news18-kannada Updated:February 22, 2021, 4:35 PM IST
ಬಂಧಿತ ಆರೋಪಿ.
ಉತ್ತರಪ್ರದೇಶ (ಫೆಬ್ರವರಿ 22); ರಾಷ್ಟ್ರರಾಜಧಾನಿ ದೆಹಲಿಯಿಂದ ಸುಮಾರು 86 ಕಿ.ಮೀ ದೂರದಲ್ಲಿರುವ ಉತ್ತರಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ದುಷ್ಕರ್ಮಿಯೊಬ್ಬ ಮನೆಗೆ ನುಗ್ಗಿ ಬಾಲಕಿಯೊಬ್ಬಳ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾನೆ. ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ಬಾಲಕಿಯ ಸ್ಥಿತಿ ಗಂಭೀರವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಆಕೆಯನ್ನು ಮೀರತ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂತ್ರಸ್ತೆಗೆ ತೀವ್ರ ಸುಟ್ಟ ಗಾಯಗಳಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ.
ಬಾಲಕಿಯ ಮೇಲೆ ಆ್ಯಸಿಡ್ ದಾಳಿ ನಡೆಸಿದ ದುಷ್ಕರ್ಮಿಯನ್ನು ಘಟನೆ ನಡೆದ ಕೇವಲ 6 ಗಂಟೆಯಲ್ಲಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಾಲಕಿಯ ತಂದೆ ನೀಡಿದ ದೂರನ್ನು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ.
ಈ ಘಟನೆ ಭಾನುವಾರ ಸಂಜೆ 7.30ರ ಸುಮಾರಿಗೆ ನಡೆದಿದ್ದು, ಆ್ಯಸಿಡ್ ಅಂಶವನ್ನೊಳಗೊಂಡ ರಾಸಾಯನಿಕವನ್ನು ಬಾಲಕಿಯ ಮೈಮೇಲೆ ಎರಚಲಾಗಿದೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದುದ್ದರಿಂದ ಮೀರತ್ ನ ಆಸ್ಪತ್ರೆಗೆ ಆಕೆಯನ್ನು ರವಾನಿಸಲಾಯಿತು. ಸದ್ಯ ಆಕೆ ಪ್ರಾಣಾಪಾಯದಿಂದ ಪಾರಾಗಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ನೀರಜ್ ಜದೌನ್ ಹೇಳಿದ್ದಾರೆ.
ಇದನ್ನೂ ಓದಿ: ಗಾಂಧಿಯನ್ನು ಕೊಂದ ಸಂಘ ಪರಿವಾರದವರು ರಾಮ ಭಕ್ತರೇ?, ದೇಶ ಪ್ರೇಮದ ಪಾಠ ಇವರಿಂದ ಕಲಿಬೇಕಾ?; ಸಿದ್ದರಾಮಯ್ಯ
ಬಾಲಕಿ ತನ್ನೊಂದಿಗೆ ಮಾತನಾಡುವುದನ್ನು ನಿಲ್ಲಿಸಿದ್ದರಿಂದ ನಾನು ಆಕೆಯ ಮೇಲೆ ಆ್ಯಸಿಡ್ ಎರಚಿದ್ದೇನೆಂದು ಬಂಧಿತ ಆರೋಪಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಆತನನ್ನೂ ಕೂಡ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಆರೋಪಿಯ ವಿಡಿಯೋದೊಂದಿಗೆ ಹಾಪುರ್ ಪೊಲೀಸರು ಟ್ವೀಟ್ ಮಾಡಿದ್ದಾರೆ.
ಉತ್ತರಪ್ರದೇಶದಲ್ಲಿ ಮಹಿಳಾ ಸುರಕ್ಷತೆ ಹಾಗೂ ಅಪರಾಧ ಪ್ರಕರಣಗಳ ನಿಯಂತ್ರಣಕ್ಕಾಗಿ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ ಅಗತ್ಯ ಕ್ರಮಕೈಗೊಳ್ಳುತ್ತಿದ್ದು ಹಲವಾರು ಯೋಜನೆಗಳನ್ನು ರೂಪಿಸಿದೆ. ಆದರೂ ಕೂಡ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ಪ್ರಕರಗಳಿಗೆ ಇನ್ನೂ ಕಡಿವಾಣ ಬಿದ್ದಿಲ್ಲ.
Published by:
MAshok Kumar
First published:
February 22, 2021, 4:35 PM IST