ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಕಳವಳ ವ್ಯಕ್ತಪಡಿಸಿದ ಅಮೆರಿಕ; ಅಲ್ಪ ಸಂಖ್ಯಾತರ ಹಕ್ಕುಗಳನ್ನು ರಕ್ಷಿಸುವಂತೆ ಒತ್ತಾಯ

Citizenship Amendment Bill: ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಅನುಗುಣವಾಗಿ ಭಾರತ ತನ್ನ ದೇಶದ ಧಾರ್ಮಿಕ ಅಲ್ಪ ಸಂಖ್ಯಾತರ ಹಕ್ಕುಗಳನ್ನು ರಕ್ಷಿಸಬೇಕು ಎಂದು ಅಮೆರಿಕ ಒತ್ತಾಯಿಸಿದೆ.

MAshok Kumar | news18-kannada
Updated:December 13, 2019, 11:59 AM IST
ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಕಳವಳ ವ್ಯಕ್ತಪಡಿಸಿದ ಅಮೆರಿಕ; ಅಲ್ಪ ಸಂಖ್ಯಾತರ ಹಕ್ಕುಗಳನ್ನು ರಕ್ಷಿಸುವಂತೆ ಒತ್ತಾಯ
ಪ್ರಾತಿನಿಧಿಕ ಚಿತ್ರ.
  • Share this:
ವಾಷಿಂಗ್ಟನ್; ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದೇಶದಾದ್ಯಂತ ಅಲ್ಲಲ್ಲಿ ಪ್ರತಿಭಟನೆಗಳು ನಡೆಯುತ್ತಿದ್ದು ಅಸ್ಸಾಂ ಹಾಗೂ ತ್ರಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಈ ಕುರಿತು ಅಮೆರಿಕ ಸಹ ಕಳವಳ ವ್ಯಕ್ತಪಡಿಸಿದ್ದು, “ಭಾರತ ತಮ್ಮ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಅನುಗುಣವಾಗಿ ದೇಶದಲ್ಲಿನ ಅಲ್ಪ ಸಂಖ್ಯಾತರ ಹಕ್ಕುಗಳನ್ನು ರಕ್ಷಿಸಬೇಕು” ಎಂದು ಒತ್ತಾಯಿಸಿದೆ.

ಅಮೆರಿಕ ಸರ್ಕಾರದ ವಕ್ತಾರರು ಗುರುವಾರ ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ್ದು, “ಭಾರತದಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಸಂಬಂಧಿಸಿದ ಬೆಳವಣಿಗೆಗಳನ್ನು ನಾವು ನಿಕಟವಾಗಿ ಗಮನಿಸುತ್ತಿದ್ದೇವೆ. ಧಾರ್ಮಿಕ ಸ್ವಾತಂತ್ರ್ಯಕ್ಕೆ ಗೌರವ ಮತ್ತು ಕಾನೂನಿನ ಅಡಿಯಲ್ಲಿ ಎಲ್ಲರನ್ನೂ ಸಮಾನವಾಗಿ ಕಾಣುವುದು ಪ್ರಜಾಪ್ರಭುತ್ವದ ಮೂಲಭೂತ ತತ್ವಗಳಾಗಿವೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಲ್ಲದೆ, “ಭಾರತದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಅನುಗುಣವಾಗಿ ಭಾರತ ತನ್ನ ದೇಶದ ಧಾರ್ಮಿಕ ಅಲ್ಪ ಸಂಖ್ಯಾತರ ಹಕ್ಕುಗಳನ್ನು ರಕ್ಷಿಸಬೇಕು ಎಂದು ಭಾರತವನ್ನು ಅಮೆರಿಕ ಒತ್ತಾಯಿಸುತ್ತದೆ” ಎಂದು ಅವರು ತಿಳಿಸಿದ್ದಾರೆ.

ಸೋಮವಾರ ಲೋಕಸಭೆಯಲ್ಲಿ ಅಂಗೀಕಾರವಾಗಿದ್ದ ನೂತನ “ಪೌರತ್ವ ತಿದ್ದುಪಡಿ ಮಸೂದೆ”ಗೆ ರಾಜ್ಯಸಭೆಯೂ ಬುಧವಾರ ಅಂಗೀಕಾರದ ಮುದ್ರೆ ಒತ್ತಿದೆ. ಇದು ದೇಶದಾದ್ಯಂತ ದೊಡ್ಡ ಮಟ್ಟದ ಪ್ರತಿಭಟನೆಗೆ ಕಾರಣವಾಗಿದೆ.

ಈಶಾನ್ಯ ಭಾರತದಲ್ಲಿ ಈ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ಹೋರಾಟದ ವೇಳೆ ಪೊಲೀಸರ ಗುಂಡಿಗೆ ಗುರುವಾರ ಇಬ್ಬರು ಬಲಿಯಾಗಿದ್ದಾರೆ. ಅಸ್ಸಾಂ ನಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಮೊಬೈಲ್ ಕರೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಇದನ್ನೂ ಓದಿ : ಅಸ್ಸಾಂನಲ್ಲಿ ಇಂದೂ ಮುಂದುವರಿದ ಪ್ರತಿಭಟನೆ ; ಸುಧಾರಣೆ ಕಾಣುತ್ತಿಲ್ಲ ಪರಿಸ್ಥಿತಿ, ಕರ್ಫ್ಯೂ ಮುಂದುವರಿಕೆ
First published:December 13, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ