ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಮ್ಯಾಚ್ ಶುರುವಾಗಿದೆ. ಟಾಸ್ ಗೆದ್ದಿರುವ ಇಂಗ್ಲೆಂಡ್ ನಾಯಕ ಬೌಲಿಂಗ್ ಆಯ್ದುಕೊಂಡಿದ್ದಾರೆ. ಟೀಮ್ ಇಂಡಿಯಾ ಇಬ್ಬರು ಹೊಸ ಆಟಗಾರರು ಸ್ಥಾನ ಪಡೆದಿದ್ದು, ಕೃನಾಲ್ ಪಾಂಡ್ಯ ಹಾಗೂ ಕನ್ನಡಿಗ ಪ್ರಸಿದ್ಧ್ ಕೃಷ್ಣ ಈ ಪಂದ್ಯದೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದಾರೆ. ಹಾಗೆಯೇ ವಿಕೆಟ್ ಕೀಪರ್ ಜವಾಬ್ದಾರಿಯೊಂದಿಗೆ ಕೆಎಲ್ ರಾಹುಲ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಇದರ ಹೊರತಾಗಿ ಭಾರತ ತಂಡದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಕಣಕ್ಕಿಳಿದಿದ್ದಾರೆ. ಹಾಗೆಯೇ ಮೂರನೇ ಕ್ರಮಾಂಕದಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಡಲಿದ್ದಾರೆ. ಇನ್ನು 4ನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಇದ್ದಾರೆ. ಇನ್ನು ಆಸ್ಟ್ರೇಲಿಯಾ ವಿರುದ್ಧದ ಸರಣಿ ವೇಳೆ 5ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದ ಕೆಎಲ್ ರಾಹುಲ್ ಇಂಗ್ಲೆಂಡ್ ವಿರುದ್ಧ ಕೂಡ ಅದೇ ಸ್ಥಾನದಲ್ಲಿ ಕಣಕ್ಕಿಳಿಯಲಿದ್ದಾರೆ.
ಆಲ್ರೌಂಡರ್ ಆಟಗಾರನಾಗಿ ಕೃನಾಲ್ ಪಾಂಡ್ಯ, ಹಾರ್ದಿಕ್ ಪಾಂಡ್ಯ ಜೊತೆ ತಂಡದಲ್ಲಿ ಸ್ಥಾನ ಪಡೆದರೆ, ವೇಗಿಯಾಗಿ ಭುವನೇಶ್ವರ್ ಕುಮಾರ್ ಹಾಗೂ ಪ್ರಸಿದ್ಧ್ ಕೃಷ್ಣ ತಂಡದಲ್ಲಿದ್ದಾರೆ. ಇದರ ಜೊತೆ ಏಕೈಕ ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಟೀಮ್ ಇಂಡಿಯಾ ಪರ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಕಣಕ್ಕಿಳಿದಿದ್ದು, ಮೊದಲ ಹತ್ತು ಓವರ್ನಲ್ಲಿ ಟೀಮ್ ಇಂಡಿಯಾ ಯಾವುದೇ ವಿಕೆಟ್ ನಷ್ಟವಿಲ್ಲದೆ 39 ರನ್ಗಳಿಸಿದೆ.
ಇಂಗ್ಲೆಂಡ್ ವಿರುದ್ಧ ಟೆಸ್ಟ್ ಹಾಗೂ ಟಿ20 ಸರಣಿ ಗೆದ್ದಿರುವ ಹುಮ್ಮಸ್ಸಿನಲ್ಲಿರುವ ಟೀಮ್ ಇಂಡಿಯಾ ಏಕದಿನ ಸರಣಿಯನ್ನು ವಶಪಡಿಸಿಕೊಳ್ಳುವ ವಿಶ್ವಾಸದಲ್ಲಿದೆ. ಅತ್ತ ಇಂಗ್ಲೆಂಡ್ ತಂಡ ಏಕದಿನ ಸರಣಿ ಜಯಿಸುವ ಮೂಲಕ ಸಿರೀಸ್ ವೈಟ್ವಾಶ್ ತಪ್ಪಿಸಿಕೊಳ್ಳುವ ತವಕದಲ್ಲಿದೆ.
ಉಭಯ ತಂಡಗಳು ಹೀಗಿವೆ:-
ಭಾರತದ ತಂಡ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮ, ಶಿಖರ್ ಧವನ್, ಶ್ರೇಯಸ್ ಅಯ್ಯರ್, ಕೆ ಎಲ್ ರಾಹುಲ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ, ಕೃಣಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಕುಲ್ದೀಪ್ ಯಾದವ್, ಪ್ರಸಿದ್ಧ್ ಕೃಷ್ಣ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ