ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. 18 ಸದಸ್ಯರನ್ನು ಒಳಗೊಂಡಿರುವ ಭಾರತ ತಂಡದಲ್ಲಿ ಈ ಬಾರಿ ಇಬ್ಬರು ಕನ್ನಡಿಗರು ಕಾಣಿಸಿಕೊಂಡಿದ್ದಾರೆ. ಅಲ್ಲದೆ ಮೂವರು ಆಟಗಾರರು ಇದೇ ಮೊದಲ ಬಾರಿ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದ ಸೂರ್ಯಕುಮಾರ್ ಯಾದವ್, ಏಕದಿನ ತಂಡದಲ್ಲೂ ಅವಕಾಶ ಪಡೆಯುವಲ್ಲಿ ಸಫಲರಾಗಿದ್ದಾರೆ. ಹಾಗೆಯೇ ಈ ಹಿಂದೆ ಚುಟುಕು ಕ್ರಿಕೆಟ್ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಆಲ್ರೌಂಡರ್ ಕೃನಾಲ್ ಪಾಂಡ್ಯ ಕೂಡ ಈ ಬಾರಿ ಒನ್ಡೇ ಟೀಮ್ನಲ್ಲಿ ಸ್ಥಾನ ಪಡೆದಿದ್ದಾರೆ.
ಇನ್ನು ಇತ್ತೀಚೆಗಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟದ್ದ ಟೀಮ್ ಇಂಡಿಯಾ ವೇಗಿ ಜಸ್‌ಪ್ರೀತ್ ಬೂಮ್ರಾ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ರವೀಂದ್ರ ಜಡೇಜಾ ಹಾಗೂ ಮೊಹಮ್ಮದ್ ಶಮಿಯನ್ನು ತಂಡದ ಆಯ್ಕೆಗೆ ಪರಿಗಣಿಸಲಾಗಿಲ್ಲ.
ಇಂಗ್ಲೆಂಡ್ ಟಿ20ಯಲ್ಲಿ ಸತತ ವೈಫಲ್ಯದ ಹೊರತಾಗಿಯೂ ಕೆಎಲ್ ರಾಹುಲ್ ಏಕದಿನ ತಂಡದಲ್ಲೂ ಸ್ಥಾನ ಉಳಿಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ. ಅಲ್ಲದೆ ಈ ಬಾರಿ ತಂಡದಲ್ಲಿ 2ನೇ ವಿಕೆಟ್ ಕೀಪರ್ ಆಗಿ ರಾಹುಲ್ ಕಾಣಿಸಿಕೊಳ್ಳಲಿದ್ದಾರೆ. ಆದರೆ ವಿಜಯ್ ಹಜಾರೆ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ದೇವದತ್ ಪಡಿಕ್ಕಲ್ ಹಾಗೂ ಕಳೆದ ಬಾರಿ ತಂಡದಲ್ಲಿದ್ದ ಮನೀಷ್ ಪಾಂಡೆಗೆ ಈ ಬಾರಿ ಅವಕಾಶ ಲಭಿಸಿಲ್ಲ.
ಇನ್ನು ಕೆಎಲ್ ರಾಹುಲ್ ಹೊರತಾಗಿ ಮತ್ತೋರ್ವ ಕನ್ನಡಿಗ ಪ್ರಸಿದ್ಧ್ ಕೃಷ್ಣ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ. ವಿಜಯ್ ಹಜಾರೆ ಟೂರ್ನಿಯಲ್ಲಿ 14 ವಿಕೆಟ್ ಕಬಳಿಸಿ ಮಿಂಚಿದ್ದ ಪ್ರಸಿದ್ಧ್ ಕೃಷ್ಣ ಚೊಚ್ಚಲ ಬಾರಿ ರಾಷ್ಟ್ರೀಯ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ