ಭಾರತ ಮತ್ತು ಇಂಗ್ಲೆಂಡ್ ನಡುವಣ ಐದು ಪಂದ್ಯಗಳ ಟಿ20 ಸರಣಿಯ ಮೂರನೇ ಪಂದ್ಯವು ಇಂದು ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೊದಲ ಪಂದ್ಯದಲ್ಲಿ ಎಂಟು ವಿಕೆಟ್ಗಳಿಂದ ಹೀನಾಯವಾಗಿ ಸೋತಿದ್ದ ಭಾರತ, 2ನೇ ಪಂದ್ಯದಲ್ಲಿ ಏಳು ವಿಕೆಟ್ಗಳ ಭರ್ಜರಿ ಜಯ ಸಾಧಿಸಿ ಕಂಬ್ಯಾಕ್ ಮಾಡಿತು. ಇದೀಗ 1-1ರಿಂದ ಸರಣಿ ಸಮಬಲವಾಗಿದ್ದು, ಹೀಗಾಗಿ ಇಂದಿನ ಪಂದ್ಯದಲ್ಲಿ ಗೆಲ್ಲುವ ಮೂಲಕ ಸರಣಿಯಲ್ಲಿ ಮುನ್ನಡೆ ಸಾಧಿಸಲು ಉಭಯ ತಂಡಗಳು ಪಣತೊಟ್ಟಿದೆ.
ಇನ್ನು ಇಂದಿನ ಪಂದ್ಯದಲ್ಲಿ ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಸಾಧ್ಯತೆತಿದ್ದು, ಉಳಿದಂತೆ 2ನೇ ಪಂದ್ಯದಲ್ಲಿ ಕಣಕ್ಕಿಳಿದ ಆಟಗಾರರೇ ಇಂದು ಕೂಡ ಮೈದಾನಕ್ಕಿಳಿಯುವ ಸಾಧ್ಯತೆಯಿದೆ. ಅದರಂತೆ ಮೊದಲ ಎರಡು ಪಂದ್ಯಗಳಿಂದ ವಿಶ್ರಾಂತಿ ಪಡೆದಿದ್ದ ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಇಂದು ಆಡುವ ಸಾಧ್ಯತೆಯಿದೆ. ಒಂದು ವೇಳೆ ಹಿಟ್ಮ್ಯಾನ್ ತಂಡದಲ್ಲಿ ಸ್ಥಾನ ಪಡೆದರೆ, ಆರಂಭಿಕರಾಗಿ ಕಣಕ್ಕಿಳಿಯುತ್ತಿರುವ ಕೆಎಲ್ ರಾಹುಲ್ ತಂಡದಿಂದ ಹೊರಗುಳಿಯಬೇಕಾಗುತ್ತದೆ.
ಕೆಎಲ್ ರಾಹುಲ್ ಕಳೆದ ಎರಡು ಪಂದ್ಯಗಳಲ್ಲಿ ವೈಫಲ್ಯ ಹೊಂದಿದ್ದು, ಹಾಗೆಯೇ ಮತ್ತೋರ್ವ ಆರಂಭಿಕ ಶಿಖರ್ ಧವನ್ ಸಹ ಮೊದಲ ಪಂದ್ಯದಲ್ಲಿ ರನ್ಗಳಿಸಲು ವಿಫಲರಾಗಿದ್ದರು. ಇತ್ತ ಶಿಖರ್ ಧವನ್ ಸ್ಥಾನದಲ್ಲಿ ಅವಕಾಶ ಪಡೆದ ಇಶಾನ್ ಕಿಶನ್ ಚೊಚ್ಚಲ ಪಂದ್ಯದಲ್ಲೇ ಅರ್ಧಶತಕ ಬಾರಿಸಿ ಮಿಂಚಿದ್ದಾರೆ. ಹೀಗಾಗಿ ಇಂದು ಕೂಡ ಇಶಾನ್ ಕಿಶನ್ ಓಪನರ್ ಆಗಿ ಕಣಕ್ಕಿಳಿಯಲಿದ್ದು, ರಾಹುಲ್ ಸ್ಥಾನದಲ್ಲಿ ರೋಹಿತ್ ಬರುವ ಸಾಧ್ಯತೆ ಹೆಚ್ಚಿದೆ.
ಉಳಿದ ವಿರಾಟ್ ಕೊಹ್ಲಿ, ರಿಷಭ್ ಪಂತ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ವಾಷಿಂಗ್ಟನ್ ಸುಂದರ್, ಶಾರ್ದುಲ್ ಠಾಕೂರ್, ಭುವನೇಶ್ವರ್ ಕುಮಾರ್ ಮತ್ತು ಯಜ್ವೇಂದ್ರ ಚಹಲ್ ಬೌಲರುಗಳಾಗಿ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಹೆಚ್ಚಿದೆ.
ಉಭಯ ಸಂಭಾವ್ಯ ತಂಡ ಹೀಗಿದೆ:
ಭಾರತದ: ರೋಹಿತ್ ಶರ್ಮಾ, ಇಶಾನ್ ಕಿಶನ್, ವಿರಾಟ್ ಕೊಹ್ಲಿ (ನಾಯಕ), ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದುಲ್ ಠಾಕೂರ್, ಭುವನೇಶ್ವರ್ ಕುಮಾರ್, ಯಜ್ವೇಂದ್ರ ಚಹಲ್.
ಇಂಗ್ಲೆಂಡ್: ಜೇಸನ್ ರಾಯ್, ಜೋಸ್ ಬಟ್ಲರ್ (ವಿಕೆಟ್ಕೀಪರ್), ಡೇವಿಡ್ ಮಲಾನ್, ಜಾನಿ ಬೈರ್ಸ್ಟೋವ್, ಇಯಾನ್ ಮೋರ್ಗಾನ್ (ನಾಯಕ), ಬೆನ್ ಸ್ಟೋಕ್ಸ್, ಸ್ಯಾಮ್ ಕರ್ರನ್, ಜೋಫ್ರಾ ಆರ್ಚರ್, ಟಾಮ್ ಕರ್ರನ್, ಕ್ರಿಸ್ ಜೋರ್ಡನ್, ಆದಿಲ್ ರಶೀದ್.
ಪಿಚ್ ರಿಪೋರ್ಟ್:
ಮೊದಲೆರಡು ಟಿ20 ಪಂದ್ಯಗಳಿಂದ ನರೇಂದ್ರ ಮೋದಿ ಕ್ರೀಡಾಂಗಣದ ಪಿಚ್ ಬ್ಯಾಟ್ಸ್ಮನ್ಗಳಿಗೆ ಅನುಕೂಲಕರವಾಗಿದೆ ಎಂಬುದು ಸ್ಪಷ್ಟವಾಗಿದೆ. ಅದರಲ್ಲೂ ದ್ವಿತೀಯ ಇನ್ನಿಂಗ್ಸ್ನಲ್ಲಿ ಬ್ಯಾಟ್ ಬೀಸುವ ತಂಡ ಗೆಲ್ಲುವ ಸಾಧ್ಯತೆ ಹೆಚ್ಚು. ಇನ್ನು ಮೊದಲ ಇನಿಂಗ್ಸ್ನಲ್ಲಿ 170 ಕ್ಕೂ ಅಧಿಕ ರನ್ ಬಾರಿಸಿದರೆ ಮಾತ್ರ ಕಠಿಣ ಪೈಪೋಟಿ ನೀಡಬಹುದು.
ಪಂದ್ಯದ ಸಮಯ: ಸಂಜೆ 7
ಸ್ಥಳ: ಅಹ್ಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂ.
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಟಿವಿ, ಏರ್ಟೆಲ್ ಟಿವಿ, ಹಾಟ್ಸ್ಟಾರ್
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ