ಪೌರತ್ವ ತಿದ್ದುಪಡಿ ಕಾಯ್ದೆಗೆ ಭಾರೀ ವಿರೋಧ; ಈಶಾನ್ಯ ಭಾರತದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ದೆಹಲಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಈಶಾನ್ಯ ರಾಜ್ಯಗಳ ಇಂದಿನ ಭೇಟಿಯನ್ನು ಕೂಡ ರದ್ದುಗೊಳಿಸಲಾಗಿದೆ.

Sushma Chakre | news18-kannada
Updated:December 14, 2019, 8:36 AM IST
ಪೌರತ್ವ ತಿದ್ದುಪಡಿ ಕಾಯ್ದೆಗೆ ಭಾರೀ ವಿರೋಧ; ಈಶಾನ್ಯ ಭಾರತದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ
ಈಶಾನ್ಯ ರಾಜ್ಯಗಳಲ್ಲಿ ಪ್ರತಿಭಟನೆ
  • Share this:
ಗುವಾಹಟಿ/ ನವದೆಹಲಿ/ ಕೊಲ್ಕತ್ತಾ (ಡಿ. 14): ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿರುವ ಬೆನ್ನಲ್ಲೇ ಎಲ್ಲೆಡೆ ತೀವ್ರ ಪ್ರತಿಭಟನೆಗಳು ನಡೆಯುತ್ತಿವೆ. ಈ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ದೆಹಲಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈಶಾನ್ಯ ರಾಜ್ಯಗಳಲ್ಲಿ ಪ್ರತಿಭಟನೆಯ ಕಾವು ಜೋರಾಗಿರುವುದರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಈಶಾನ್ಯ ರಾಜ್ಯಗಳ ಇಂದಿನ ಭೇಟಿಯನ್ನು ಕೂಡ ರದ್ದುಗೊಳಿಸಲಾಗಿದೆ.

ಅಸ್ಸಾಂ:
ಅಸ್ಸಾಂ ಇತಿಹಾಸದಲ್ಲೇ ಮೊದಲ ಬಾರಿಗೆ ಪೌರತ್ವ ತಿದ್ದುಪಡಿ ಮಸೂದೆಯನ್ನು ಖಂಡಿಸಿ ತೀವ್ರ ಪ್ರತಿಭಟನೆಗಳು ನಡೆಯುತ್ತಿವೆ. ಮೂರು ರೈಲ್ವೆ ನಿಲ್ದಾಣ, ಪೋಸ್ಟ್​ ಆಫೀಸ್, ಬ್ಯಾಂಕ್, ಬಸ್ ಸ್ಟ್ಯಾಂಡ್​ಗಳು ಮತ್ತು ಇನ್ನಿತರ ಸರ್ಕಾರಿ ಆಸ್ತಿಗಳಿಗೆ ಬೆಂಕಿ ಹಚ್ಚಲಾಗಿದೆ. ಇದರಿಂದ ಅಪಾರ ನಷ್ಟ ಉಂಟಾಗಿದೆ. ಅಸ್ಸಾಂನಲ್ಲಿ ನಡೆದ ಪ್ರತಿಭಟನೆಯಲ್ಲಿ ಮೂರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರುವ ಕುರಿತು ಅಸ್ಸಾಂ ರಾಜವಂಶಸ್ಥ ಕಿರೀಟ್ ಪ್ರದ್ಯೋತ್ ದೇಬ್ ಬರ್ಮನ್ ಅವರೊಂದಿಗೆ ಸಚಿವ ಅಮಿತ್ ಶಾ ಮಾತುಕತೆ ನಡೆಸಿದ್ದಾರೆ. ಆದರೆ, ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಸುಪ್ರೀಂಕೋರ್ಟ್​ ಮೆಟ್ಟಿಲೇರುವುದಾಗಿ ಅಮಿತ್​ ಶಾಗೆ ತಿಳಿಸಿರುವ ರಾಜವಂಶಸ್ಥ ಬರ್ಮನ್ ಈ ವಿಚಾರದಲ್ಲಿ ರಾಜಿಯಾಗುವ ಮಾತೇ ಇಲ್ಲ ಎಂದು ಸ್ಪಷ್ಟಪಡಿಸಿರುವುದಾಗಿ ಟ್ವೀಟ್ ಮಾಡಿದ್ದಾರೆ.


ಮೇಘಾಲಯ:

ಮೇಘಾಲಯದ ರಾಜಭವನದ ಎದುರು ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ನಡೆದ ಜಟಾಪಟಿಯಲ್ಲಿ 25ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಈ ವೇಳೆ ಪ್ರತಿಭಟನಾಕಾರರು ಪೊಲೀಸರ ಮೇಲೆ ದಾಳಿ ನಡೆಸಲು ಮುಂದಾಗಿದ್ದರಿಂದ ಗ್ಯಾಸ್​ ಶೆಲ್​ಗಳ ಮೂಲಕ ಪೊಲೀಸರು ಫೈರಿಂಗ್ ಮಾಡಿದರು. ಈ ಘಟನೆಯಲ್ಲಿ ಇಬ್ಬರು ಪೊಲೀಸರು ಸೇರಿದಂತೆ 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಪಶ್ಚಿಮ ಬಂಗಾಳ:

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪೌರತ್ವ ಕಾಯ್ದೆಯನ್ನು ಜಾರಿಗೊಳಿಸುವುದಿಲ್ಲ ಎಂದು ಪಟ್ಟು ಹಿಡಿದ್ದಿದ್ದಾರೆ. ಕಾಯ್ದೆ ವಿರುದ್ಧ ಸಾಮೂಹಿಕ ಆಂದೋಲನಕ್ಕೆ ಮಮತಾ ಬ್ಯಾನರ್ಜಿ ಕರೆ ನೀಡಿದ ಬೆನ್ನಲ್ಲೇ ಪಶ್ಚಿಮ ಬಂಗಾಳದಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಆಡಳಿತ ಪಕ್ಷಕ್ಕೆ ಬೆಂಬಲ ನೀಡುತ್ತಿರುವ ಹಲವಾರು ಮುಸ್ಲಿಂ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದು, ಹಿಂಸಾಚಾರದ ಪ್ರತಿಭಟನೆ ಮಾಡಿ ತಮ್ಮ ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರು ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡಿಸಿ, ಹೌರಾ, ಮುರ್ಶಿರಾಬಾದ್, ಉಲುಬೆರಿಯಾ ಸೇರಿದಂತೆ ಹಲವೆಡೆ ರೈಲ್ವೆ ಹಳಿಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಣಾಮ ರೈಲು ಸಂಚಾರ ಸ್ಥಗಿತಗೊಂಡಿದೆ.

ದೆಹಲಿ:

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲೂ ಪ್ರತಿಭಟನೆಯ ಕಾವು ಜೋರಾಗಿದ್ದು, ಜಮೈತ್ ಉಲಾಮಾ-ಇ-ಹಿಂದ್ ನಾಯಕರು ಸೇರಿದಂತೆ ಅನೇಕ ಸಂಘಟನೆಗಳು ಕೇಂದ್ರ ಸರ್ಕಾರದ ವಿರುದ್ಧ ಬೀದಿಗಿಳಿದಿವೆ. ದೆಹಲಿಯ ಜಂತರ್ ಮಂತರ್​ನಲ್ಲಿ ಪೌರತ್ವ ತಿದ್ದುಪಡಿ ಮಸೂದೆಯನ್ನು ಖಂಡಿಸಿ ಪ್ರತಿಭಟನೆ ನಡೆದಿದ್ದು, ತಕ್ಷಣ ಈ ಮಸೂದೆಯನ್ನು ವಾಪಾಸ್ ಪಡೆಯುವಂತೆ ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ. ಅಲ್ಪಸಂಖ್ಯಾತ ಸಮುದಾಯದ ಸಂಘಟನೆಗಳು, ಕಾಂಗ್ರೆಸ್ ಕಾರ್ಯಕರ್ತರು, ವಿವಿಧ ಸಂಘಟನೆಗಳು ಈ ಪ್ರತಿಭಟನೆಗೆ ಬೆಂಬಲ ಸೂಚಿಸಿವೆ.

ಅರುಣಾಚಲ ಪ್ರದೇಶ:

ಅರುಣಾಚಲ ಪ್ರದೇಶದಲ್ಲಿ ವಿದ್ಯಾರ್ಥಿ ಸಂಘಟನೆಗಳು ಶುಕ್ರವಾರ ಪರೀಕ್ಷೆಯನ್ನು ಬಹಿಷ್ಕರಿಸಿ ಪ್ರತಿಭಟನೆಗೆ ಇಳಿದಿವೆ. ರಾಜೀವ್ ಗಾಂಧಿ ಯುನಿವರ್ಸಿಟಿಯ ವಿದ್ಯಾರ್ಥಿಗಳು, ವಿದ್ಯಾರ್ಥಿ ಸಂಘಟನೆಗಳು ರಾಜಭವನಕ್ಕೆ ಮುತ್ತಿಗೆ ಹಾಕಲು ಮುಂದಾಗಿವೆ. ದೇಶದೆಲ್ಲೆಡೆ ನಾಲ್ಕೈದು ದಿನಗಳಿಂದ ಪ್ರತಿಭಟನೆಯ ಬಿಸಿ ಏರುತ್ತಿದ್ದು, ಇಂದು ಕೂಡ ಕೇಂದ್ರ ಸರ್ಕಾರದ ನಿರ್ಧಾರವನ್ನು ಖಂಡಿಸಿ ಮುಷ್ಕರಗಳು ಹೆಚ್ಚಾಗುವ ಸಾಧ್ಯತೆಯಿದೆ.
First published:December 14, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ