ಷದ ಸಂಸದೀಯ ಮಂಡಳಿ ಸಭೆ. ಹಾಗಾಗಿ ಇಂದು ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ಉದ್ದೇಶಕ್ಕಾಗಿ ಬಿಜೆಪಿ ಸಂಸದೀಯ ಮಂಡಳಿ ಸಭೆ ಕರೆಯಲಾಗಿದೆ. ಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ ಮತ್ತಿತರ ಸಂಸದೀಯ ಮಂಡಳಿ ಸದಸ್ಯರು ಭಾಗವಹಿಸಲಿದ್ದಾರೆ.
ಇಂದೇ ಆಯ್ಕೆ ಸಾಧ್ಯತೆ!
ಆಡಳಿತಾರೂಢ ಎನ್ ಡಿಎ ಮೈತ್ರಿಕೂಟದ ವತಿಯಿಂದ ಬಿಜೆಪಿಯ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಈಗಾಗಲೇ ನಿರ್ಧಾರವಾಗಿದೆ. ಯಾರು ಅಭ್ಯರ್ಥಿ ಆಗಬೇಕು ಎಂಬುದು ಬಹುತೇಕ ಇಂದೇ ಆಯ್ಕೆ ಆಗುವ ಸಾಧ್ಯತೆ ಇದೆ. ಅಥವಾ ಅಭ್ಯರ್ಥಿಯ ಆಯ್ಕೆ ಮಾಡುವ ಜವಾಬ್ದಾರಿಯನ್ನು ಬಿಜೆಪಿ ಸಂಸದೀಯ ಮಂಡಳಿ ಸಭೆಯು ಪ್ರಧಾನಿ ನರೇಂದ್ರ ಮೋದಿಗೆ ಬಿಡುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿದೆ.
ಇಂದು ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಯಾರೆಂಬುದು ಆಯ್ಕೆಯಾದರೂ ಇಂದು ಘೋಷಣೆ ಆಗುವುದು ಮಾತ್ರ ಅನುಮಾನವಾಗಿದೆ. ಜೂನ್ 24 ಅಥವಾ 25ರಂದು ಬಿಜೆಪಿ ತನ್ನ ಅಭ್ಯರ್ಥಿಯನ್ನು ಘೋಷಿಸಬಹುದು ಎಂದು ಹೇಳಲಾಗುತ್ತಿದೆ.
ಜುಲೈ 26ಕ್ಕೆ ನೂತನ ರಾಷ್ಟ್ರಪತಿ ಅಧಿಕಾರ ಸ್ವೀಕಾರ ದೇಶದ ಅತ್ಯುನ್ನತ ಸ್ಥಾನವಾದ ರಾಷ್ಟ್ರಪತಿ ಪದವಿಗೆ ಆಯ್ಕೆ ಮಾಡುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂನ್ 29 ಕೊನೆಯ ದಿನವಾಗಿದೆ. ಜೂನ್ 30ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜುಲೈ 18ರಂದು ಮತದಾನ ನಡೆಯಲಿದೆ. ಜುಲೈ 21ರಂದು ಫಲಿತಾಂಶ ಪ್ರಕಟವಾಗಲಿದೆ. ಈಗಿನ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24ರಂದು ಕೊನೆಯಾಗಲಿದ್ದು ನೂತನ ರಾಷ್ಟ್ರಪತಿಯಾಗಿ ಆಯ್ಕೆ ಆಗುವವರು ಜುಲೈ 26ಕ್ಕೆ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.
Published by:guruganesh bhat
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ