ಕ್ರಿಕೆಟ್ ಅಂಗಳದಲ್ಲಿ ದಾಖಲೆಯ ಸರದಾರನಾಗಿ ಮೆರೆಯುತ್ತಿರುವ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮತ್ತೊಂದು ದಾಖಲೆ ಬರೆದಿದ್ದಾರೆ. ಅಡಿಲೇಡ್ನಲ್ಲಿ ಶುರುವಾಗಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ 74 ರನ್ ಬಾರಿಸಿದರು. ಇದರೊಂದಿಗೆ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಟೀಮ್ ಇಂಡಿಯಾ ನಾಯಕ ಎಂಬ ಹೆಗ್ಗಳಿಕೆ ಕಿಂಗ್ ಕೊಹ್ಲಿ ಪಾತ್ರರಾಗಿದ್ದಾರೆ.
ಆಸ್ಟ್ರೇಲಿಯಾ ವಿರುದ್ದ 19 ಟೆಸ್ಟ್ ಪಂದ್ಯಗಳಲ್ಲಿ 34 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ 1604 ರನ್ ಕಲೆಹಾಕಿದ್ದಾರೆ. ಅದರಲ್ಲಿ ತಂಡದ ನಾಯಕನಾಗಿದ್ದ ವೇಳೆ ಮೂಡಿಬಂದಿರುವುದು 851 ರನ್ಗಳು. ಈ ಮೂಲಕ ಟೀಮ್ ಇಂಡಿಯಾ ನಾಯಕನಾಗಿ ಆಸೀಸ್ ವಿರುದ್ದ ಅತೀ ಹೆಚ್ಚು ರನ್ ಬಾರಿಸಿದ ಕ್ಯಾಪ್ಟನ್ ಎಂಬ ದಾಖಲೆ ಕೊಹ್ಲಿ ಬರೆದರು. ಇದಕ್ಕೂ ಮುನ್ನ ಈ ದಾಖಲೆ ಭಾರತದ ಮಾಜಿ ಟೆಸ್ಟ್ ನಾಯಕ ಮನ್ಸೂರ್ ಅಲಿ ಖಾನ್ ಪಟೌಡಿ ಅವರ ಹೆಸರಿನಲ್ಲಿತ್ತು.
ಮನ್ಸೂರ್ ಅಲಿ ಖಾನ್ ಪಟೌಡಿ ಆಸ್ಟ್ರೇಲಿಯಾ ವಿರುದ್ಧ ನಾಯಕನಾಗಿ 10 ಟೆಸ್ಟ್ ಪಂದ್ಯಗಳಲ್ಲಿ 829 ರನ್ ಬಾರಿಸಿದ್ದರು. ಈ ದಾಖಲೆಯನ್ನು ವಿರಾಟ್ ಕೊಹ್ಲಿ ಮುರಿದಿದ್ದು, ಈ ಮೂಲಕ ಆಸೀಸ್ ವಿರುದ್ದ ಯಶಸ್ವಿ ನಾಯಕ/ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ. ಇನ್ನು ಈ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬ್ಯಾಟ್ನಿಂದ ಶತಕ ಮೂಡಿಬಂದರೆ ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ ನಾಯಕನಾಗಿ ಅತೀ ಹೆಚ್ಚು ಶತಕ ಬಾರಿಸಿದ ವಿಶ್ವ ದಾಖಲೆ ನಿರ್ಮಾಣವಾಗಲಿದೆ.
ಸದ್ಯ ಈ ನಾಯಕನಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತೀ ಹೆಚ್ಚು ಶತಕ ಬಾರಿಸಿದ ದಾಖಲೆಯನ್ನು ಆಸ್ಟ್ರೇಲಿಯಾ ಮಾಜಿ ನಾಯಕ ರಿಕಿ ಪಾಂಟಿಂಗ್ ಜೊತೆ ಕೊಹ್ಲಿ ಜಂಟಿಯಾಗಿ ಹಂಚಿಕೊಂಡಿದ್ದಾರೆ. ಇಬ್ಬರು ನಾಯಕತ್ವದಲ್ಲಿ ತಲಾ 41 ಶತಕಗಳನ್ನು ಬಾರಿಸಿದ್ದಾರೆ. ಇನ್ನೊಂದು ಶತಕ ಸಿಡಿಸಿದ್ರೆ ಕೊಹ್ಲಿ ಹೆಸರಿನಲ್ಲಿ ಇತಿಹಾಸ ನಿರ್ಮಾಣವಾಗಲಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ