ನವ ದೆಹಲಿ (ಆಗಸ್ಟ್ 27); ಸೆಪ್ಟೆಂಬರ್ 30 ರೊಳಗೆ ನಡೆಸಬೇಕಾಗಿರುವ ಅಂತಿಮ ವರ್ಷದ/ಮಧ್ಯಂತರ ಸೆಮಿಸ್ಟರ್‌ನ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ಕುರಿತ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ನೀಡಲಿದೆ ಎಂದು ನ್ಯಾಯಾಲಯದ ವೆಬ್‌ಸೈಟ್‌ನಲ್ಲಿ ತಿಳಿಸಲಾಗಿದೆ. ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ತ್ರಿಸದಸ್ಯ ಪೀಠ ಬೆಳಿಗ್ಗೆ 10.30ಕ್ಕೆ ಅದರ ತೀರ್ಪನ್ನು ನೀಡಲಿದೆ ಎಂದು ತಿಳಿಸಲಾಗಿದೆ.
ಸೆಪ್ಟೆಂಬರ್ 30 ರೊಳಗೆ ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸುವಂತೆ ಯುಜಿಸಿ ಜುಲೈ 6 ರಂದು ದೇಶಾದ್ಯಂತದ ವಿಶ್ವವಿದ್ಯಾಲಯಗಳಿಗೆ ನಿರ್ದೇಶನ ನೀಡಿತ್ತು. ಪರೀಕ್ಷೆಗಳು ನಡೆಯದಿದ್ದರೆ ವಿದ್ಯಾರ್ಥಿಗಳ ಭವಿಷ್ಯವು ಅಪಾಯಕ್ಕೆ ಸಿಲುಕುತ್ತದೆ ಎಂದು ಯುಜಿಸಿ ಈ ನಿರ್ಧಾರವನ್ನು ಸಮರ್ಥಿಸಿಕೊಂಡಿತ್ತು.
ಆದರೆ, ಕೊರೋನಾ ರೋಗವನ್ನು ಗಮನದಲ್ಲಿಟ್ಟುಕೊಂಡು ಆನ್‌ಲೈನ್/ಆಫ್‌ಲೈನ್ ಪರೀಕ್ಷೆಗಳನ್ನು ರದ್ದುಗೊಳಿಸಿ ಎಂದು ಅರ್ಜಿದಾರರು ಸುಪ್ರೀಂ ಕೋರ್ಟ್‌ಗೆ ಒತ್ತಾಯಿಸಿದ್ದಾರೆ. ವಿದ್ಯಾರ್ಥಿಗಳ ಹಿಂದಿನ ಸಾಧನೆ ಮತ್ತು ಆಂತರಿಕ ಮೌಲ್ಯಮಾಪನದ ಆಧಾರದ ಮೇಲೆ ಫಲಿತಾಂಶಗಳನ್ನು ಘೋಷಿಸಲು ಯುಜಿಸಿಗೆ ನಿರ್ದೇಶನ ನೀಡುವಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಕೋರಲಾಗಿತ್ತು.
ದೆಹಲಿ, ಮಹಾರಾಷ್ಟ್ರ, ಒಡಿಶಾ, ಪಂಜಾಬ್, ಹರಿಯಾಣ ಮತ್ತು ಮಧ್ಯಪ್ರದೇಶ ರಾಜ್ಯಗಳು ಅಂತಿಮ ವರ್ಷದ ಪರೀಕ್ಷೆಗಳು ಸೇರಿದಂತೆ ವಿಶ್ವವಿದ್ಯಾಲಯದ ಎಲ್ಲಾ ಪರೀಕ್ಷೆಗಳನ್ನು ರದ್ದುಗೊಳಿಸಿವೆ.
ಆದಾಗ್ಯೂ, ಯುಜಿಸಿಯು, ಕೊನೆಯ ವರ್ಷದ ಪರೀಕ್ಷೆಗಳನ್ನು ನಡೆಸದೆ ವಿದ್ಯಾರ್ಥಿಗಳಿಗೆ ಪದವಿ ನೀಡಲು ಸಾಧ್ಯವಿಲ್ಲ. ಅದಾಗ್ಯೂ ಪರೀಕ್ಷೆಗಳನ್ನು ರದ್ದುಗೊಳಿಸಬೇಕೇ ಅಥವಾ ಬೇಡವೇ ? ಎಂಬುದರ ಮೇಲೆ ವಿದ್ಯಾರ್ಥಿಗಳ ಭವಿಷ್ಯ ನಿಂತಿದೆ ಎನ್ನಲಾಗುತ್ತಿದೆ.
“ರಾಜ್ಯ ಸರ್ಕಾರಗಳು ಪರೀಕ್ಷೆಗಳನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ಆ ಅಧಿಕಾರ ಯುಜಿಸಿಗೆ ಮಾತ್ರ ಇದೆ” ಎಂದು ಯುಜಿಸಿ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಆಗಸ್ಟ್ 8 ರಂದು ಉನ್ನತ ನ್ಯಾಯಾಲಯಕ್ಕೆ ತಿಳಿಸಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ