ನವದೆಹಲಿ(ನವೆಂಭರ್. 12): ಬಿಜೆಪಿ "ಚೋರ್ ದರ್ವಾಜಾ" (ಕಳ್ಳದಾರಿ) ಮೂಲಕ ಬಿಹಾರದಲ್ಲಿ ಅಧಿಕಾರದ ಗದ್ದುಗೆ ಹಿಡಿದಿದೆ ಎಂದು ರಾಷ್ಟ್ರೀಯ ಜನತಾದಳ (ಆರ್ಜೆಡಿ) ಮುಖಂಡ ತೇಜಸ್ವಿ ಯಾದವ್ ಹೇಳಿದ್ದಾರೆ. ಬಿಹಾರದಲ್ಲಿ ಮತಗಳ ಎಣಿಕೆ ಅಸಾಧಾರಣವಾದ ರೀತಿಯಲ್ಲಿ ನಿಧಾನವಾಗಿ ಸಾಗಿತ್ತು. "ಕೋವಿಡ್ ಮಾರ್ಗಸೂಚಿ ಪ್ರಕಾರ ಎಲೆಕ್ಟ್ರಾನಿಕ್ ಮತದಾನ ಯಂತ್ರಗಳನ್ನು (ಇವಿಎಂ) ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಿದ್ದರಿಂದ ಫಲಿತಾಂಶ ಬರುವುದು ತಡರಾತ್ರಿಯಾಗಿತ್ತು. ಈ ನಡುವೆ ಅಂಚೆ ಮತಪತ್ರಗಳ ಎಣಿಕೆಗೆ ಸಂಬಂಧಿಸಿದಂತೆ, ವಿದ್ಯುನ್ಮಾನ ಮತಯಂತ್ರಗಳ ಲೋಪದ ಬಗ್ಗೆ ಹಾಗೂ ಗೆದ್ದ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ವಿತರಿಸದ ಬಗ್ಗೆ ಆರ್ ಜೆಡಿ ಚುನಾವಣಾ ಆಯೋಗದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿತ್ತು. ಚುನಾವಣಾ ಆಯೋಗದ ಬಗ್ಗೆ ಕಿಡಿಕಾರಿದ್ದ ಆರ್ ಜೆಡಿ-ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನದ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ಈಗ ಬಿಜೆಪಿ ಆಡಳಿತ ಯಂತ್ರವನ್ನು ದುರುಪಯೋಗ ಮಾಡಿಕೊಂಡು ಕಳ್ಳಹಾದಿಯಿಂದ ಅಧಿಕಾರ ಹಿಡಿದಿದೆ ಎಂದು ನೇರವಾದ, ಗಂಭೀರವಾದ ಆರೋಪ ಮಾಡಿದ್ದಾರೆ.
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮಹಾಘಟಬಂಧನ ಗೆಲುವು ಸಾಧಿಸಿದೆ. ನಿತೀಶ್ ಕುಮಾರ್ ಸೋಲು ಒಪ್ಪಿಕೊಳ್ಳಬೇಕು. ನಾವು ರಿಯಲ್ ವಿವಾದಗಳನ್ನು ಇಟ್ಟುಕೊಂಡು ಚುನಾವಣೆಯಲ್ಲಿ ಹೋರಾಟ ಮಾಡಿದ್ದೇವೆ. ಬಿಜೆಪಿ ಮತ್ತು ಜೆಡಿಯು ಪಕ್ಷಗಳು ಕೇಂದ್ರ ಮತ್ತು ರಾಜ್ಯ ಸರ್ಕಾರದ ಆಡಳಿತ ಯಂತ್ರ ದುರುಪಯೋಗ ಮಾಡಿಕೊಂಡು ಹಾಗೂ ಚುನಾವಣಾ ಆಯೋಗದ ಅಧಿಕಾರಿಗಳ ಮೇಲೆ ಒತ್ತಡ ಹೇರಿ ಅಧಿಕಾರ ಹಿಡಿದಿವೆ ಎಂದು ಆರೋಪಿಸಿದ್ದಾರೆ.
ಈಗಾಗಲೇ ಮಹಾಘಟಬಂಧನದ ನಾಯಕರು ಚುನಾವಣಾ ಅಕ್ರಮಗಳ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಆಯೋಗದ ಮುಂದಿನ ನಡೆಗಳನ್ನು ಎದುರು ನೋಡುತ್ತಿದ್ದಾರೆ. ಈ ನಡುವೆ ಪಾಟ್ನಾದಲ್ಲಿ ಗುರುವಾರ ಪಕ್ಷದ ಶಾಸಕರು ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ತೇಜಸ್ವಿ ಯಾದವ್ ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.
ಇದನ್ನೂ ಓದಿ : ಲಾಕ್ಡೌನ್ನಿಂದ ಉದ್ಯೋಗ ಕಳೆದುಕೊಂಡವರಿಗೆ ಗುಡ್ನ್ಯೂಸ್; ಆತ್ಮನಿರ್ಭರ ಯೋಜನೆಯಡಿ ಇಪಿಎಫ್ ಸೌಲಭ್ಯ
ಆರ್ ಜೆಡಿ ಮತ್ತು ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನವು ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎಗೆ ಕಠಿಣ ಹೋರಾಟ ನೀಡಿ 110 ಸ್ಥಾನಗಳನ್ನು ಗೆದ್ದುಕೊಂಡಿತು. ತೇಜಸ್ವಿ ಯಾದವ್ ಅವರು ಮುಖ್ಯಮಂತ್ರಿಯಾಗಬೇಕೆಂಬ ಭರವಸೆಯನ್ನು ಎನ್ಡಿಎ ಕಸಿದುಕೊಂಡಿದ್ದರೂ, ಅವರ ಪಕ್ಷ ರಾಷ್ಟ್ರೀಯ ಜನತಾದಳವು ಒಟ್ಟು 23.1 ಶೇಕಡಾ ಮತಗಳೊಂದಿಗೆ 75 ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯದ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ