ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆಯುತ್ತಿರುವ 3ನೇ ಏಕದಿನ ಪಂದ್ಯದಲ್ಲಿ ಭಾರತ ತಂಡವು ಇಂಗ್ಲೆಂಡ್ಗೆ 330 ರನ್ಗಳ ಟಾರ್ಗೆಟ್ ನೀಡಿದೆ. ಇದಕ್ಕೂ ಮುನ್ನ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಫೀಲ್ಡಿಂಗ್ ಆಯ್ದುಕೊಂಡರು. ಅದರಂತೆ ಕ್ರೀಸ್ಗಿಳಿದ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಭಾರತಕ್ಕೆ ಉತ್ತಮ ಆರಂಭ ಒದಗಿಸಿದರು.
ಮೊದಲ ವಿಕೆಟ್ಗೆ ಶತಕದ ಜೊತೆಯಾಟವಾಡಿದ ಈ ಜೋಡಿ ತಂಡದ ಮೊತ್ತಕ್ಕೆ ಭದ್ರ ಅಡಿಪಾಯ ಹಾಕಿಕೊಟ್ಟರು. ಈ ನಡುವೆ ಶಿಖರ್ ಧವನ್ ಅರ್ಧಶತಕ ಬಾರಿಸಿ ಮಿಂಚಿದರು. ಆದರೆ ಶತಕದ ಜೊತೆಯಾಟದ ಬೆನ್ನಲ್ಲೇ ಆದಿಲ್ ರಶೀದ್ ಎಸೆತವನ್ನು ಗುರುತಿಸುವಲ್ಲಿ ಎಡವಿದ ರೋಹಿತ್ ಶರ್ಮಾ (37) ಕ್ಲೀನ್ ಬೌಲ್ಡ್ ಆದರು. ಇದರ ಬೆನ್ನಲ್ಲೇ 56 ಎಸೆತಗಳಲ್ಲಿ 10 ಬೌಂಡರಿಗಳೊಂದಿಗೆ 67 ರನ್ ಬಾರಿಸಿದ್ದ ಶಿಖರ್ ಧವನ್ ವಿಕೆಟ್ ಪಡೆಯುವಲ್ಲಿ ಆದಿಲ್ ರಶೀದ್ ಯಶಸ್ವಿಯಾದರು.
ಈ ಹಂತದಲ್ಲಿ ಜೊತೆಗೂಡಿದ ವಿರಾಟ್ ಕೊಹ್ಲಿ ಹಾಗೂ ರಿಷಭ್ ಪಂತ್ ಮೇಲೆ ಹೆಚ್ಚಿನ ನಿರೀಕ್ಷೆಯಿತ್ತು. ಆದರೆ 7 ರನ್ಗಳಿಸಿದ್ದ ವೇಳೆ ಮೊಯೀನ್ ಅಲಿ ಎಸೆದ ಮ್ಯಾಜಿಕ್ ಎಸೆತಕ್ಕೆ ಕೊಹ್ಲಿ ಕ್ಲೀನ್ ಬೌಲ್ಡ್ ಆದರು. ನಾಯಕನ ಬೆನ್ನಲ್ಲೇ ಕೆಎಲ್ ರಾಹುಲ್ (7) ಸಹ ವಿಕೆಟ್ ಒಪ್ಪಿಸಿ ನಿರ್ಗಮಿಸಿದರು. ಈ ಹಂತದಲ್ಲಿ ಇಂಗ್ಲೆಂಡ್ ಬೌಲರುಗಳು ಮೇಲುಗೈ ಸಾಧಿಸಿದರು.
ಆದರೆ ಈ ವೇಳೆ ಜೊತೆಯಾದ ಪಂತ್-ಹಾರ್ದಿಕ್ ಪಾಂಡ್ಯ ಜೋಡಿ ಉತ್ತಮ ಜೊತೆಯಾಟದ ಮೂಲಕ ಮತ್ತೆ ಪಂದ್ಯವನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡರು. ಅಲ್ಲದೆ 6ನೇ ವಿಕೆಟ್ಗೆ 99 ರನ್ಗಳನ್ನು ಪೇರಿಸಿದರು. ಇತ್ತ ರಿಷಭ್ ಪಂತ್ ಬಿರುಸಿನ ಅರ್ಧಶತಕ ಪೂರೈಸಿದರು. ತಂಡದ ಮೊತ್ತ 36 ಓವರ್ನಲ್ಲಿ 256 ಆಗಿದ್ದ ವೇಳೆ 62 ಎಸೆತಗಳಲ್ಲಿ 4 ಭರ್ಜರಿ ಸಿಕ್ಸರ್ ಹಾಗೂ 5 ಬೌಂಡರಿಗಳೊಂದಿಗೆ 78 ರನ್ಗಳಿಸಿದ್ದ ಪಂತ್, ಸ್ಯಾಮ್ ಕರ್ರನ್ ಎಸೆತದಲ್ಲಿ ವಿಕೆಟ್ ಕೀಪರ್ ಕ್ಯಾಚ್ ನೀಡಿ ಪೆವಿಲಿಯನ್ ಕಡೆ ಮುಖ ಮಾಡಿದರು.
ಮತ್ತೊಂದು ಬದಿಯಲ್ಲಿದ್ದ ಹಾರ್ದಿಕ್ ಪಾಂಡ್ಯ ಕೂಡ ಬಿರುಸಿನ ಬ್ಯಾಟಿಂಗ್ ಮೂಲಕ ಅರ್ಧಶತಕ ಬಾರಿಸಿ ಬ್ಯಾಟ್ ಮೇಲೆಕ್ಕೆತ್ತಿದರು. ಇದಾಗಿ ಕೆಲ ಹೊತ್ತಿನಲ್ಲೇ 4 ಸಿಕ್ಸರ್ ಹಾಗೂ 5 ಬೌಂಡರಿಗಳೊಂದಿಗೆ 64 ರನ್ ಬಾರಿಸಿ ಅಪಾಯಕಾರಿಯಾಗುವ ಸೂಚನೆ ನೀಡಿದ್ದ ಪಾಂಡ್ಯ, ಸ್ಟೋಕ್ಸ್ ಎಸೆತದಲ್ಲಿ ಬೌಲ್ಡ್ ಆದರು. ಈ ಹಂತದಲ್ಲಿ ಜೊತೆಗೂಡಿದ ಕೃನಾಲ್ ಪಾಂಡ್ಯ ಹಾಗೂ ಶಾರ್ದುಲ್ ಠಾಕೂರ್ ಕೊನೆಯ 11 ಓವರ್ಗಳನ್ನು ಆಡುವ ಜವಾಬ್ದಾರಿ ವಹಿಸಿಕೊಂಡರು. ಅಲ್ಲದೆ 44ನೇ ಓವರ್ನಲ್ಲಿ ತಂಡದ ಮೊತ್ತವನ್ನು 300ರ ಗಡಿದಾಟಿಸಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ