Mekedatu Project: ಸುಪ್ರೀಂ ಕೋರ್ಟ್‌ನಲ್ಲಿ ಇಂದು ಮೇಕೆದಾಟು ವಿಚಾರಣೆ, ತಮಿಳುನಾಡು ತೀವ್ರ ವಿರೋಧ

ಪ್ರಾಧಿಕಾರದ ಸಭೆಯಲ್ಲಿ ಮೇಕೆದಾಟು ಡಿಪಿಆರ್ ಗೆ ಒಪ್ಪಿಗೆ ನೀಡಲು ತಮಿಳುನಾಡು ಬಲವಾಗಿ ವಿರೋಧಿಸುತ್ತಿರುವುದರಿಂದ ಮತ್ತೀಗ ಸುಪ್ರೀಂ ಕೋರ್ಟ್ ಮೆಟ್ಟಿಲನ್ನೂ ಏರಿರುವುದರಿಂದ ಯೋಜನೆಯ ಕೆಲಸ ಇನ್ನಷ್ಟು ವಿಳಂಬವಾಗುವ ಸಾಧ್ಯತೆ ಇದೆ.

ಮೇಕದಾಟು

ಮೇಕದಾಟು

  • Share this:
ದೆಹಲಿ(ಜು. 26): ಬೆಂಗಳೂರು (Bangalore) ಮಹಾನಗರಕ್ಕೆ ಕುಡಿಯುವ ನೀರನ್ನು ಪೂರೈಸುವ ಮಹತ್ವಾಕಾಂಕ್ಷೆಯ ಮೇಕೆದಾಟು (Mekedatu) ಬಳಿ‌ ಅಣೆಕಟ್ಟು ನಿರ್ಮಿಸುವ ಯೋಜನೆಯ ಕುರಿತು ಸುಪ್ರೀಂ ಕೋರ್ಟಿನಲ್ಲಿ (Supreme Court) ಇರುವ ಮೂಲ ಅರ್ಜಿ ಇತ್ಯರ್ಥ ಆಗುವವರೆಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (Cauvery Water Management Authority) ಸಭೆಯು ಮೇಕೆದಾಟು ವಿಸ್ತ್ರತ ಯೋಜನಾ ವರದಿಗೆ (Detail Project Report) ಒಪ್ಪಿಗೆ ನೀಡಬಾರದೆಂದು ತಮಿಳುನಾಡು ಸರ್ಕಾರ (Tamil Nadu Government) ತಕರಾರು ತೆಗೆದಿದ್ದು ಇಂದು ಸುಪ್ರೀಂ ಕೋರ್ಟ್‌ನಲ್ಲಿ ಈ ಬಗ್ಗೆ ವಿಚಾರಣೆ ನಡೆಯಲಿದೆ.

ಪ್ರಾಧಿಕಾರಕ್ಕೆ ಸುಪ್ರೀಂ ಕೋರ್ಟ್ ನೋಟೀಸ್

ಸುಪ್ರೀಂ ಕೋರ್ಟಿನಲ್ಲಿ ಜುಲೈ 11ರಂದು ವಿಷಯ ಪ್ರಸ್ತಾಪಿಸಿದ ತಮಿಳುನಾಡು ಪರ ವಕೀಲರು ಈ ಹಿಂದೆಯೇ ಮೇಕೆದಾಟು ಯೋಜನೆಗೆ ತಡೆ ನೀಡುವಂತೆ ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಸುಪ್ರೀಂ ಕೋರ್ಟಿನಲ್ಲಿ ಪ್ರಕರಣ ಇತ್ಯರ್ಥ ಆಗದೇ ಇದ್ದರೂ ಕರ್ನಾಟಕ ಮೇಕೆದಾಟು ಯೋಜನೆ ಆರಂಭಿಸಲು ಅವಸರ ಮಾಡುತ್ತಿದೆ. ಯೋಜನೆಯ ಡಿಪಿಆರ್ ಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಒಪ್ಪಿಗೆ ಪಡೆಯಲು ಪ್ರಯತ್ನಿಸಿದೆ.

ಪ್ರಾಧಿಕಾರದ ಸಭೆಯಲ್ಲಿ ಮೇಕೆದಾಟು ಡಿಪಿಆರ್ ಡಿಪಿಆರ್ ಬಗ್ಗೆ ಚರ್ಚಿಸಲು ಅವಕಾಶ ನೀಡಬಾರದು ಎಂದು ಮನವಿ ಮಾಡಿತು. ಜುಲೈ 19ರಂದು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಜುಲೈ 22ರ ಪ್ರಾಧಿಕಾರದ ಸಭೆಯಲ್ಲಿ ಮೇಕೆದಾಟು ಡಿಪಿಆರ್ ಬಗ್ಗೆ ಚರ್ಚಿಸದಂತೆ ಸೂಚಿಸಿತ್ತು. ಅಲ್ಲದೆ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ತಿಳಿಸಿತ್ತು.

ಪ್ರಾಧಿಕಾರದ ಪ್ರತಿಕ್ರಿಯೆ ಆಧರಿಸಿ ವಿಚಾರಣೆ

ಇದಲ್ಲದೆ ನ್ಯಾಯಮೂರ್ತಿ ಎ.ಎಂ ಕಾನ್ವಿಲ್ಕರ್ ನೇತೃತ್ವದ ತ್ರಿಸದಸ್ಯ ಪೀಠವು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ 'ಮೇಕೆದಾಟು DPRಗೆ ಅನುಮತಿ ನೀಡದಂತೆ ಕರ್ನಾಟಕ ಮತ್ತು ತಮಿಳುನಾಡು ಸರ್ಕಾರಗಳಿಗೆ ಸೂಚನೆ ನೀಡಿತ್ತು. ಹಾಗಾಗಿ ಇದೇ 22ನೇ ತಾರೀಖು ನಡೆದ ಪ್ರಾಧಿಕಾರದ ಸಭೆಯಲ್ಲಿ ಮೇಕೆದಾಟು ಡಿಪಿಆರ್ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಲ್ಲಿಸಲಿರುವ ಪ್ರತಿಕ್ರಿಯೆ ಆಧರಿಸಿ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.

ಇದನ್ನೂ ಓದಿ: Karnataka Government: ನಿಗಮ, ಮಂಡಳಿ ಮತ್ತು ಪ್ರಾಧಿಕಾರಕ್ಕೆ ಅಧ್ಯಕ್ಷರ ನೇಮಕ

ಕೇಂದ್ರದ ಭರವಸೆ ಹಿನ್ನೆಲೆಯಲ್ಲಿ ಸುಪ್ರೀಂ ಮೊರೆಹೋದ ತಮಿಳುನಾಡು
ಕರ್ನಾಟಕ ಸರ್ಕಾರ ಮೇಕೆದಾಟು ಬಳಿ ಅಣೆಕಟ್ಟು ನಿರ್ಮಾಣ ಯೋಜನೆ ಕೈಗೆತ್ತಿಕೊಳ್ಳಬೇಕಾದರೆ ವಿಸ್ತೃತ ಯೋಜನಾ ವರದಿಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅನುಮತಿ ಪಡೆಯಬೇಕಾಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರನ್ನು ಭೇಟಿ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹಾಗೂ ರಾಜ್ಯದ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮುಂದಿನ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮೇಕೆದಾಟು ಯೋಜನೆಯ ಡಿಪಿಆರ್ ವಿಷಯದ ಬಗ್ಗೆ ಚರ್ಚೆ ಮಾಡಿ ಒಪ್ಪಿಗೆ ನೀಡಿ ಎಂದು ಕೇಳಿಕೊಂಡಿದ್ದಾರೆ. ಕೇಂದ್ರ ಜಲಸಂಪನ್ಮೂಲ ಇಲಾಖೆ ಮುಂದಿನ ಸಭೆಯಲ್ಲಿ ಮೇಕೆದಾಟು ಡಿಪಿಆರ್ ವಿಚಾರವನ್ನು ಸಭೆಯ ಅಜೆಂಡಾಗೆ ಸೇರಿಸುವ ಭರವಸೆ ನೀಡಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ಪ್ರಧಾನಿಗೆ ಪತ್ರ ಬರೆದಿದ್ದ ಸ್ಟಾಲಿನ್

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯ ಅಜೆಂಡಾದಲ್ಲಿ ಮೇಕೆದಾಟು ಡಿಪಿಆರ್ ಗೆ ಅನುಮೋದನೆ ನೀಡುವ ಬಗ್ಗೆ ಚರ್ಚಿಸುವ ಅಜೆಂಡಾವನ್ನು ಸೇರಿಸಬಾರದು ಎಂದು ಜಲಸಂಪನ್ಮೂಲ ಸಚಿವಾಲಯಕ್ಕೆ ಸೂಚನೆ ನೀಡುವಂತೆ ಪ್ರಧಾನ ಮಂತ್ರಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಇತ್ತೀಚೆಗೆ ಪತ್ರ ಬರೆದಿದ್ದರು.

ಇದನ್ನೂ ಓದಿ: Basavaraj Bommai: ಕಸ್ತೂರಿ ರಂಗನ್ ವರದಿ ಅವೈಜ್ಞಾನಿಕ: ಸಿಎಂ ಬಸವರಾಜ ಬೊಮ್ಮಾಯಿ‌

ಮೇಕೆದಾಟು ಯೋಜನೆ ಮತ್ತಷ್ಟು ವಿಳಂಬ ಸಾಧ್ಯತೆ

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮೇಕೆದಾಟು ಡಿಪಿಆರ್ ಗೆ ಒಪ್ಪಿಗೆ ನೀಡಲು ತಮಿಳುನಾಡು ಬಲವಾಗಿ ವಿರೋಧಿಸುತ್ತಿರುವುದರಿಂದ ಮತ್ತೀಗ ಸುಪ್ರೀಂ ಕೋರ್ಟ್ ಮೆಟ್ಟಿಲನ್ನೂ ಏರಿರುವುದರಿಂದ ಯೋಜನೆಯ ಕೆಲಸ ಆರಂಭಕ್ಕೆ ಇನ್ನಷ್ಟು ವಿಳಂಬವಾಗುವ ಸಾಧ್ಯತೆ ಇದೆ.
Published by:Divya D
First published: