ಟೀಮ್ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವಣ ಪ್ರತಿಷ್ಠಿತ ಟೆಸ್ಟ್ ಸರಣಿಯ ಮೊದಲ ಪಂದ್ಯದಿಂದ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಹೊರಗುಳಿದಿದ್ದಾರೆ. 2ನೇ ಏಕದಿನ ಪಂದ್ಯದ ವೇಳೆ ವಾರ್ನರ್ ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಟಿ20 ಸರಣಿಯಲ್ಲಿ ಕಣಕ್ಕಿಳಿದಿರಲಿಲ್ಲ. ಹೀಗಾಗಿ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿತ್ತು. ಆದರೆ ಇದೀಗ ಮೊದಲ ಟೆಸ್ಟ್ ಪಂದ್ಯಕ್ಕೆ ವಾರ್ನರ್ ಅಲಭ್ಯರಾಗಿದ್ದಾರೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಸ್ಪಷ್ಟನೆ ನೀಡಿದೆ.
ಡಿಸೆಂಬರ್ 17ರಿಂದ ಅಡಿಲೇಡ್ನಲ್ಲಿ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದ್ದು, ಇದು ಹಗಲು-ರಾತ್ರಿ ಪಂದ್ಯವಾಗಿರುವುದರಿಂದ ಮಹತ್ವ ಪಡೆದುಕೊಂಡಿದೆ. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಇರಲಿದ್ದಾರೆ. ಆ ಬಳಿಕ ಅವರು ಪಿತೃತ್ವ ರಜೆಯ ಹಿನ್ನೆಲೆಯಲ್ಲಿ ಭಾರತಕ್ಕೆ ವಾಪಾಸಾಗಲಿದ್ದು, ತಂಡವನ್ನು ಅಜಿಂಕ್ಯ ರಹಾನೆ ಮುನ್ನಡೆಸಲಿದ್ದಾರೆ.
ಇತ್ತ ಮೊದಲ ಟೆಸ್ಟ್ನಲ್ಲೇ ಟೀಮ್ ಇಂಡಿಯಾವನ್ನು ಸೋಲಿಸಿ ಮುನ್ನಡೆ ಕಾಯ್ದುಕೊಳ್ಳಬೇಕೆಂಬ ಬಿಗ್ ಪ್ಲ್ಯಾನ್ನಲ್ಲಿದ್ದ ಆಸ್ಟ್ರೇಲಿಯಾಗೆ ಡೇವಿಡ್ ವಾರ್ನರ್ ಅಲಭ್ಯತೆ ಆಘಾತ ನೀಡಿದೆ. ಆಸೀಸ್ ಸ್ಟಾರ್ ಆರಂಭಿಕನ ಅಲಭ್ಯತೆಯು ಭಾರತ ತಂಡಕ್ಕೆ ವರವಾಗಲಿದ್ದು, ಹೀಗಾಗಿ ಮೊದಲ ಟೆಸ್ಟ್ನಲ್ಲೇ ಮೇಲುಗೈ ಸಾಧಿಸಲು ಸಹಕಾರಿಯಾಗಲಿದೆ.
ಸದ್ಯ ಚೇತರಿಸಿಕೊಳ್ಳುತ್ತಿರುವ ಡೇವಿಡ್ ವಾರ್ನರ್ ಅವರು ಡಿಸೆಂಬರ್ 26 ರಿಂದ ಮೆಲ್ಬೋರ್ನ್ನಲ್ಲಿ ಆರಂಭವಾಗಲಿರುವ ಎರಡನೇ ಟೆಸ್ಟ್ ಪಂದ್ಯದ ವೇಳೆಗೆ ಸಂಪೂರ್ಣ ಫಿಟ್ ಆಗಲಿದ್ದಾರೆ. ಅಲ್ಲದೆ 2ನೇ ಟೆಸ್ಟ್ನಲ್ಲಿ ಕಣಕ್ಕಿಳಿಯಲಿದ್ದಾರೆ ಎಂದು ಆಸ್ಟ್ರೇಲಿಯಾ ಕೋಚ್ ಜಸ್ಟಿನ್ ಲ್ಯಾಂಗರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ