ನ್ಯೂಯಾರ್ಕ್; ಜೋ ಬಿಡನ್ ಅವರ ಎಲೆಕ್ಟೋರಲ್ ಕಾಲೇಜ್ ಮತಗಳನ್ನು ಎಣಿಸುವ ಮತ್ತು ಪ್ರಮಾಣೀಕರಿಸುವ ಪ್ರಕ್ರಿಯೆಯನ್ನು ಅಮೆರಿಕ ಕಾಂಗ್ರೆಸ್ ಪೂರ್ಣಗೊಳಿಸಿದೆ. ಆ ಮೂಲಕ ಜೋ ಬಿಡನ್ ಅವರು ವಿಶ್ವದ ದೊಡ್ಡಣ್ಣ ಅಮೆರಿಕದ 46ನೇ ಅಧ್ಯಕ್ಷರು ಎಂದು ಅಧಿಕೃತವಾಗಿ ಆಯ್ಕೆ ಮಾಡಲಾಗಿದೆ. ಜನವರಿ 20ರಂದು ಜೋ ಬಿಡನ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಪ್ರಕ್ರಿಯೆಗೂ ಮುನ್ನ ಡೊನಾಲ್ಡ್ ಟ್ರಂಪ್ ಅವರ ಸಾವಿರಾರು ಬೆಂಬಲಿಗರು ಅಮೆರಿಕ ಸಂಸತ್ ಒಳಗೆ ನುಗ್ಗಿ ಪೊಲೀಸರೊಂದಿಗೆ ಸಂಘರ್ಷಕ್ಕೆ ಇಳಿದಿದ್ದರು. ಘಟನೆಯಲ್ಲಿ ಐವರು ಮೃತಪಟ್ಟಿದ್ದು, ಅನೇಕ ಮಂದಿ ಗಾಯಗೊಂಡಿದ್ದಾರೆ. ಅಲ್ಲದೇ ಪರಿಸ್ಥಿತಿ ನಿಯಂತ್ರಣಕ್ಕಾಗಿ ಕರ್ಫ್ಯೂ ಹೇರಲಾಗಿದೆ.
ಕಳೆದ ನವೆಂಬರ್ನಲ್ಲಿ ನಡೆದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಜೊ ಬಿಡನ್ ಗೆಲವನ್ನು ಟ್ರಂಪ್ ಬೆಂಬಲಿಗರು ವಿರೋಧಿಸುತ್ತಿದ್ದಾರೆ. ಏತನ್ಮಧ್ಯೆ, ಘಟನೆಯನ್ನು ಖಂಡಿಸಿರುವ ನಿಯೋಜಿತ ಅಧ್ಯಕ್ಷ ಜೊ ಬಿಡನ್ ಇದು ಅಮೆರಿಕ ಇತಿಹಾಸದ ಅತ್ಯಂತ ಕರಾಳ ಕ್ಷಣ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಇದನ್ನು ಓದಿ: ಸಿದ್ದರಾಮಯ್ಯ ಜೆಡಿಎಸ್ ಪಕ್ಷ ಬಿಡಲು ನಾನು ಕಾರಣನಲ್ಲ; ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ
ಈ ಘಟನೆ ಬಗ್ಗೆ ಟ್ವೀಟ್ ಮಾಡಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 75ನೇ ಅಧಿವೇಶನದ ಅಧ್ಯಕ್ಷ ವೋಲ್ಕಾರ್ ಬೊಜ್ಕಿರ್, ವಾಷಿಂಗ್ಟನ್ನಲ್ಲಿ ನಡೆದ ಘಟನೆಯಿಂದ ತೀವ್ರ ಬೇಸರವಾಗಿದೆ. ಪ್ರಜಾಪ್ರಭುತ್ವ ಹೊಂದಿರುವ ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿ ಅಮೆರಿಕವೂ ಸಹ ಒಂದಾಗಿದೆ. ಇಂಥ ನಿರ್ಣಾಯಕ ಸಮಯದಲ್ಲಿ ನಮ್ಮ ಆತಿಥೇಯ ದೇಶದಲ್ಲಿ ಪ್ರಜಾಪ್ರಭುತ್ವ ಪ್ರಕ್ರಿಯೆಗಳ ಶಾಂತಿ ಮತ್ತು ಗೌರವವು ಮೇಲುಗೈ ಸಾಧಿಸುತ್ತದೆ ಎಂದು ನಾನು ನಂಬುತ್ತೇನೆ ಎಂದು ಹೇಳಿದ್ದಾರೆ.
ಕಳೆದ ವರ್ಷ ನವೆಂಬರ್ನಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಾಟ್ ಪಕ್ಷದ ಜೋ ಬಿಡನ್ ಅವರು 306 ಎಲೆಕ್ಟೋರಲ್ ಕಾಲೇಜ್ ಮತಗಳನ್ನು ಪಡೆದು ವಿಜಯಿಶಾಲಿಯಾಗಿದ್ದರು. ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ 232 ಮತಗಳನ್ನು ಪಡೆದಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ